ಗುರುಗ್ರಾಮ್, ಅ. 29: ಕ್ಷಯರೋಗದಿಂದಾಗಿ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಾಗಿದ್ದ 21 ವರ್ಷದ ಮಹಿಳೆ ಮೇಲೆ ಅತ್ಯಾಚಾರ ಎಸಗಲಾಗಿದೆ ಎಂದು ದೆಹಲಿ ಸಮೀಪದ ಗುರುಗ್ರಾಮ್ ಪೊಲೀಸರು ತಿಳಿಸಿದ್ದಾರೆ.
ಮಹಿಳೆ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂದು ಅವರ ತಂದೆ ಬಳಿ ಹೇಳಿಕೊಂಡಿದ್ದಾರೆ ಎನ್ನಲಾಗಿದೆ.
ಮಹಿಳೆ ಅಕ್ಟೋಬರ್ 21 ರಂದು ಆಸ್ಪತ್ರೆಗೆ ದಾಖಲಾಗಿ ವೆಂಟಿಲೇಟರ್‌ನಲ್ಲಿದ್ದರು. ಸುಶಾಂತ್ ಲೋಕ್ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. ಮಹಿಳೆ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ.
ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ವಿಕಾಸ್ ಎಂಬ ವ್ಯಕ್ತಿಯಿಂದ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಆಗಿದೆ ಎಂದು ಮಹಿಳೆ ಹೇಳಿದ್ದು, ಪೊಲೀಸರು ಆರೋಪಿ ಪತ್ತೆ ಕಾರ್ಯಾಚರಣೆಯಲ್ಲಿದ್ದಾರೆ. ಆಕೆ ಅಕ್ಟೋಬರ್ 21ರಿಂದ 27ರವರೆಗೆ ನಿರಂತರ ದೌರ್ಜನ್ಯಕ್ಕೆ ಒಳಗಾಗಿದ್ದಾರೆ ಎಂದು ಮಹಿಳೆ ತಂದೆ ಪೊಲೀಸರಿಗೆ ದೂರು ನೀಡಿದ್ದಾರೆ. ಸರ್ಕಾರಿ ಆಸ್ಪತ್ರೆಯಲ್ಲಿ ಆಕೆಗೆ ವೈದ್ಯಕೀಯ ಪರೀಕ್ಷೆ ನಡೆಸಬೇಕು ಎಂದು ಪೋಷಕರು ಆಗ್ರಹಿಸಿದ್ದಾರೆ. ದೂರು ದಾಖಲಾದ ನಂತರ ಮಹಿಳೆಯಿಂದ ಹೇಳಿಕೆ ಪಡೆಯಲು ಪೊಲೀಸರು ಆಸ್ಪತ್ರೆಗೆ ಭೇಟಿ ನೀಡಿದಾಗ, ಆಕೆ ಮಾತನಾಡುವ ಸ್ಥಿತಿಯಲ್ಲಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.
ʻಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿದ್ದೇವೆ. ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ವಿಕಾಸ್ ಪತ್ತೆ ಮಾಡಲಾಗುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆಯಿಂದ ಹೇಳಿಕೆ ಪಡೆದು ವಿಷಯವನ್ನು ಸಷ್ಟಪಡಿಸಿಕೊಳ್ಳಲಾಗುವುದು. ಅಲ್ಲದೇ, ಸಿಸಿಟಿವಿ ಫೂಟೇಜ್‌ಗಳನ್ನೂ ಪರಿಶೀಲನೆ ನಡೆಸಲಾಗುತ್ತಿದೆʼ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.