ರಾಜ್ಯದಲ್ಲಿ ಹಿಂದೆಂದೂ ಕಂಡರಿಯದಂತಹ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಕೇಂದ್ರ ಸರ್ಕಾರ ರಾಷ್ಟ್ರೀಯ ವಿಕೋಪವೆಂದು ಘೋಷಣೆ ಮಾಡಿ ಮಧ್ಯಂತರ ಪರಿಹಾರವಾಗಿ 5ಸಾವಿರ ಕೋಟಿ ರೂ. ಬಿಡುಗಡೆ ಮಾಡಬೇಕೆಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಒತ್ತಾಯಿಸಿದರು.
ದೇವೇಗೌಡ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು ರಾಜ್ಯದ 17 ಜಿಲ್ಲೆಗಳ 80 ತಾಲೂಕುಗಳಲ್ಲಿ ಭಾರೀ ಪ್ರವಾಹದಿಂದಾಗಿ ಉಂಟಾಗಿರುವ ಹಾನಿಯನ್ನು ವಿವರಿಸಿದ್ದಾರೆ. ಇದೇ ವೇಳೆ ಪರಿಹಾರ ನಿಧಿಯನ್ನು ಬಿಡುಗಡೆ ಮಾಡಬೇಕೆಂದು ಮನವಿ ಮಾಡಿದ್ದಾರೆ.
ರಾಜ್ಯದ ಹತ್ತು ಪ್ರಮುಖ ನದಿಗಳು ಉಕ್ಕಿವೆ. 15 ಕ್ಕೂ ಹೆಚ್ಚು ಜಲಾಶಯಗಳಿಂದ ನೀರು ಬಿಡಲಾಗಿದೆ. ಇದರಿಂದಾಗಿ ಸಾರ್ವಜನಿಕ ಮತ್ತು ಖಾಸಗಿ ಆಸ್ತಿ ಪಾಸ್ತಿ ನಷ್ಟ ಆಗಿವೆ. ಆಲಮಟ್ಟಿ , ಕಬಿನಿ , ಕೆಆರ್ ಎಸ್, ಮಲಪ್ರಭಾ, ಘಟಪ್ರಭಾ ಸೇರಿದಂತೆ 15 ಕ್ಕೂ ಹೆಚ್ಚು ಡ್ಯಾಮ್ಗಳಿಂದ ಅಪಾರ ಪ್ರಮಾಣದಲ್ಲಿ ನೀರು ಬಿಡಲಾಗಿದೆ. ಸುಮಾರು 2 ಕೋಟಿ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ರಾಜ್ಯದಲ್ಲಿ ಉಂಟಾದ ಅತಿವೃಷ್ಠಿಯನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಣೆ ಮಾಡಿ. ರಾಜ್ಯಕ್ಕೆ ತುರ್ತಾಗಿ 5 ಸಾವಿರ ಕೋಟಿ ಬಿಡುಗಡೆ ಮಾಡಿ ಎಂದು ಪ್ರಧಾನಿ ಮೋದಿಗೆ ಮಾಜಿ ಪ್ರಧಾನಿ ದೇವೇಗೌಡ ಪತ್ರ ಮುಖೇನ ಮನವಿ ಮಾಡಿದ್ದಾರೆ.