ಅತಿವೃಷ್ಟಿಯಿಂದಾಗಿ ಇಡೀ ರಾಜ್ಯವೇ ತತ್ತರಿಸಿದ್ದರೂ, ಸರ್ಕಾರ ಬೆಂಗಳೂರು ಗಲಭೆಯ ಬೆಂಕಿಯಲ್ಲಿ ರಾಜಕೀಯ ರೊಟ್ಟಿ ಬಡಿಯುತ್ತಾ ಕೂತಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ರಾಜ್ಯದಲ್ಲಿ ಕಳೆದ ವರ್ಷ ಅತಿವೃಷ್ಟಿಯಿಂದ ತೊಂದರೆಗೆ ಒಳಗಾದ ಜನರಿಗೆ ಸೂಕ್ತ ಪರಿಹಾರ ನೀಡದ ಹಿನ್ನೆಲೆಯಲ್ಲಿ ಜನರ ಸಮಸ್ಯೆ ದುಪ್ಪಟ್ಟಾಗಿದೆ. ಆದರೂ ಸರ್ಕಾರ ಹಾಗೂ ಕಂದಾಯ ಸಚಿವರು ಅತಿವೃಷ್ಟಿಯಿಂದ ಕಂಗೆಟ್ಟ ಜನರಿಗೆ ಪರಿಹಾರ ಕೊಡುವ ಬದಲು ಬೆಂಗಳೂರು ಗಲಭೆ ಪ್ರಕರಣದ ಬಗ್ಗೆ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಅವರಿಗೆ ಬೆಂಗಳೂರಿನಲ್ಲಿ ಏನು ಕೆಲಸ? ಮುಖ್ಯಮಂತ್ರಿಗಳು ಮೊದಲು ಕಂದಾಯ ಸಚಿವರನ್ನು ಪ್ರವಾಹ ಪೀಡಿತ ಪ್ರದೇಶಕ್ಕೆ ಕಳುಹಿಸಿಕೊಡಬೇಕೆಂದು ಟ್ವೀಟ್ ಮೂಲಕ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಅಲ್ಲದೇ ಕೋವಿಡ್ ಸೋಂಕಿನ ನಂತರ ಕಡ್ಡಾಯ ವಿಶ್ರಾಂತಿಯಲ್ಲಿ ಇರುವುದರಿಂದ ಕ್ಷೇತ್ರಕ್ಕೆ ಭೇಟಿ ನೀಡುವ ಸ್ಥಿತಿಯಲ್ಲಿ ನಾನಿಲ್ಲ, ಇದಕ್ಕಾಗಿ ಕ್ಷಮೆ ಇರಲಿ. ಅಧಿಕಾರಿಗಳು ಮತ್ತು ನಮ್ಮ ಪಕ್ಷದ ನಾಯಕರ ಜೊತೆ ನಿರಂತರ ಸಂಪರ್ಕದಲ್ಲಿದ್ದೇನೆ ಎಂದು ಹೇಳಿದ್ದಾರೆ.