ನಾನು ಆರೋಗ್ಯವಾಗಿದ್ದೇನೆ, ಯಾರೂ ಆತಂಕಪಡುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯೂಡಿಯೂರಪ್ಪ ಹೇಳಿದ್ದಾರೆ.
ಕೊರೊನಾ ಪಾಸಿಟಿವ್ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಾಗಿರುವ ಸಿಎಂ, ರಾಜ್ಯದ ಜನತೆಗೆ ಆಸ್ಪತ್ರೆಯಿಂದಲೇ ವೀಡಿಯೋ ಸಂದೇಶ ಬಿಡುಗಡೆ ಮಾಡಿದ್ದಾರೆ. ವೈದ್ಯಕೀಯ ತಪಾಸಣೆ ವೇಳೆ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದರಿಂದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರನ್ನು ನಿನ್ನೆ ರಾತ್ರಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯರು ತಪಾಸಣೆ ಮಾಡಿ ಯಾವುದೇ ರೀತಿಯ ಆರೋಗ್ಯ ಸಮಸ್ಯೆ ಇಲ್ಲ ಎಂದು ಹೇಳಿದ್ದಾರೆ.
ನನ್ನ ಆರೋಗ್ಯದ ಬಗ್ಗೆ ಕಾಳಜಿ ತೋರಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಸಚಿವೆ ನಿರ್ಮಲ ಸೀತಾರಾಮನ್, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು, ಸಿದ್ದರಾಮಯ್ಯ, ಕುಮಾರಸ್ವಾಮಿ ಸೇರಿದಂತೆ ಹಲವು ಮಠಾಧೀಶರು ಹಾರೈಸಿದ್ದು, ಎಲ್ಲರಿಗೂ ಧನ್ಯವಾದ ತಿಳಿಸುತ್ತೇನೆ. ಎಲ್ಲಾ ಅಧಿಕಾರಿಗಳೊಂದಿಗೆ ಮಾತನಾಡಿ ಸರ್ಕಾರದ ಕೆಲಸಗಳಿಗೆ ಅಡ್ಡಿಯಾಗದಂತೆ ನಿಗಾವಹಿಸಿದ್ದೇನೆ. ಶೀಘ್ರವೇ ನಾನು ಗುಣಮುಖನಾಗಿ ಬಂದು ಎಂದಿನಂತೆ ಕೆಲಸ ಕಾರ್ಯಗಳಲ್ಲಿ ತೊಡಗುತ್ತೇನೆ ಎಂದಿರುವ ಮುಕ್ಯಮಂತ್ರಿಗಳು, ರಾಜ್ಯದ ಜನರೆಲ್ಲರೂ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಂಡು ನಿಮ್ಮ ಸುರಕ್ಷತೆಯ ಬಗ್ಗೆ ಗಮನಹರಿಸಿ ಎಂದು ಮನವಿ ಮಾಡಿದ್ದಾರೆ.