ಬೆಂಗಳೂರು, ನ. 13: , 24 ಗಂಟೆ ಕಾರ್ಯನಿರ್ವಹಿಸುವ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಸೇರಿದಂತೆ ಎಲ್ಲಾ ಹಂತದ ಆರೋಗ್ಯ ವ್ಯವಸ್ಥೆಗೆ ಕಾಯಕಲ್ಪ ನೀಡಲು ಶೀಘ್ರವೇ ಹೊಸ ಆರೋಗ್ಯ ನೀತಿ ರೂಪಿಸಲು ಸರ್ಕಾರ ಮುಂದಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.
ವೈದ್ಯಕೀಯ ಹಿನ್ನೆಲೆಯ ಶಾಸಕರು, ಆರೋಗ್ಯ ಇಲಾಖೆ ಮಾಜಿ ಸಚಿವರ ಜೊತೆಗೆ ಸಭೆ ನಡೆಸಿದ ಅವರು, ಸುದ್ದಿಗಾರರೊಂದಿಗೆ ಮಾತನಾಡಿ, ಗುಣಮಟ್ಟದ ಆರೋಗ್ಯ ಸೇವೆ, ಸಮಸ್ಯೆಗಳ ನಿವಾರಣೆ, ಯೋಜನೆಗಳ ಸಮರ್ಪಕ ಅನುಷ್ಠಾನ ಮೊದಲಾದ ವಿಷಯಗಳ ಬಗ್ಗೆ ಚರ್ಚಿಸಲಾಗಿದ್ದು, ಮುಖ್ಯಮಂತ್ರಿ ಯಡಿಯೂರಪ್ಪನವರ ಆಶಯದಂತೆ ಕ್ರಮಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಆರೋಗ್ಯ ಸಿಬ್ಬಂದಿ ವೇತನ, ಬಡ್ತಿ ಮೊದಲಾದ ಸೌಲಭ್ಯವನ್ನು ಕೂಡ ನೀತಿ ಒಳಗೊಳ್ಳಲಿದೆ. ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ 24 ತಾಸು ಕಾರ್ಯನಿರ್ವಹಿಸಲು ಪೂರಕವಾದ ವ್ಯವಸ್ಥೆ ಕಲ್ಪಿಸಲಾಗುವುದು. ಸಮುದಾಯ ಆರೋಗ್ಯ ಕೇಂದ್ರಗಳನ್ನು ಉನ್ನತಿಕರಣಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.