ಕಲಬುರ್ಗಿ, ಅ. 21: ಉತ್ತರ ಕರ್ನಾಟಕದ ಭಾಗದಲ್ಲಿ ಇತ್ತೀಚೆಗೆ ಸುರಿದ ಭಾರೀ ಮಳೆಯಿಂದ ಉಂಟಾದ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವೈಮಾನಿಕ ಸಮೀಕ್ಷೆ ನಡೆಸಿದರು.
ಪ್ರಮುಖವಾಗಿ ಕಲಬುರ್ಗಿ, ವಿಜಯಪುರ ಜಿಲ್ಲೆಗಳ ಪ್ರವಾಹ ಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಿದ ಮುಖ್ಯಮಂತ್ರಿಗಳು ಪ್ರವಾಹದಿಂದ ಉಂಟಾಗಿರುವ ಹಾನಿಯ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಪಶುಸಂಗೋಪನೆ ಸಚಿವ ಪ್ರಭು ಚೌಹಾಣ್ ಹಾಗೂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಆಯುಕ್ತ ಮನೋಜ್ ರಾಜನ್ ಸಾಥ್ ನೀಡಿದರು.
ಇದಕ್ಕೂ ಮುನ್ನ ಬಳ್ಳಾರಿಯ ಜಿಂದಾಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಂದರ್ಭದಲ್ಲಿ ಸಚಿವ ಪ್ರಭು ಚೌಹಾಣ್ ಹಾಗೂ ಜಿಲ್ಲಾಡಳಿತದ ವತಿಯಿಂದ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಸ್ವಾಗತಿಸಲಾಯಿತು.
ಈಗಾಗಲೇ ಅತಿವೃಷ್ಟಿ ಹಾಗೂ ಪ್ರವಾಹದಿಂದ ನಲುಗಿ ಹೋಗಿರುವ ಜನರಿಗೆ ರಾಜ್ಯ ಸರ್ಕಾರವು ಪರಿಹಾರ ಘೋಷಣೆ ಮಾಡಿದೆಯಾದರೂ, ಸಿಎಂ ವೈಮಾನಿಕ ಸಮೀಕ್ಷೆಯ ಬಳಿಕ ಏನಾದರೂ ಪ್ರತಿಕ್ರಿಯೆ ನೀಡಬಹುದೆಂಬ ನಿರೀಕ್ಷೆಯಲ್ಲಿದ್ದ ಜನರಿಗೆ ನಿರಾಸೆ ಉಂಟಾಗಿದೆ. ಏಕೆಂದರೆ ಈಶಾನ್ಯ ಕರ್ನಾಟಕದಲ್ಲಿ ಉಪಚುನಾವಣೆ ನಡೆಯುತ್ತಿದ್ದು, ಸಿಎಂ ಯಾವುದೇ ಚರ್ಚೆಗಳನ್ನು, ಮಿಟಿಂಗ್ ಗಳನ್ನು ನಡೆಸುವಂತಿಲ್ಲ ಎಂಬ ನಿಯಮ ಚುನಾವಣಾ ನೀತಿ ಸಂಹಿತೆಯಲ್ಲಿ ಉಲ್ಲೇಖವಾದ್ದರಿಂದ ಇಲ್ಲಿಯವರೆಗೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.