ಮಾಜಿ ಐಪಿಎಸ್ ಅಧಿಕಾರಿ ಕೆ.ಅಣ್ಣಾಮಲೈ ಮಂಗಳವಾರ ದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಪಕ್ಷಕ್ಕೆ ಸೇರ್ಪಡೆಯಾದರು.
ಈ ವೇಳೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪಿ.ಮುರಳಿಧರ್ ರಾವ್ ಹಾಗೂ ತಮಿಳುನಾಡು ಬಿಜೆಪಿ ಅಧ್ಯಕ್ಷ ಎಲ್.ಮುರುಗನ್ ಉಪಸ್ಥಿತರಿದ್ದರು. 2021ರಲ್ಲಿ ನಡೆಯುವ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಅಣ್ಣಾಮಲೈ ಸ್ಪರ್ಧಿಸುವ ಸಾಧ್ಯತೆಗಳಿವೆ.
ಐಪಿಎಸ್ ಹುದ್ದೆಗೆ ರಾಜೀನಾಮೆ ನೀಡಿದ್ದ ಮಾಜಿ ಅಧಿಕಾರಿ ಅಣ್ಣಾಮಲೈ ಬಿಜೆಪಿಗೆ ಸೇರ್ಪಡೆಗೊಂಡಿರುವುದಕ್ಕೆ ರಾಜ್ಯ ಬಿಜೆಪಿ ನಾಯಕರು ಸಂತಸ ವ್ಯಕ್ತಪಡಿಸಿದ್ದಾರೆ.
ಪೋಲಿಸ್ ಇಲಾಖೆಯಲ್ಲಿ ತಮ್ಮ ದಕ್ಷತೆಗೆ, ಕಾರ್ಯತತ್ಪರತೆಗೆ ಹೆಸರಾಗಿದ್ದ ಅಣ್ಣಾಮಲೈ ಮಂಗಳವಾರ ದೆಹಲಿಯಲ್ಲಿ ಬಿಜೆಪಿಗೆ ಸೇರಿಕೊಂಡಿದ್ದಾರೆ. ಈ ಬಗ್ಗೆ ಸಚಿವರಾದ ಸುರೇಶ್ ಕುಮಾರ್, ಡಾ. ಸುಧಾಕರ್, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟಿಲ್, ಸಂಸದರಾದ ಶೋಭಾ ಕರಂದ್ಲಾಜೆ, ಪ್ರತಾಪ್‍ಸಿಂಹ ಸೇರಿದಂತೆ ಹಲವರು ಹರ್ಷ ವ್ಯಕ್ತಪಡಿಸಿದ್ದಾರೆ.
ಕರ್ನಾಟಕದಲ್ಲಿ ಐಪಿಎಸ್ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಮತ್ತು ಜನಪ್ರಿಯತೆ ಪಡದಿದ್ದ ಅಣ್ಣಾಮಲೈ ಅವರು 2019ರ ಮೇ ತಿಂಗಳಲ್ಲಿ ತಮ್ಮ ಕೆಲಸಕ್ಕೆ ರಾಜೀನಾಮೆ ನೀಡಿ, ಬಿಜೆಪಿಗೆ ಸೇರುವ ಅಭಿಲಾಷೆ ವ್ಯಕ್ತಪಡಿಸಿದ್ದರು. ಅದರಂತೆ ದೆಹಲಿಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಗೊಂಡರು.