ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಹೊರ ಬರುತ್ತಿದ್ದಂತೆ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಪ್ರಮುಖವಾಗಿ ಬಿಜೆಪಿಯ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರ ವಿರುದ್ಧ ಸರಣಿ ಟ್ವೀಟ್ ಮಾಡಿರುವ ಅವರು, ಬಿ.ಎಲ್. ಸಂತೋಷ್ ಅವರು ‘ಹಿಂದುತ್ವ‘ದ ಜಪ ನಿಲ್ಲಿಸಿ ‘ದಲಿತ‘ ಜಪ ಶುರು ಮಾಡಿದ್ದಾರೆ. ‘ಹಿಂದು–ಒಂದು‘ ಎಂದು ಭಜನೆ ಮಾಡ್ತೀರಿ, ಜಾತಿ ಮೂಲದ ತಾರತಮ್ಯ, ಶೋಷಣೆಗಳ ಜೊತೆ ಗುದ್ದಾಡಿ, ದಲಿತರೊಬ್ಬರು ಶಾಸಕರಾದರೂ ಅವರನ್ನು ದಲಿತರೆಂದು ಹಂಗಿಸುತ್ತೀರಿ. ನಿಮ್ಮನ್ನು ಕೂಡಾ ನಿಮ್ಮ ಜಾತಿಯಿಂದಲೇ ಕರೆಯೋಣವೇ? ಎಂದು ಪ್ರಶ್ನಿಸಿದ್ದಾರೆ.
ಅಲ್ಲದೇ ರಾಜ್ಯದಲ್ಲಿ ನಿಮ್ಮದೇ ಪಕ್ಷ ಅಧಿಕಾರದಲ್ಲಿರುವಾಗ ಒಬ್ಬ ದಲಿತ ಶಾಸಕನ ಮನೆಗೆ ರಕ್ಷಣೆ ನೀಡಲು ನಿಮಗೆ ಸಾಧ್ಯವಾಗಿಲ್ಲ, ಇನ್ನು ಕೋಟ್ಯಂತರ ಸಂಖ್ಯೆಯ ಬಡ–ಅಸಹಾಯಕ ದಲಿತರ ಮನೆಗಳಿಗೆ ರಕ್ಷಣೆ ನೀಡಲು ಹೇಗೆ ಸಾಧ್ಯ? ಇದು ತಲೆತಗ್ಗಿಸುವಂತಹ ವೈಫಲ್ಯ ಎಂದು ನಿಮಗನಿಸುವುದಿಲ್ಲವೇ? ದಲಿತರ ಬಗ್ಗೆ ನಿಮ್ಮ ಮೊಸಳೆ ಕಣ್ಣೀರನ್ನು ದೇಶ ಕಂಡಿದೆ. ಸತ್ತ ದನದ ಚರ್ಮ ಸುಲಿದಿದ್ದಕ್ಕೆ, ಗೋಮಾಂಸ ತಿಂದಿದ್ದಕ್ಕೆ, ದೇವಸ್ಥಾನ ಪ್ರವೇಶ ಮಾಡಿದ್ದಕ್ಕೆ, ಕುದುರೆ ಏರಿದ್ದಕ್ಕೆ, ಮೀಸೆ ಬಿಟ್ಟಿದ್ದಕ್ಕೆ… ದಲಿತರ ಬೆನ್ನತ್ತಿ ಹಿಂಸಿಸಿ, ಸಾಯಿಸಿದ್ದು ಯಾರ ಆಡಳಿತದಲ್ಲಿ ಕುಟುಕಿದ್ದಾರೆ.
ಮುಂದುವರಿದು ಪ್ರತಿಕ್ರಿಯೆ ನೀಡಿರುವ ಅವರು, ದಲಿತರು ನಾಯಿಗಳೆಂದು ತುಚ್ಛೀಕರಿಸಿದವರು, ಮೀಸಲಾತಿಯನ್ನು ವಿರೋಧಿಸುತ್ತಿರುವವರು, ಸಂವಿಧಾನವನ್ನು ಬದಲಾಯಿಸಬೇಕು ಎನ್ನುವವರು, ಡಾ.ಅಂಬೇಡ್ಕರ್ ಅವರನ್ನು ಅವಮಾನಿಸುವವರು ಯಾವ ಪಕ್ಷದವರು? ಇಂತಹ ಮನುಷ್ಯ ವಿರೋಧಿಗಳ ವಿರುದ್ಧ ನಿಮ್ಮ ಪಕ್ಷವೇನಾದರೂ ಕ್ರಮಕೈಗೊಂಡಿದೆ? ನಿಮ್ಮ ಕಾಲದಲ್ಲಿ ದಲಿತರ ಹತ್ಯೆ/ದೌರ್ಜನ್ಯ ದುಪ್ಪಟ್ಟಾಗಿದೆ ಎಂದು ವರದಿಯೊಂದು ಹೇಳುತ್ತಿದೆ. ಹೀಗಿದ್ದರೂ ಪರಿಶಿಷ್ಟ ಜಾತಿ/ಪಂಗಡ ದೌರ್ಜನ್ಯ ತಡೆ ಕಾಯ್ದೆಯನ್ನು ದುರ್ಬಲಗೊಳಿಸುವ ಹುನ್ನಾರ ನಡೆಸುತ್ತೀರಿ. ಇದು ನಿಮ್ಮ ದಲಿತರ ಮೇಲಿನ ಕಾಳಜಿಯಲ್ಲವೇ ಎಂದು ಪ್ರಶ್ನಗಳ ಸುರಿಮಳೆಗೈದಿದ್ದಾರೆ.