ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಕೋವಿಡ್-19 ದೃಢಪಟ್ಟಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಈ ಸಂಬಂಧ ಸ್ವತಃ ಟ್ವೀಟ್ ಮಾಡಿರುವ ಅವರು, ʻನನ್ನ ಕೊರೊನಾ ಪರೀಕ್ಷೆಯಲ್ಲಿ ಪಾಸಿಟಿವ್ ಎಂದು ವರದಿ ಬಂದಿದೆ. ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯಂತೆ ನಿನ್ನೆ (ಸೋಮವಾರ) ರಾತ್ರಿಯೇ ಆಸ್ಪತ್ರೆಗೆ ದಾಖಲಾಗಿದ್ದೇನೆ. ಆತಂಕಕ್ಕೆ ಕಾರಣ ಇಲ್ಲ. ಕಳೆದ ಕೆಲವು ದಿನಗಳಿಂದ ನನ್ನ ಜೊತೆ ಸಂಪರ್ಕದಲ್ಲಿದ್ದವರು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಬೇಕೆಂದು ವಿನಂತಿಸಿಕೊಳ್ಳುತ್ತೇನೆʼ ಎಂದು ತಿಳಿಸಿದ್ದಾರೆ.
ಮೊನ್ನೆಯಷ್ಟೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಲ್ಲಿ ಸೋಂಕು ಪತ್ತೆಯಾಗಿ, ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮಾಜಿ ಸಿಎಂ ಸಿದ್ದರಾಮಯ್ಯ ಕೊರೊನಾ ಸೋಂಕಿನಿಂದಾಗಿ ಆಸ್ಪತ್ರೆಗೆ ದಾಖಲಾಗಿರುವ ಹಿನ್ನೆಲೆಯಲ್ಲಿ ಹಲವು ರಾಜಕೀಯ ಮುಖಂಡರು ಸಿದ್ದರಾಮಯ್ಯ ಅವರು ಶೀಘ್ರವೇ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.