ಡ್ರಗ್ಸ್ ದಂಧೆ ವಿಚಾರದಲ್ಲಿ ಸಿಸಿಬಿ ವಶದಲ್ಲಿರುವ ನಟಿ ರಾಗಿಣಿ ಬಿಜೆಪಿ ಪರ ಚುನಾವಣಾ ಪ್ರಚಾರ ಮಾಡಿದ್ದ ಮಾತ್ರಕ್ಕೆ ಅದಕ್ಕೆ ರಾಜಕೀಯ ಬಣ್ಣ ಬಳಿಯಬೇಕಾಗಿಲ್ಲ ಎಂದು ಸಂಸದ ಪ್ರತಾಪ್ ಸಿಂಹ ಕಿಡಿಕಾರಿದರು.
ಕೊಡಗು ಜಿಲ್ಲೆಯ ಬಲಮುರಿಯಲ್ಲಿ ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆ ಅಡಿಯಲ್ಲಿ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆ.ಆರ್. ಪೇಟೆಯಲ್ಲಿ ಚುನಾವಣೆ ಸಂದರ್ಭ ರಾಗಿಣಿ ಬಿಜೆಪಿ ಪರ ಚುನಾವಣಾ ಪ್ರಚಾರ ಮಾಡಿದ್ದರು. ಅದಕ್ಕೂ ಹಿಂದೆ ಅವರು ಕಾಂಗ್ರೆಸ್ ಮತ್ತು ಜೆಡಿಎಸ್ ಪರವಾಗಿ ಚುನಾವಣಾ ಪ್ರಚಾರ ಮಾಡಿದ್ದಾರೆ. ಈಗಲೂ ಕಾಂಗ್ರೆಸ್ ಮತ್ತು ಜೆಡಿಎಸ್ ಮುಖಂಡರ ಜೊತೆ ರಾಗಿಣಿ ಇರುವ ಫೋಟೋಗಳು ವೈರಲ್ ಆಗುತ್ತಿವೆ. ಹಾಗೆಂದ ಮಾತ್ರಕ್ಕೆ ಅದಕ್ಕೆ ರಾಜಕೀಯ ಬಣ್ಣ ಬಳಿಯಬೇಕಾಗಿಲ್ಲ ಎಂದರು.
ಡ್ರಗ್ಸ್ ಎನ್ನುವುದು ಸಾಮಾಜಿಕ ಪಿಡುಗಾಗಿ ಕಾಡುತ್ತಿದೆ. ಈಗ ನಾವೆಲ್ಲರೂ ಪಕ್ಷಭೇದ ಮರೆತು ಡ್ರಗ್ಸ್ ಮಾರಾಟ ಮತ್ತು ಸೇವನೆ ವಿರುದ್ಧ ಹೋರಾಡಬೇಕಾಗಿದೆ. ಈಗಾಗಲೇ ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಡ್ರಗ್ಸ್ ಮಾರಾಟ ಮತ್ತು ಸೇವನೆ ವಿರುದ್ಧ ಹೋರಾಡಿ, ಜನರನ್ನು ಎಚ್ಚರಗೊಳಿಸಲು ಟ್ವಿಟರ್ ನಲ್ಲಿ ಅಭಿಯಾನ ಆರಂಭಿಸಿದ್ದಾರೆ. ಪಕ್ಷ ಅದಕ್ಕಾಗಿ ಕೆಲಸ ಮಾಡಲಿದ್ದು, ಯಾವುದೇ ಪಕ್ಷದ ನಾಯಕರು ಅಥವಾ ಯಾರೇ ಡ್ರಗ್ಸ್ ದಂಧೆಯಲ್ಲಿ ಭಾಗಿಯಾಗಿದ್ದರು ನಿರ್ದಾಕ್ಷಿಣ್ಯ ಕ್ರಮ ಆಗಲಿದೆ ಎಂದು ತಿಳಿಸಿದರು.