ಬೆಂಗಳೂರು, ನ. 18: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇಳಿಕೆಯಾಗಿರುವ ಹಿನ್ನೆಲೆಯಲ್ಲಿ, ಸರ್ಕಾರಿ ಕಚೇರಿಗಳಲ್ಲಿ ತತಕ್ಷಣದಿಂದಲೇ ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆ ಜಾರಿಗೊಳಿಸುವಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಅಧೀನ ಕಾರ್ಯದರ್ಶಿ ಎಚ್.ಸಿ. ಹರ್ಷರಾಣಿ ತಿಳಿಸಿದ್ದಾರೆ.
ರಾಜ್ಯದಲ್ಲಿ ಕೊರೊನಾ ವೈರಸ್ ಸಮಸ್ಯೆ ಕಂಡುಬಂದ ಹಿನ್ನೆಲೆಯಲ್ಲಿ ಸಚಿವಾಲಯ ಹಾಗೂ ಇನ್ನಿತರ ಸರ್ಕಾರಿ ಕಚೇರಿಗಳಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿ ಹಾಗೂ ಸಿಬ್ಬಂದಿ ಆರೋಗ್ಯದ ದೃಷ್ಟಿಯಿಂದ 2020ರ ಏಪ್ರಿಲ್ 27ರಿಂದ ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆಯಿಂದ ವಿನಾಯಿತಿ ನೀಡಲಾಗಿತ್ತು.
ಆದರೆ ಇದೀಗ ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ಕಡಿಮೆ ಇರುವುದರಿಂದ ಸಚಿವಾಲಯ ಹಾಗೂ ಇನ್ನಿತರ ಸರ್ಕಾರಿ ಕಚೇರಿಗಳಲ್ಲಿ ತತಕ್ಷಣದಿಂದಲೇ ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆ ಜಾರಿಗೆ ಬರುವಂತೆ ತಿಳಿಸಿದೆ. ಅಲ್ಲದೇ ಬಯೋಮೆಟ್ರಿಕ್ ಯಂತ್ರಗಳ ಪಕ್ಕದಲ್ಲಿ ಸೂಕ್ತ ಸ್ಯಾನಿಟೈಜರ್ ವ್ಯವಸ್ಥೆ ಕಲ್ಪಿಸಬೇಕೆಂದು ಸೂಚಿಸಿ ಪ್ರಕಟಣೆ ಹೊರಡಿಸಿದ್ದಾರೆ.