ಪ್ರವಾಹ ಪೀಡಿತರತ್ತ ಸಿಎಂ ಚಿತ್ತ

ಬೆಂಗಳೂರು, .20: ನಾಳೆ ಬೆಳಗ್ಗೆ ಬೆಂಗಳೂರಿನಿಂದ ವಿಶೇಷ ವಿಮಾನದಲ್ಲಿ ಉತ್ತರ ಕರ್ನಾಟಕದ ಪ್ರವಾಹ ಪೀಡಿತ ಜಿಲ್ಲೆಗಳಿಗೆ ತೆರಳಲಿರುವ ಮುಖ್ಯಮಂತ್ರಿ ಯಡಿಯೂರಪ್ಪ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ. ಅವರು ಭಾರತೀಯ ವಾಯುಪಡೆಗೆ ಸೇರಿದ ವಿಶೇಷ ಹೆಲಿಕಾಪ್ಟರ್‍ನಲ್ಲಿ ವೈಮಾನಿಕ ಸಮೀಕ್ಷೆ ನಡೆಸಲಿದ್ಧಾರೆ. ಕಲಬುರಗಿ, ಯಾದಗಿರಿ, ರಾಯಚೂರು ಮತ್ತು ಬಿಜಾಪುರ ಜಿಲ್ಲೆಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಿ ನಂತರ ಅಧಿಕಾರಿಗಳಿಂದ ನಷ್ಟದ ಬಗ್ಗೆ ಮಾಹಿತಿ ಪಡೆಯಲಿದ್ದಾರೆ.

ಕಳೆದ ಒಂದು ವಾರದಿಂದ ಕಲ್ಯಾಣ ಕರ್ನಾಟಕ ಹಾಗೂ ಮುಂಬೈ ಕರ್ನಾಟಕ ಸೇರಿದಂತೆ ಮತ್ತಿತರ ಕಡೆ ವ್ಯಾಪಕವಾಗಿ ಮಳೆ ಸುರಿಯುತ್ತಿದ್ದು, ಅನೇಕ ಕಡೆ ಪ್ರವಾಹ ಉಂಟಾಗಿ ಭಾರೀ ಪ್ರಮಾಣದ ನಷ್ಟ ಸಂಭವಿಸಿದೆ. ಈ ಹಿನ್ನಲೆ ಸಿಎಂ ವೈಮಾನಿಕ ಸಮಿಕ್ಷೆಯನ್ನು ನಡೆಸಲಿದ್ದು, ನಾಲ್ಕು ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಸಹಾಯಕ ಆಯುಕ್ತರು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಸ್ಥಳದಲ್ಲಿಯೇ ಮೊಕ್ಕಾಂ ಹೂಡಬೇಕೆಂದು ಸೂಚಿಸಲಾಗಿದೆ. 

ಈಗಾಗಲೇ, ಸಚಿವರಾದ ಆರ್.ಅಶೋಕ್, ಶಶಿಕಲಾ ಜೊಲ್ಲೆ, ಪ್ರಭು ಚವ್ಹಾಣ್, ಲಕ್ಷ್ಮಣ್ ಸವದಿ ಸೇರಿದಂತೆ ಅನೇಕರು ಪ್ರವಾಹಪೀಡಿತ ಸ್ಥಳಗಳಿಗೆ ಭೇಟಿ ನೀಡಿದ್ದಾರೆ. ಮನೆ ಕಳೆದುಕೊಂಡವರಿಗೆ ತಕ್ಷಣವೇ 10 ಸಾವಿರ ರೂ. ಪರಿಹಾರ, ಪರಿಹಾರ ಕೇಂದ್ರಗಳಲ್ಲಿ ಪೌಷ್ಟಿಕ ಆಹಾರ, ಮಾಸ್ಕ್ ಧರಿಸುವುದು, ಸ್ಯಾನಿಟಿಸರ್ ಸೇರಿದಂತೆ ಹಲವು ರೀತಿಯ ತುರ್ತು ಕಾರ್ಯಕ್ರಮಗಳನ್ನು ಕೈಗೊಂಡಿದೆ.

Exit mobile version