ಪಾಟ್ನಾ, ಅ. 23: ಬಿಹಾರದಲ್ಲಿ ಚುನಾವಣಾ ಪ್ರಚಾರ ಗರಿಗೆದರಿದ್ದು, ಇಂದು ಬಿಹಾರದಲ್ಲಿ ಎನ್ಡಿಎ ಪರ ಪ್ರಧಾನಿ ನರೇಂದ್ರ ಮೋದಿ ಮತ್ತು ಕಾಂಗ್ರೆಸ್ ಪರ ರಾಹುಲ್ ಗಾಂಧಿ ಬೃಹತ್ ರಾಲಿಯನ್ನು ನಡೆಸಲಿದ್ದಾರೆ. ಸಾರ್ವಜನಿಕ ಸಭೆಗಳಲ್ಲಿ ಭಾಗವಹಿಸಿ ಜನರನ್ನುದ್ದೇಶಿಸಿ ಮಾತನಾಡುವ ಮೂಲಕ ಮತಯಾಚನೆ ಮಾಡಲಿದ್ದಾರೆ ಎನ್ನಲಾಗುತ್ತಿದೆ. ಕೊರೊನಾ ಸಂದರ್ಭದಲ್ಲಿ ಸಾರ್ವಜನಿಕ ಸಭೆಗಳು ನಡೆಯುತ್ತಿದ್ದು, ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಎಲ್ಲಾ ಪಕ್ಷದ ಸಂಘಟಕರು ತಿಳಿಸಿದ್ದಾರೆ.
ನಿತೀಶ್ ಕುಮಾರ್ ನೇತೃತ್ವದ ಎನ್ಡಿಎ ಒಕ್ಕೂಟದ ಪರ ಪ್ರಧಾನಿ ನರೇಂದ್ರ ಮೋದಿ ಅವರು ದೆಹ್ರಿ-ಆನ್ ಸೋನ್, ಗಯಾ ಮತ್ತು ಭಾಗಲ್ಪುರದಲ್ಲಿ ಮೂರು ರ್ಯಾಲಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಇದರ ಕುರಿತಾಗಿ ಸ್ವತಃ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ. ಇದೇ ವೇಳೆ ಸಿಎಂ ನಿತೀಶ್ ಕುಮಾರ್ ಅವರು ಡೆಹ್ರಿ ಮತ್ತು ಭಾಗಲ್ಪುರದಲ್ಲಿ ನಡೆಯುವ ರ್ಯಾಲಿಗಳಲ್ಲಿ ಪ್ರಧಾನಿ ಮೋದಿ ಅವರನ್ನು ಸೇರುವ ನಿರೀಕ್ಷೆಯಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.
ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಕೂಡ ಸಹ ಇಂದಿನಿಂದ ಬಿಹಾರದಲ್ಲಿ ತಮ್ಮ ಪಕ್ಷದ ಅಭ್ಯರ್ಥಿಯ ಗೆಲುವಿಗಾಗಿ ರ್ಯಾಲಿಗಳನ್ನು ನಡೆಸಲು ಯೋಜನೆ ರೂಪಿಸಿದ್ದಾರೆ. ಅವರು ನವಾಡಾದ ಹಿಸುವಾ ಮತ್ತು ಭಾಗಲ್ಪುರ್ ಜಿಲ್ಲೆಯ ಕಹಲ್ಗಾಂವ್ನಲ್ಲಿ ಎರಡು ರ್ಯಾಲಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ತಿಳಿದು ಬಂದಿದೆ.