ವಿದ್ಯಾಗಮ ಎಡವಟ್ಟು ನಿಲ್ಲಿಸದಿದ್ದರೆ ಅಹೋರಾತ್ರಿ ಹೋರಾಟ: ಸರ್ಕಾರಕ್ಕೆ ಎಚ್‍ಡಿಕೆ ಎಚ್ಚರಿಕೆ

ಬೆಂಗಳೂರು: ರಾಜ್ಯ ಸರ್ಕಾರ ಸೋಮವಾರದೊಳಗೆ ʻವಿದ್ಯಾಗಮʼ ಶಿಕ್ಷಣದ ಯಡವಟ್ಟನ್ನು ನಿಲ್ಲಿಸದಿದ್ದರೆ ವಿಧಾನಸೌಧ ಇಲ್ಲವೇ ಸ್ವಾತಂತ್ರ್ಯ ಉದ್ಯಾನದ ಬಳಿ ಅಹೋರಾತ್ರಿ ಧರಣಿ ಕೂರಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಎಚ್ಚರಿಸಿದ್ದಾರೆ. ಈ ಸಂಬಂಧ ಸರಣಿ ಟ್ವೀಟ್‌ ಮಾಡಿರುವ ಅವರು, ಮಕ್ಕಳು ಮತ್ತು ಶಿಕ್ಷಕರ ಜೀವದ ಜೊತೆ ರಾಜ್ಯ ಸರ್ಕಾರ ಚೆಲ್ಲಾಟವಾಡುತ್ತಿರುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕೊರೊನಾ ರಣಕೇಕೆ ಹಾಕುತ್ತಿರುವ ಸಂದರ್ಭದಲ್ಲಿ ವಿದ್ಯಾಗಮ ಶಿಕ್ಷಣದ ಹೆಸರಿನಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳನ್ನು ಸಾವಿನ ಕಂದಕಕ್ಕೆ ನೂಕುತ್ತಿರುವ ರಾಜ್ಯ ಸರ್ಕಾರಕ್ಕೆ ಮನುಷ್ಯತ್ವ ಇದೆಯಾ? ಸರ್ಕಾರಕ್ಕೆ ಕನಿಷ್ಠ ಪರಿಜ್ಞಾನ ಬೇಡವೇ ಎಂದು ಖಾರವಾಗಿ ಪ್ರಶ್ನಿಸಿದ್ದಾರೆ. ವೇತನ ಹಾಗೂ ಸೌಲಭ್ಯಗಳ ಕಡಿತದ ಬೆದರಿಕೆ ಒಡ್ಡಿ ಸಾವಿನ ದವಡೆಗೆ ನೂಕಿದ ಶಿಕ್ಷಕರ ಕುಟುಂಬಕ್ಕೆ 50 ಲಕ್ಷ ರೂಪಾಯಿ ಪರಿಹಾರ ನೀಡಬೇಕು. ಆ ಕುಟುಂಬದ ಅರ್ಹ ಸದಸ್ಯರಿಗೆ ಉದ್ಯೋಗ ನೀಡಬೇಕು ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಮಕ್ಕಳಿಗೆ ಶಿಕ್ಷಣಕೊಡುವ ಸೋಗಿನಲ್ಲಿ ಶಿಕ್ಷಣ ಸಚಿವರು ಅಡ್ಡಗೋಡೆ ಮೇಲೆ ದೀಪವಿಟ್ಟಂತೆ ಹೇಳಿಕೆಗಳನ್ನು ನೀಡುತ್ತಾ ಶಿಕ್ಷಕರು ಮತ್ತು ವಿದ್ಯಾರ್ಥಿಗಳ ಜೀವಕ್ಕೆ ಕುತ್ತು ತರುತ್ತಿರುವುದು ಖಂಡನೀಯ ಹಾಗೂ ಅಮಾನವೀಯ. ಈ ವರ್ಷ ಶಾಲೆ ಆರಂಭಿಸದಿದ್ದರೆ ದೇಶ ಮುಳುಗಿ ಹೋದೀತೆ? ಇಂತಹದೊಂದು ಹುಚ್ಚಾಟ ಸರ್ಕಾರಕ್ಕೆ ಬೇಕೆ? ಇದೊಂದು ನಾಗರಿಕ ಸರ್ಕಾರವೇ ಎಂದು ಪ್ರಶ್ನಿಸಿದ್ದಾರೆ.

ಕೊರೊನಾ ನಿಯಂತ್ರಿಸುವಲ್ಲಿ ವಿಫಲವಾಗಿರುವ ಸರ್ಕಾರ ಕನಿಷ್ಠ ಆಕ್ಸಿಜನ್ ಒದಗಿಸಲು ಪರದಾಡುತ್ತಿದೆ. ಜನಪ್ರತಿನಿಧಿ ಇರಲಿ, ಸಾಮಾನ್ಯ ಪ್ರಜೆ ಇರಲಿ, ಜೀವ ರಕ್ಷಣೆ ಮಾಡಬೇಕಾದದ್ದು ಸರ್ಕಾರದ ಮೊದಲ ಆದ್ಯತೆ ಮತ್ತು ಕರ್ತವ್ಯ. ಜೀವ ಉಳಿದರೆ ತಾನೇ ಬದುಕು? ನನ್ನ ಜೀವ ಹೋದರೂ ಪರವಾಗಿಲ್ಲ. ಮಂಗಳವಾರದಿಂದ ಸರ್ಕಾರದ ಅನಾಗರಿಕ, ನಿರ್ಲಜ್ಜ ನೀತಿ, ನಿರ್ಧಾರದ ವಿರುದ್ಧ ಅಹೋರಾತ್ರಿ ಧರಣಿ ಆರಂಭಿಸುತ್ತೇನೆ ಎಂದು ಖಡಕ್‌ ಎಚ್ಚರಿಕೆ ನೀಡಿದ್ದಾರೆ.

Exit mobile version