ಹಬ್ಬಕ್ಕೆ 1000 ಹೆಚ್ಚುವರಿ ವಾಹನಗಳ ವಿಶೇಷ ಸಾರಿಗೆ ವ್ಯವಸ್ಥೆ

ಬೆಂಗಳೂರು, ನ. 10: ದಿನಾಂಕ 14.11.2020 ರಂದು ನರಕಚತುರ್ದಶಿ ಹಾಗೂ ದಿನಾಂಕ 16.11.2020 ರಂದು ಬಲಿಪಾಡ್ಯಮಿ ಹಬ್ಬದ ಪ್ರಯುಕ್ತ ಕರಾರಸಾ ನಿಗಮವು, ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ದಿನಾಂಕ 13.11.2020 ಹಾಗೂ 14.11.2020 ರಂದು ಬೆಂಗಳೂರಿನಿಂದ ಈ ಬೇರೆ ಬೇರೆ ಸ್ಥಳಗಳಿಗೆ 1000 ಹೆಚ್ಚುವರಿ ವಾಹನಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ನಂತರ ರಾಜ್ಯದ ಮತ್ತು ಅಂತರರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ದಿನಾಂಕ 16.11.2020ರಂದು ವಿಶೇಷ ವಾಹನಗಳನ್ನು ಕಾರ್ಯಾಚರಣೆ ಮಾಡಲಾಗುವುದು.

ಪ್ರಯಾಣಿಕರು ಬಸ್ ನಿಲ್ದಾಣಗಳಿಗೆ ತೆರಳುವ ಮುನ್ನ ಮುಂಗಡ ಕಾಯ್ದಿರಿಸಲಾಗಿರುವ ಟಿಕೇಟುಗಳ ಮೇಲೆ ನಮೂದಿಸಲಾಗಿರುವ ಬಸ್ ನಿಲ್ದಾಣ/ಪಿಕ್‍ಅಪ್ ಪಾಯಿಂಟ್‍ನ ಹೆಸರನ್ನು ಗಮನಿಸುವಂತೆ ಕೋರಲಾಗಿದೆ. ಇ-ಟಿಕೇಟ್ ಬುಕ್ಕಿಂಗ್‍ ಸೌಲಭ್ಯವನ್ನು ನೀಡಲಾಗಿದೆ. ಸಾರ್ವಜನಿಕ ಪ್ರಯಾಣಿಕರು ಕರ್ನಾಟಕ ಹಾಗೂ ಅಂತರರಾಜ್ಯದಲ್ಲಿ ಇರುವ 706 ಗಣಕೀಕೃತ ಬುಕಿಂಗ್ ಕೌಂಟರ್‍ಗಳ ಮೂಲಕ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸಬಹುದಾಗಿದೆ.

ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೇಟು ಕಾಯ್ದಿರಿಸಿದಲ್ಲಿ ಶೇಕಡ 5 ರಷ್ಟು ರಿಯಾಯಿತಿ ನೀಡಲಾಗುವುದು ಹಾಗೂ ಹೋಗುವ & ಬರುವ ಪ್ರಯಾಣದ ಟಿಕೇಟ್‍ನ್ನು ಒಟ್ಟಿಗೆ ಕಾಯ್ದಿರಿಸಿದಾಗ ಬರುವ ಪ್ರಯಾಣ ದರದಲ್ಲಿ ಶೇಕಡ 10 ರಷ್ಟು ರಿಯಾಯಿತಿ ನೀಡಲಾಗುವುದು. ಕಾರ್ಯಾಚರಣೆ ಮಾಡಲಾಗುವ ಹೆಚ್ಚುವರಿ ಸಾರಿಗೆಗಳು, ಅವುಗಳು ಹೊರಡುವ ಸ್ಥಳ ಹಾಗೂ ವೇಳಾ ವಿವರಗಳನ್ನು ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಅಂತರ್‍ಜಾಲ ವ್ಯವಸ್ಥೆಯಲ್ಲಿ ಹಾಗೂ ಕರಾರಸಾ ನಿಗಮದ ವೆಬ್‍ಸೈಟ್‍ನಲ್ಲಿ ಸಾರ್ವಜನಿಕ ಮಾಹಿತಿಗಾಗಿ ಒದಗಿಸಲಾಗಿದೆ ಹಾಗೂ ಸದರಿ ಹೆಚ್ಚುವರಿ ಸಾರಿಗೆಗಳಲ್ಲಿ ಸಂಚರಿಸುವ ಪ್ರಯಾಣಿಕರು ಕಾಯ್ದಿರಿಸುವ ಮುಂಗಡ ಚೀಟಿಗಳಲ್ಲೂ ಕೂಡ ವಾಹನ ಹೊರಡುವ ಸ್ಥಳದ ವಿವರ ನಮೂದಿಸಲಾಗಿದೆ.

ಅಲ್ಲದೇ, ನಿಗಮದ ಕಾರ್ಯಾಚರಣೆ ವ್ಯಾಪ್ತಿಯಲ್ಲಿನ ಎಲ್ಲಾ ತಾಲ್ಲೂಕು/ಜಿಲ್ಲಾ ಬಸ್ ನಿಲ್ದಾಣಗಳಿಂದ ಸಂಚಾರ ಒತ್ತಡಕ್ಕನುಗುಣವಾಗಿ ವಿಶೇಷ ಸಾರಿಗೆಗಳ ಕಾರ್ಯಾಚರಣೆ ಮಾಡಲಾಗುವುದು ಎಂದು ತಿಳಿಸಿದೆ.

Exit mobile version