ನವದೆಹಲಿ, ಜೂ. 02: ಕೇಂದ್ರ ಸರ್ಕಾರವು ಸಿಬಿಎಸ್ಇ 12ನೇ ತರಗತಿ ಪರೀಕ್ಷೆಗಳನ್ನು ರದ್ದುಪಡಿಸುವ ನಿರ್ಧಾರ ಪ್ರಕಟಿಸಿದ ಬೆನ್ನಲ್ಲೇ ಗುಜರಾತ್ ಮತ್ತು ಮಧ್ಯ ಪ್ರದೇಶದಲ್ಲಿ ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ 12ನೇ ತರಗತಿಯ ಪರೀಕ್ಷೆಗಳನ್ನು ನಡೆಸದಿರಲು ನಿರ್ಧರಿಸಿವೆ.
ಮಧ್ಯ ಪ್ರದೇಶ ಬೋರ್ಡ್ನ 12ನೇ ತರಗತಿ ಪರೀಕ್ಷೆಗಳನ್ನು ರದ್ದು ಪಡಿಸುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ. ಜೊತೆಗೆ ಹೈಯರ್ ಸೆಕೆಂಡರಿ ಪರೀಕ್ಷೆಗಳನ್ನು ಗುಜರಾತ್ ಶಿಕ್ಷಣ ಮಂಡಳಿಯು ರದ್ದು ಪಡಿಸಿದೆ ಎಂದು ಗುಜರಾತ್ನ ಶಿಕ್ಷಣ ಸಚಿವ ಭೂಪೇಂದ್ರ ಸಿನ್ಹ ಚುಡಾಸಮಾ ತಿಳಿಸಿದ್ದಾರೆ.
ಪರೀಕ್ಷೆ ರದ್ದತಿ ಕುರಿತು ಮಂಗಳವಾರ ಹೇಳಿಕೆ ಬಿಡುಗಡೆ ಮಾಡಿರುವ ಸಚಿವ ಸುರೇಶ್ ಕುಮಾರ್, ‘ಕೇಂದ್ರೀಯ ಮಂಡಳಿಯು ಪರೀಕ್ಷೆ ರದ್ದು ಮಾಡಿರುವ ಹಿನ್ನೆಲೆ, ರಾಜ್ಯ ಪಠ್ಯಕ್ರಮ ಅನುಸರಿಸಿ ಓದುತ್ತಿರುವ ವಿದ್ಯಾರ್ಥಿಗಳ ಶೈಕ್ಷಣಿಕ ಸ್ಥಿತಿಗತಿಗಳು, ಮೌಲ್ಯಮಾಪನದ ಅವಶ್ಯಕತೆ ಕುರಿತಂತೆ ಈಗಾಗಲೇ ರೂಪಿತವಾಗಿರುವ ಅಭಿಪ್ರಾಯಗಳ ವಿಸ್ತೃತ ಚರ್ಚೆ ನಡೆಸಿ ವಿದ್ಯಾರ್ಥಿಗಳ ಆರೋಗ್ಯ ಹಾಗೂ ಭವಿಷ್ಯದ ಹಿತದೃಷ್ಟಿಯಿಂದ ಶೀಘ್ರದಲ್ಲಿ ಸೂಕ್ತ ತೀರ್ಮಾನ ತೆಗೆದುಕೊಳ್ಳಲಾಗುತ್ತದೆʼ ಎಂದಿದ್ದಾರೆ.