ದೇಶದಲ್ಲಿ ವರುಣನ ಆರ್ಭಟ: ಮುಂಬೈನಲ್ಲಿ 33, ಉತ್ತರಾಖಂಡದಲ್ಲಿ 3 ಜನರು ಸಾವು

ಮುಂಬೈ, ಜು. 19: ಭಾರತದ ಹಲವು ರಾಜ್ಯಗಳಲ್ಲಿ ಕಳೆದ ನಾಲ್ಕೈದು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಮುಂಬೈ, ದೆಹಲಿ, ಗುಜರಾತ್, ಕೇರಳ, ಕರ್ನಾಟಕ, ಉತ್ತರಾಖಂಡ ಸೇರಿದಂತೆ ಅನೇಕ ರಾಜ್ಯಗಳಲ್ಲಿ ವರುಣನ ಆರ್ಭಟ ಜೋರಾಗಿದೆ. ಭಾರೀ ಮಳೆಯಿಂದ ಮುಂಬೈನಲ್ಲಿ 33 ಜನರು ಸಾವನ್ನಪ್ಪಿದ್ದು, ಉತ್ತರಾಖಂಡದಲ್ಲಿ 3 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ದೆಹಲಿಯಲ್ಲೂ ಇಂದು ಮಳೆ ಮುಂದುವರೆದಿದ್ದು, ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಕರ್ನಾಟಕದಲ್ಲೂ ಇನ್ನು ಮೂರು ದಿನ ಮಳೆ ಹೆಚ್ಚಾಗಲಿದೆ. ಜುಲೈ 21ರವರೆಗೆ ಮಲೆನಾಡು, ಕರಾವಳಿ, ಕೊಡಗು ಸೇರಿದಂತೆ ಬಹುತೇಕ ಕಡೆ ಮಳೆಯಾಗಲಿದೆ.

ಜಮ್ಮು ಕಾಶ್ಮೀರ, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ಹರಿಯಾಣ, ದೆಹಲಿ, ಮಧ್ಯಪ್ರದೇಶ, ರಾಜಸ್ಥಾನ, ಉತ್ತರ ಕೊಂಕಣ, ಬಿಹಾರದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು.

ಕರ್ನಾಟಕದಲ್ಲೂ ಮಳೆ ಹೆಚ್ಚಾಗುತ್ತಿದ್ದು, ರಾಜ್ಯದ 14 ಜಿಲ್ಲೆಗಳಿಗೆ ಇನ್ನೆರಡು ದಿನ ರೆಡ್ ಅಲರ್ಟ್​ ಘೋಷಿಸಲಾಗಿದೆ. ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ರೆಡ್ ಅಲರ್ಟ್​ ಘೋಷಿಸಲಾಗಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಹಾವೇರಿ, ಧಾರವಾಡ, ಗದಗ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ.

Exit mobile version