Bengaluru: ರಾಜ್ಯದಲ್ಲಿ ಆ್ಯಸಿಡ್ (Acid) ನಿಷೇಧದ ಕುರಿತು ಚಿಂತನೆ ನಡೆಸಿದ್ದು, ರಾಜ್ಯ ಪೊಲೀಸ್ ಮಹಾನಿರ್ದೇಶಕರು ಸಂಬಂಧಪಟ್ಟ ಇಲಾಖೆಗೆ ಪತ್ರ ಬರೆಯಲಿದ್ದಾರೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ (G Parameshwara) ಅವರು ಹೇಳಿದ್ದಾರೆ .ನಗರದಲ್ಲಿ ಬುಧವಾರ ಆಯೋಜಿಸಿದ್ದ ‘ಮಹಿಳೆಯರ ಮೇಲಿನ ದೌರ್ಜನ್ಯ’ ಕುರಿತ ವಿಚಾರ ಸಂಕಿರಣದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಅಧಿಕೃತ ರಾಸಾಯನಿಕ ವಿತರಕರಿಗೆ ಮಾತ್ರ ಮಾರಾಟ ಮಾಡಲು ಅನುಮತಿ ಇರುವುದನ್ನು ಖಚಿತಪಡಿಸಿಕೊಳ್ಳಲಾಗುವುದು. ಪೊಲೀಸ್ ಮಹಾನಿರ್ದೇಶಕರು ಈ ಬಗ್ಗೆ ಶೀಘ್ರದಲ್ಲೇ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಗೆ ಈ ಕುರಿತಾಗಿ ಮಾಹಿತಿ ನೀಡಿ ಪತ್ರ ಬರೆಯಲಿದ್ದಾರೆ ಎಂದು ಹೇಳಿದ್ದಾರೆ.
ಕೆಲ ದಿನಗಳ ಹಿಂದೆಯಷ್ಟೇ ದಕ್ಷಿಣ ಕನ್ನಡ ಜಿಲ್ಲೆಯ (Dakshina Kannada) ಕಡಬದಲ್ಲಿ ವಿದ್ಯಾರ್ಥಿನಿಯ ಮೇಲೆ ಆ್ಯಸಿಡ್ ದಾಳಿಯಾಗಿತ್ತು. ಕೇರಳ ಮೂಲದ ಅಭಿನ್ ಎಂಬಾತ ಈ ಕೃತ್ಯ ಎಸಗಿದ್ದ. ಕಡಬದ ವಿದ್ಯಾರ್ಥಿನಿಯರ ಮೇಲೆ ಆಸಿಡ್ ದಾಳಿ ಪ್ರಕರಣ ಸಂಬಂಧ ಆರೋಪಿ ಅಭಿನ್ನನ್ನು ಪೊಲೀಸರು ಬಂಧಿಸಿದ್ದಾರೆ.ಆ್ಯಸಿಡ್ ದುರ್ಬಳಕೆ ಆಗುತ್ತಿದೆ. ಇದರಿಂದ ಮಹಿಳೆಯರು ದೌರ್ಜನ್ಯಕ್ಕೆ ಒಳಗಾಗುತ್ತಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಆ್ಯಸಿಡ್ ನಿಷೇಧ (Acid Ban) ಮಾಡುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದಿದ್ದಾರೆ.
ಪೊಲೀಸರು ಜನಸ್ನೇಹಿಯಾಗಿ ಕೆಲಸ ಮಾಡಬೇಕು. ಮಹಿಳೆಯರು ತಮ್ಮ ಸಮಸ್ಯೆಗಳ ಕುರಿತು ದೂರು ನೀಡಲು ಠಾಣೆಗೆ ಬಂದರೆ ಕೂಡಲೆ ಸಮಸ್ಯೆಗಳನ್ನು ಆಲಿಸಬೇಕು. ನಮ್ಮ ಬೆನ್ನಿಗೆ ಪೊಲೀಸರು ಇದ್ದಾರೆ ಎಂಬ ಧೈರ್ಯ ಅವರಲ್ಲಿ ಮೂಡಬೇಕು. ಅವರ ದೂರುಗಳ ಬಗ್ಗೆ ತಾತ್ಸಾರ ಮಾಡಿದರೆ ಸಹಿಸುವುದಿಲ್ಲ. ಮಹಿಳೆಯರು ಧೈರ್ಯವಾಗಿದ್ದರೆ ಒಳ್ಳೆ ಆಡಳಿತ, ಜನಸ್ನೇಹಿ ಪೊಲೀಸ್ ಎನಿಸಿಕೊಳ್ಳಲು ಸಾಧ್ಯ ಎಂದು ಅಧಿಕಾರಿಗಳಿಗೆ ಕಿವಿಮಾತು ಹೇಳಿದರು.
ಈ ಹಿಂದೆ ಪೊಲೀಸ್ ಸಹಾಯವಾಣಿ ಮೂಲಕ ಬಂದ ದೂರುಗಳನ್ನು ಆಧರಿಸಿ, ಹೋಯ್ಸಳ ಸಿಬ್ಬಂದಿ ಸ್ಥಳಕ್ಕೆ ಹೋಗಲು 20 ನಿಮಿಷ ತೆಗೆದುಕೊಳ್ಳುತ್ತಿದ್ದರು. ಪ್ರಸ್ತುತ 7 ನಿಮಿಷದೊಳಗೆ ಸ್ಥಳದಲ್ಲಿ ಹಾಜರಿರುತ್ತಾರೆ. ಬೆಂಗಳೂರು (Bengaluru) ನಗರದಲ್ಲಿ 7,500 ಸಿಸಿಟಿವಿ (CCTV) ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಪೊಲೀಸರು ನಿರಂತರ ಕಣ್ಗಾವಲು ಇಟ್ಟಿರುತ್ತಾರೆ. ನಮ್ಮ ಸರ್ಕಾರವು ಮಹಿಳಾ ಸುರಕ್ಷತೆಗೆ ಅಗತ್ಯ ಕ್ರಮ ಕೈಗೊಳ್ಳುತ್ತಿದೆ ಎಂದಿದ್ದಾರೆ.