Bengaluru: ಕಳೆದ ಕೆಲ ದಿನಗಳಿಂದ ರಾಷ್ಟೀಯ ಹೆದ್ದಾರಿಗಳಲ್ಲಿ ಅಪಘಾತಗಳು ಹೆಚ್ಚುತ್ತಿದ್ದ ಹಿನ್ನೆಲೆಯಲ್ಲಿ ಅದನ್ನು ಕಡಿಮೆ ಮಾಡಲು ಕೇಂದ್ರದ ಮೋಟಾರ್ ಕಾಯ್ದೆ (Central Motor Act) ಅನ್ವಯ ಎಲ್ಲ ವಾಹನಗಳಿಗೆ ಕಡ್ಡಾಯವಾಗಿ ಒಂದೇ ಮಾದರಿಯ ಹೆಡ್ ಲೈಟ್ಗಳನ್ನು ಅಳವಡಿಸಿಕೊಳ್ಳಬೇಕು ಎಂದು ರಾಜ್ಯ ಸಂಚಾರ ಮತ್ತು ರಸ್ತೆ ಸುರಕ್ಷತೆ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಲೋಕ್ ಕುಮಾರ್ (Alok Kumar) ಆದೇಶ ಹೊರಡಿಸಿದ್ದಾರೆ.

ಇತ್ತೀಚಿನ ದಿನಗಳಲ್ಲಿ ವಾಹನಗಳಲ್ಲಿ ಹೆಚ್ಚು ಬೆಳಕು ಹೊರಹಾಕುವ ಎಲ್ಇಡಿ ದೀಪಗಳನ್ನು (LED Lamp) ವಾಹನಗಳಿಗೆ ಅಳವಡಿಸುತ್ತಿದ್ದು, ಅದರಿಂದ ಎದುರುಗಡೆಯಿಂದ ಸಂಚರಿಸುವ ಇತರ ವಾಹನ ಸವಾರರಿಗೆ ತೀವ್ರ ತೊಂದರೆ ಆಗುತ್ತಿದೆ. ಭಾರಿ ಗಾತ್ರದ ವಾಹನಗಳಾದ ಟ್ರಕ್, ಬಸ್ (Truck, Bus)ಗಳಲ್ಲಿ ಹೆಚ್ಚು ಪ್ರಖರ ಬೆಳಕು ಹೊರಹಾಕುವ ಮತ್ತು ಕಣ್ಣು ಕುಕ್ಕುವ ಎಲ್ಇಡಿ ದೀಪಗಳನ್ನು ಅಳವಡಿಸುತ್ತಿರುವುದರಿಂದ ಇತರ ವಾಹನಗಳ ಸವಾರರ ಕಣ್ಣಿಗೆ ಆ ಬೆಳಕು ಪ್ರವೇಶಿಸಿ ಕಣ್ಣನ್ನು ಮಂಜಾಗಿಸಿ ತೊಂದರೆ ಅನುಭವಿಸುವಂತೆ ಮಾಡುತ್ತಿದೆ . ಇದರಿಂದ ಅಪಘಾತ ಪ್ರಕರಣಗಳು ಸಂಭವಿಸುತ್ತಿವೆ ಎಂದಿದ್ದಾರೆ.
ಎಲ್ಲ ವಾಹನ ಸವಾರರು ತಮ್ಮ ವಾಹನಗಳಿಗೆ ಕೇಂದ್ರ ಮೋಟಾರು ವಾಹನ ಕಾಯ್ದೆಯಲ್ಲಿ ನಮೂದಿಸಿರುವ ಮಾನದಂಡದಂತೆಯೇ ನಿಗದಿತ ಹೆಡ್ ಲೈಟ್ (Headlight) ಗಳನ್ನೇ ಅಳವಡಿಸಬೇಕಾಗಿರುವುದು ಕಡ್ಡಾಯವಾಗಿರುತ್ತದೆ. ಒಂದು ವೇಳೆ ಸಿಎಂವಿ ಕಾಯ್ದೆ (CMV Act) ಯಲ್ಲಿನ ನಿಯಮಗಳನ್ನು ಉಲ್ಲಂಘಿಸಿದರೆ, ಅಂತಹ ವಾಹನ ಸವಾರರ ವಿರುದ್ಧ ಕೇಸ್ ದಾಖಲಿಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ. ಇನ್ನು ಈ ಕುರಿತಾಗಿ ಘಟಕಾಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಸಂಚರಿಸುವ ವಾಹನಗಳ ಮೇಲೆ ನಿಗಾವಹಿಸಬೇಕು.
ಹೆಚ್ಚು ಪ್ರಖರ ಬೆಳಕು ಹೊರಹಾಕುವ ಮತ್ತು ಕಣ್ಣು ಕುಕ್ಕುವ ಎಲ್ಇಡಿ ದೀಪಗಳನ್ನು ಅಳವಡಿಸಿರುವುದು ಕಂಡುಬಂದರೆ ಜುಲೈ (July) ನಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಆದೇಶ ಹೊರಡಿಸಿದ್ದಾರೆ.