ಉಲ್ಬಣಿಸುತ್ತಿದೆ ಕೊರೊನಾ ಆತಂಕ: ನಾಳೆ ಮುಖ್ಯಮಂತ್ರಿಗಳ ಜೊತೆ ಮೋದಿ ತುರ್ತು ಸಭೆ

ಹೊಸದಿಲ್ಲಿ, ಮಾ. 16: ದೇಶದಲ್ಲಿ ಕೊರೊನಾ ಮಹಾಮಾರಿ ಆತಂಕ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಈ ಹಿನ್ನೆಲೆಯಲ್ಲಿ ಕೊರೊನಾಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಹಲವು ರಾಜ್ಯಗಳಲ್ಲಿ ಕಟ್ಟುನಿಟ್ಟಿನ ಕ್ರಮಕ್ಕೆ ಸ್ಥಳೀಯ ಸರ್ಕಾರಗಳು ಮಹತ್ವದ ನಿರ್ಧಾರಗಳನ್ನು ಕೈಗೊಂಡಿದೆ.‌ ಈ ನಡುವೆ ದೇಶದ ಕೆಲವು ರಾಜ್ಯಗಳಲ್ಲಿ ಕೋವಿಡ್‌ ಪ್ರಕರಣಗಳು ಮತ್ತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ನಾಳೆ (ಮಾ.17) ರಂದು ದೇಶದ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ತುರ್ತು ಸಭೆ ಕರೆದಿದ್ದಾರೆ.

ಬುಧವಾರ ಮಧ್ಯಾಹ್ನ 13.30ಕ್ಕೆ ವರ್ಚುವಲ್‌ ಸಭೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ. ನಾಳೆ ನಡೆಯುವ ಸಭೆಯಲ್ಲಿ ಕೊರೊನಾ ವೈರಸ್‌ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಆಯಾ ರಾಜ್ಯಗಳಲ್ಲಿ ಈಗಾಗಲೇ ಕೈಗೊಂಡ ಕ್ರಮಗಳು, ಇನ್ನು ಮುಂದೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಲಾಗುತ್ತದೆ ಎನ್ನಲಾಗಿದೆ.

ಭಾರತದಾದ್ಯಂತ ಕೋವಿಡ್‌ ಪ್ರಕರಣ ಸಂಖ್ಯೆಯಲ್ಲಿ ಮತ್ತೆ ಏರಿಕೆಯಾಗುತ್ತಿರುವುದು ಜನರಲ್ಲಿ ಆತಂಕ ಮೂಡಿಸಿದೆ. ಮಹಾರಾಷ್ಟ್ರದಲ್ಲಿ ಅತೀ ಹೆಚ್ಚು ಪ್ರಕರಣಗಳು ವರದಿಯಾಗುತ್ತಿದ್ದು, ಹಲವು ಭಾಗಗಳಲ್ಲಿ ಲಾಕ್‌ಡೌನ್‌ ಜಾರಿಗೊಳಿಸಲಾಗಿದೆ.

Exit mobile version