ಬೇಕಿರುವುದು ನೆರವಿನ ಹಸ್ತವೇ ಹೊರತು ಉಪದೇಶದ ಬುರುಡೆ ಮಾತಲ್ಲ: ಮೋದಿ ಭಾಷಣಕ್ಕೆ ಸಿದ್ದರಾಮಯ್ಯ ಲೇವಡಿ

ಬೆಂಗಳೂರು, ಏ. 21: ಕೊರೊನಾ ಸೋಂಕಿನಿಂದ ತತ್ತರಿಸಿ ಹೋಗಿರುವ ರಾಜ್ಯಗಳಿಗೆ ತುರ್ತಾಗಿ ಬೇಕಾಗಿರುವುದು ನೆರವಿನ ಹಸ್ತವೇ ಹೊರತು ಉಪದೇಶದ ಬುರುಡೆ ಮಾತಲ್ಲ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.

ದೇಶದೆಲ್ಲೆಡೆ ಮಹಾಮಾರಿ ಕೊರೊನಾ ಸೋಂಕಿನ ಆರ್ಭಟಕ್ಕೆ ಹಲವು ರಾಜ್ಯಗಳಲ್ಲಿ ಜನಸಾಮಾನ್ಯರು ತತ್ತರಿಸಿ ಹೋಗಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನತೆಯನ್ನು ಉದ್ದೇಶಿಸಿ ಭಾಷಣ ಮಾಡಿದರು. ಆದರೆ ಪ್ರಧಾನಿ ಮೋದಿ ಭಾಷಣವನ್ನು ಟೀಕಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರಧಾನಿ ನರೇಂದ್ರ ಮೋದಿ ಅವರು ಮಾಡಿದ ಭಾಷಣ ಅತ್ಯಂತ ನಿರಾಶದಾಯಕವಾಗಿತ್ತು. ಕೊರೊನಾ ಸೋಂಕಿನಿಂದ ತತ್ತರಿಸಿಹೋಗಿರುವ ರಾಜ್ಯಗಳಿಗೆ ತುರ್ತಾಗಿ ಬೇಕಾಗಿರುವುದು ನೆರವಿನ ಹಸ್ತವೇ ಹೊರತು ಉಪದೇಶದ ಬುರುಡೆ ಮಾತಲ್ಲ ಎಂದು ಕಿಡಿಕಾರಿದರು.

ರಾಜ್ಯದಲ್ಲಿ ಕೊರೊನಾ ಸೋಂಕಿತರು ಆಮ್ಲಜನಕ ಇಲ್ಲದೆ, ಐಸಿಯು ಹಾಸಿಗೆಗಳಿಲ್ಲದೆ,‌ ರೆಮಿಡಿಸಿವೆರ್‌ನಂತಹ ಪ್ರಾಣರಕ್ಷಕ ಔಷಧಿ ಸಿಗದೆ ಜೀವ ಕಳೆದುಕೊಳ್ಳುತ್ತಿದ್ದಾರೆ. ಈ ಸಮಸ್ಯೆಗಳಿಗೆ ಯಾವುದೇ ಪರಿಹಾರ ನೀಡದ ಪ್ರಧಾನಿ ಮೋದಿ, ಜನತೆಗೆ ಜವಾಬ್ದಾರಿಯ ಪಾಠ ಹೇಳಿದ್ದಾರೆ. ಪ್ರಧಾನಿಗಳೇ, ಮೊದಲು ನಿಮ್ಮ ಜವಾಬ್ದಾರಿಯನ್ನು ಸರಿಯಾಗಿ ನಿರ್ವಹಿಸಿ.

ಕೊರೊನಾ ಉಲ್ಭಣವಾದ ಕಾರಣದಿಂದಾಗಿ ಲಾಕ್‌ಡೌನ್ ಅನಿವಾರ್ಯ ಎಂಬಂತೆ ರಾಜ್ಯ ಸರ್ಕಾರ ಮಾತನಾಡುತ್ತಿದೆ. ಆದರೆ ಲಾಕ್‌ಡೌನ್‌ ಹೇರಿದರೆ ಕಷ್ಟನಷ್ಟಕ್ಕೀಡಾಗುವ ಜನತೆಗೆ ಕೇಂದ್ರ ಸರ್ಕಾರ ನೀಡುವ ನೆರವಿನ ಘೋಷಣೆಯನ್ನು ಜನ ನಿರೀಕ್ಷಿಸಿದ್ದರು. ಮೋದಿ ಭಾಷಣ ‘ನಿಮ್ಮ ತಲೆ ಮೇಲೆ ನಿಮ್ಮ‌ ಕೈ’ ಎಂಬ ಸಂದೇಶ ನೀಡಿದೆ.

ಕೊರೊನಾ ಪರಿಣಾಮವನ್ನು ಸಮರ್ಥವಾಗಿ ನಿರ್ವಹಿಸಲಾಗದೆ ರಾಜ್ಯದ ಆರ್ಥಿಕ ಸ್ಥಿತಿ ದಿವಾಳಿಯ ಅಂಚಿಗೆ ಬಂದು ನಿಂತಿದೆ. ಇದಕ್ಕೆ ನ್ಯಾಯಬದ್ಧವಾಗಿ ತೆರಿಗೆ ಪಾಲನ್ನು ನೀಡದಿರುವುದಕ್ಕೆ ಕೇಂದ್ರ ಸರ್ಕಾರವೂ ಕಾರಣ. ಪ್ರಧಾನಿಯವರೇ, ನೀವು ವಿಶೇಷ ಆರ್ಥಿಕ ನೆರವು ಕೊಡುವುದು ಬೇಡ, ನಮ್ಮ ನ್ಯಾಯಬದ್ಧ ಪಾಲನ್ನಷ್ಟಾದರೂ ನೀಡಿ ಪುಣ್ಯ ಕಟ್ಟಿಕೊಳ್ಳಿ ಎಂದಿದ್ದಾರೆ.

https://twitter.com/siddaramaiah/status/1384543733115281411?s=08
Exit mobile version