ದೆಹಲಿ, ಏ. 08: ಮಹಾರಾಷ್ಟ್ರದ ಮಾಜಿ ಗೃಹ ಸಚಿವ, ಎನ್ಸಿಪಿ ನಾಯಕ ಅನಿಲ್ ದೇಶಮುಖ್ ವಿರುದ್ಧ ಸಿಬಿಐ ತನಿಖೆ ನಡೆಸಲು ಸುಪ್ರೀಂಕೋರ್ಟ್ ಗುರುವಾರ ಆದೇಶಿಸಿದೆ. ಈ ಸಂಬಂಧ ಬಾಂಬೆ ಹೈಕೋರ್ಟ್ ನೀಡಿದ್ದ ತೀರ್ಪು ಪ್ರಶ್ನಿಸಿ ಅನಿಲ್ ದೇಶಮುಖ್ ಹಾಗೂ ಮಹಾರಾಷ್ಟ್ರ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ತಳ್ಳಿಹಾಕಿದೆ.
ಈ ಪ್ರಕರಣದಲ್ಲಿ ಶಾಮೀಲಾಗಿರುವ ವ್ಯಕ್ತಿಗಳ ವಿರುದ್ಧ ಸ್ವತಂತ್ರ ತನಿಖಾ ಸಂಸ್ಥೆಯಿಂದ ತನಿಖೆ ನಡೆಯಬೇಕಿದೆ. ಹೈಕೋರ್ಟ್ ಪ್ರಾಥಮಿಕ ತನಿಖೆ ನಡೆಸಬೇಕು ಎಂದು ಸೂಚಿಸಿತ್ತು. ಹೈಕೋರ್ಟ್ ಆದೇಶದಲ್ಲಿ ನಾವು ಮಧ್ಯಪ್ರವೇಶಿಸುವುದಿಲ್ಲ ಎಂದು ಸುಪ್ರೀಂಕೋರ್ಟ್ ತನ್ನ ಆದೇಶದಲ್ಲಿ ಸ್ಪಷ್ಟವಾಗಿ ತಿಳಿಸಿದೆ.
ಮುಂಬೈ ನಗರದ ಪೊಲೀಸ್ ಆಯುಕ್ತರಾಗಿದ್ದ ಪರಮ್ವೀರ್ ಸಿಂಗ್ ಹಿಂದಿನ ಗೃಹ ಸಚಿವ ಅನಿಲ್ ದೇಶಮುಖ್ ವಿರುದ್ಧ ಪತ್ರವೊಂದನ್ನು ಬರೆದಿದ್ದರು. ತಿಂಗಳಿಗೆ ₹ 100 ಕೋಟಿ ಲಂಚ ವಸೂಲಿ ಮಾಡಲು ಸಚಿನ್ ವಾಜೆಗೆ ಅನಿಲ್ ದೇಶಮುಖ್ ಸೂಚಿಸಿದ್ದರು ಎಂದು ಪರಮ್ವೀರ್ ಸಿಂಗ್ ಆರೋಪಿಸಿದ್ದರು.
ವಿಚಾರಣೆ ನಡೆಸಿದ್ದ ಬಾಂಬೆ ಹೈಕೋರ್ಟ್ 15 ದಿನಗಳಲ್ಲಿ ಪ್ರಾಥಮಿಕ ವಿಚಾರಣೆ ನಡೆಸವಂತೆ ಸಿಬಿಐಗೆ ನಿರ್ದೇಶನ ನೀಡಿತ್ತು. ಬಾಂಬೆ ಹೈಕೋರ್ಟ್ ಆದೇಶ ಪ್ರಶ್ನಿಸಿ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಮತ್ತು ಮಹಾರಾಷ್ಟ್ರ ಸರ್ಕಾರ ಸುಪ್ರೀಂಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿತ್ತು. ಇದೀಗ ಬಾಂಬೆ ಹೈಕೋರ್ಟ್ ಆದೇಶವನ್ನೇ ಸುಪ್ರೀಂಕೋರ್ಟ್ ಎತ್ತಿಹಿಡಿದಿದೆ.