ಅನಿಲ್ ದೇಶ್ ಮುಖ್ ಲಂಚ ವಸೂಲಿ ಪ್ರಕರಣ: ಸಿಬಿಐ ತನಿಖೆ ನಡೆಸುವಂತೆ ಸುಪ್ರೀಮ್ ಕೋರ್ಟ್ ಆದೇಶ

ದೆಹಲಿ, ಏ. 08: ಮಹಾರಾಷ್ಟ್ರದ ಮಾಜಿ ಗೃಹ ಸಚಿವ, ಎನ್​ಸಿಪಿ ನಾಯಕ ಅನಿಲ್ ದೇಶಮುಖ್ ವಿರುದ್ಧ ಸಿಬಿಐ ತನಿಖೆ ನಡೆಸಲು ಸುಪ್ರೀಂಕೋರ್ಟ್​ ಗುರುವಾರ ಆದೇಶಿಸಿದೆ. ಈ ಸಂಬಂಧ ಬಾಂಬೆ ಹೈಕೋರ್ಟ್​ ನೀಡಿದ್ದ ತೀರ್ಪು ಪ್ರಶ್ನಿಸಿ ಅನಿಲ್ ದೇಶಮುಖ್ ಹಾಗೂ ಮಹಾರಾಷ್ಟ್ರ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್​ ತಳ್ಳಿಹಾಕಿದೆ.

ಈ ಪ್ರಕರಣದಲ್ಲಿ ಶಾಮೀಲಾಗಿರುವ ವ್ಯಕ್ತಿಗಳ ವಿರುದ್ಧ ಸ್ವತಂತ್ರ ತನಿಖಾ ಸಂಸ್ಥೆಯಿಂದ ತನಿಖೆ ನಡೆಯಬೇಕಿದೆ. ಹೈಕೋರ್ಟ್​ ಪ್ರಾಥಮಿಕ ತನಿಖೆ ನಡೆಸಬೇಕು ಎಂದು ಸೂಚಿಸಿತ್ತು. ಹೈಕೋರ್ಟ್​ ಆದೇಶದಲ್ಲಿ ನಾವು ಮಧ್ಯಪ್ರವೇಶಿಸುವುದಿಲ್ಲ ಎಂದು ಸುಪ್ರೀಂಕೋರ್ಟ್​ ತನ್ನ ಆದೇಶದಲ್ಲಿ ಸ್ಪಷ್ಟವಾಗಿ ತಿಳಿಸಿದೆ.

ಮುಂಬೈ ನಗರದ ಪೊಲೀಸ್ ಆಯುಕ್ತರಾಗಿದ್ದ ಪರಮ್​ವೀರ್ ಸಿಂಗ್ ಹಿಂದಿನ ಗೃಹ ಸಚಿವ ಅನಿಲ್​ ದೇಶಮುಖ್ ವಿರುದ್ಧ ಪತ್ರವೊಂದನ್ನು ಬರೆದಿದ್ದರು. ತಿಂಗಳಿಗೆ ₹ 100 ಕೋಟಿ ಲಂಚ ವಸೂಲಿ ಮಾಡಲು ಸಚಿನ್ ವಾಜೆಗೆ ಅನಿಲ್ ದೇಶಮುಖ್ ಸೂಚಿಸಿದ್ದರು ಎಂದು ಪರಮ್​ವೀರ್​ ಸಿಂಗ್ ಆರೋಪಿಸಿದ್ದರು.

ವಿಚಾರಣೆ ನಡೆಸಿದ್ದ ಬಾಂಬೆ ಹೈಕೋರ್ಟ್​ 15 ದಿನಗಳಲ್ಲಿ ಪ್ರಾಥಮಿಕ ವಿಚಾರಣೆ ನಡೆಸವಂತೆ ಸಿಬಿಐಗೆ ನಿರ್ದೇಶನ ನೀಡಿತ್ತು. ಬಾಂಬೆ ಹೈಕೋರ್ಟ್​ ಆದೇಶ ಪ್ರಶ್ನಿಸಿ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್​ ದೇಶಮುಖ್ ಮತ್ತು ಮಹಾರಾಷ್ಟ್ರ ಸರ್ಕಾರ ಸುಪ್ರೀಂಕೋರ್ಟ್​ನಲ್ಲಿ ಅರ್ಜಿ ಸಲ್ಲಿಸಿತ್ತು. ಇದೀಗ ಬಾಂಬೆ ಹೈಕೋರ್ಟ್​​ ಆದೇಶವನ್ನೇ ಸುಪ್ರೀಂಕೋರ್ಟ್​ ಎತ್ತಿಹಿಡಿದಿದೆ.

Exit mobile version