Visit Channel

ಅರಬ್ಬಿ ಸಮುದ್ರ ವಾಯುಭಾರ ಕುಸಿತ; ಕರಾವಳಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌

sea1560085851_1590949989

ಬೆಂಗಳೂರು, ಜು. 16: ಪೂರ್ವ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ರಾಜ್ಯಾದಾದ್ಯಂತ ಇಂದು ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ ಜು.18ರವರೆಗೆ ರಾಜ್ಯದ ಉತ್ತರ ಒಳನಾಡು, ದಕ್ಷಿಣ ಒಳನಾಡು, ಮಲೆನಾಡು ಮತ್ತು ಕರಾವಳಿಯಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿಎಸ್​ ಪಾಟೀಲ್​ ತಿಳಿಸಿದ್ದಾರೆ. ಈಗಾಗಲೇ ಉತ್ತರ ಕನ್ನಡ, ದಕ್ಷಿಣ ಕನ್ನಡ, ಮಲೆನಾಡಿನಲ್ಲಿ ಭಾರೀ ಮಳೆಯಾಗುತ್ತಿದ್ದು, ಹಲವೆಡೆ ರೆಡ್, ಯೆಲ್ಲೋ ಹಾಗೂ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಂಗಳೂರಿನಲ್ಲೂ ಕೂಡ ಇಂದು ಮತ್ತು ನಾಳೆ ಭಾರೀ ಬಿರುಗಾಳಿ ಸಹಿತ ಮಳೆಯಾಗಲಿದೆ ಎಂದು ನಿರೀಕ್ಷಿಸಲಾಗಿದೆ.

ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಭಾರಿ ಮಳೆ ಆಗಲಿದ್ದು, ಜು. 16ರಂದು ರೆಡ್​ ಅಲರ್ಟ್​ ಘೋಷಣೆ ಮಾಡಲಾಗಿದೆ. ಜು.17ರಂದು ಈ ಪ್ರದೇಶಗಳಲ್ಲಿ ಆರೆಂಜ್​ ಅಲರ್ಟ್​ ಘೋಷಿಸಲಾಗಿದೆ. ಕರಾವಳಿ ಪ್ರದೇಶದ ಮೀನುಗಾರರಿಗೂ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

ಚಿತ್ರದುರ್ಗ, ದಾವಣಗೆರೆ, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಾಧ್ಯತೆ ಇದ್ದು, ಜುಲೈ 18ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಜುಲೈ 16 ಮತ್ತು 17ರಂದು ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಬುಧವಾರ ಉತ್ತರ ಕನ್ನಡದ ಕದ್ರಾದಲ್ಲಿ 13 ಸೆಂ.ಮೀ ಮಳೆ, ಸುಬ್ರಮಣ್ಯ 10 ಸೆಂ.ಮೀ. ಸುಳ್ಯ, ದ.ಕ. ತಲಾ 9 ಸೆ.ಮೀ. ಮಳೆ ದಾಖಲು ಆಗಿದೆ.

ಬೆಂಗಳೂರಿನಲ್ಲೂ ಕೂಡ ಮುಂದಿನ ಎರಡು ದಿನ ಮಳೆಯಾಗಲಿದ್ದು ಗರಿಷ್ಠ ಉಷ್ಣಾಂಶ 24 ಡಿಗ್ರಿ ಸೆಂಟಿಗ್ರೇಡ್​, ಕನಿಷ್ಟ ಉಷ್ಣಾಂಶ 20 ಡಿಗ್ರಿ ಇರಲಿದೆ. ದಕ್ಷಿಣ ಕನ್ನಡದಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ಜಿಲ್ಲೆಯ ಪ್ರಮುಖ ನದಿಗಳಾದ ಕುಮಾರಧಾರಾ ಮತ್ತು ನೇತ್ರಾವತಿ ತುಂಬಿ ಹರಿಯುತ್ತಿದೆ. ಘಟ್ಟ ಪ್ರದೇಶಗಳಲ್ಲಿ ಕಳೆದ ನಾಲ್ಕೈದು ದಿನಗಳಿಂದ ನಿರಂತರವಾಗಿ ಭಾರೀ ಮಳೆಯಾಗುತ್ತಿದ್ದು, ಘಟ್ಟ ಪ್ರದೇಶಗಳಿಂದ ಹರಿದು ಬರುವ ಕುಮಾರಧಾರಾ ನದಿಯಲ್ಲಿ ನೀರಿನ ಹರಿವು ಭಾರೀ ಹೆಚ್ಚಳವಾಗಿದೆ.

ಕಳೆದ ಎರಡು ನಾಲ್ಕು ದಿನಗಳಿಂದ ಕರ್ನಾಟಕ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಅತಿಹೆಚ್ಚು ಮಳೆಯಾಗುತ್ತಿದೆ. ಕಳೆದೊಂದು ವಾರದಿಂದ ಕೊಂಚ ವಿರಾಮ ನೀಡಿದ್ದ ಮಳೆ ಕಳೆದ ಮೂರು ದಿನಗಳಿಂದ ಬಿರುಸು ಕೊಂಡಿದೆ. ಈಗಾಗಲೇ ಚಿಕ್ಕಮಗಳೂರು, ಶಿವಮೊಗ್ಗ, ದಕ್ಷಿಣ ಕನ್ನಡ, ಉಡುಪಿಗಳಲ್ಲಿ ನಿರಂತರ ಮಳೆಯಾಗುತ್ತಿದ್ದು, ಇನ್ನು ಮೂರು ದಿನ ಇದೇ ರೀತಿ ಮಳೆಯಾಗಲಿದೆ. ಅರಬ್ಬಿ ಸಮುದ್ರದಲ್ಲಿ ಏಳುವ ಗಾಳಿಯಿಂದ ಅಲೆಗಳ ಹೊಡೆತ ಇನ್ನಷ್ಟು ಹೆಚ್ಚಲಿದ್ದು, ಕಡಲ ಕೊರೆತ ಉಂಟಾಗುವ ಸಾಧ್ಯತೆ ಇದೆ. ಈ ಹಿನ್ನಲೆ ಈಗಾಗಲೇ ಈ ಪ್ರದೇಶಗಳಲ್ಲಿ ರೆಡ್​ ಆಲರ್ಟ್​ ಘೋಷಣೆ ಮಾಡಲಾಗಿದೆ.

ರಾಜ್ಯದಲ್ಲಿ ಈಗಾಗಲೇ ನೈರುತ್ಯ ಮಾನ್ಸೂನ್​ನಿಂದಾಗಿ ಉತ್ತಮ ಮಳೆಯಾಗುತ್ತಿದೆ. ಅಲ್ಲದೆ, ಜುಲೈ 18ರವರೆಗೂ ಕರ್ನಾಟಕದಲ್ಲಿ ಅತಿ ಹೆಚ್ಚಿನ ಮಳೆಯಾಗುವುದಾಗಿ ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ನೆರೆಯ ಕೇರಳ ಹಾಗೂ ಮಹಾರಾಷ್ಟ್ರ, ತಮಿಳುನಾಡಿನ ನೀಲಗಿರಿಯ ಪಶ್ಚಿಮ ಘಟ್ಟ, ಗುಜರಾತ್​ನ ಕೆಲ ಪ್ರದೇಶಗಳಲ್ಲಿ ಕೂಡ ಅಧಿಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.ಕರಾವಳಿಯಲ್ಲಿ ಇಂದು ಕೂಡಾ ಭಾರಿ ಮಳೆ ಮುಂದುವರೆದಿದ್ದು, ಮುಂದಿನ ನಾಲ್ಕೈದು ದಿ‌ನ ಮಳೆ ಇದೇ ರೀತಿ ಮುಂದುವರಿಯುವ ಸೂಚನೆಯನ್ನು ಹವಾಮಾನ ಇಲಾಖೆ ಈಗಾಗಲೇ ನೀಡಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜುಲೈ 16 ರಂದು ರೆಡ್‌ ಅಲರ್ಟ್‌ ಘೋಷಿಸಲಾಗಿದ್ದು, ಭಾರೀ ಮಳೆಯ ಸಾಧ್ಯತೆಯಿದೆ. ಕಳೆದ ನಾಲ್ಕೈದು ದಿನಗಳಿಂದ ಕರಾವಳಿಯಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಪ್ರಮುಖ ನದಿಗಳಾದ ನೇತ್ರಾವತಿ ‌ಮತ್ತು ಕುಮಾರಧಾರ ನದಿಗಳಲ್ಲಿ ನೀರಿನ ಹರಿವು ಹೆಚ್ಚಾಗಿದೆ.

ನದಿ ನೀರು ತಗ್ಗು ಪ್ರದೇಶಗಳಿಗೆ ನುಗ್ಗುವ ಸಾಧ್ಯತೆಯೂ ಇರುವ ಕಾರಣ ಬಂಟ್ವಾಳ, ಮಂಗಳೂರು ತಾಲೂಕಿನ ನದಿ ಅಂಚಿನಲ್ಲಿರುವ ಮನೆಗಳಿಗೂ ಪ್ರವಾಹದ ಎಚ್ಚರಿಕೆಯನ್ನು ನೀಡಲಾಗಿದೆ. ಜಿಲ್ಲೆಯಲ್ಲಿ ಮಳೆ‌ ಇನ್ನೂ‌ ನಾಲ್ಕೈದು ದಿನ ಮುಂದುವರಿಯಲಿದ್ದು, ಜುಲೈ 16( ಇಂದು) ಜಿಲ್ಲೆಯಾದ್ಯಂತ ರೆಟ್ ಅಲರ್ಟ್ ಘೋಷಿಸಲಾಗಿದೆ. ಅರಬ್ಬೀ ಸಮುದ್ರದಲ್ಲೂ ಮಳೆಯಿಂದಾಗಿ ಅಲೆಗಳು ಹೆಚ್ಚಾಗುವ ಕಾರಣಕ್ಕಾಗಿ ಮೀನುಗಾರರು ಕಡಲಿಗೆ ಇಳಿಯದಂತೆ ಜಿಲ್ಲಾಡಳಿತ ಸೂಚನೆ ನೀಡುವ ಸಾಧ್ಯತೆಯೂ ಹೆಚ್ಚಾಗಿದೆ.

ಕೊಡಗು ಜಿಲ್ಲೆಯಾದ್ಯಂತ ಎರಡು ದಿನಗಳಿಂದ ಬಿಟ್ಟುಬಿಡದೆ ಧಾರಾಕಾರ ಮಳೆ ಸುರಿಯುತ್ತಿದೆ. ಬಾಗಮಂಡಲ, ನಾಪೋಕ್ಲು, ಮಡಿಕೇರಿ, ಸುಂಟಿಕೊಪ್ಪ ಮತ್ತು ಸೋಮವಾರಪೇಟೆ ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಇದರಿಂದಾಗಿ ಕಾವೇರಿ ನದಿ ತುಂಬಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಇನ್ನು ಮಡಿಕೇರಿ ಭಾಗದಲ್ಲಿ ಬುಧವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡಂತೆ 24 ಗಂಟೆಯಲ್ಲಿ ಬರೋಬ್ಬರಿ 85 ಮಿಲಿಮೀಟರ್ ಮಳೆ ಸುರಿದಿದೆ. ಮಡಿಕೇರಿ ನಗರದಲ್ಲಿ ಆಕಾಶವಾಣಿ ಕೇಂದ್ರದ ಬಳಿ ಭೂಕುಸಿತವಾಗಿದೆ.

ಬೀದರ್, ಕಲಬುರ್ಗಿ, ರಾಯಚೂರು, ಯಾದಗಿರಿಯಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ. ಹಾಸನ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಇಂದು ಅಧಿಕ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್​.ಪಾಟೀಲ್ ಮಾಹಿತಿ ನೀಡಿದ್ದಾರೆ.

Latest News

China Ship
ದೇಶ-ವಿದೇಶ

ಶ್ರೀಲಂಕಾ ಬಂದರಿನಲ್ಲಿ ಚೀನಾದ ಹಡಗು ; ಭಾರತದ ಕಳವಳಕ್ಕೆ 5 ಕಾರಣಗಳು ಇಲ್ಲಿವೆ!

ಮೊದಲಿನಿಂದಲೂ ಈ ಹಡಗು ಶ್ರೀಲಂಕಾ ಬಂದರಿಗೆ ಬರುವುದನ್ನು ಭಾರತ ತೀವ್ರವಾಗಿ ವಿರೋಧಿಸಿತ್ತು. ಭಾರತದ ಕಳವಳಕ್ಕೆ ಪ್ರಮುಖ 5 ಕಾರಣಗಳೆಂದರೆ,

bjp
ರಾಜಕೀಯ

ಕಾಂಗ್ರೆಸ್ಸಿಗರಿಗೇಕೆ ಜಿಹಾದಿಗಳ ಮೇಲೆ ಇಷ್ಟೊಂದು ಪ್ರೀತಿ? : ಬಿಜೆಪಿ ಪ್ರಶ್ನೆ

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂಭ್ರಮಕ್ಕೆ ಮಸಿ ಬಳಿಯಲು ಯತ್ನಿಸಿದ ದುಷ್ಟ ಶಕ್ತಿಗಳನ್ನು ಮಟ್ಟ ಹಾಕಲಾಗಿದೆ ಎಂದು ಬಿಜೆಪಿ ತಿಳಿಸಿದೆ.

Pingali
ಮಾಹಿತಿ

ನಮ್ಮ ರಾಷ್ಟ್ರಧ್ವಜವನ್ನು ನಿರ್ಮಿಸಿದ ಪಿಂಗಳಿ ವೆಂಕಯ್ಯ, ಮೊದಲು ಬ್ರಿಟಿಷ್ ಸೈನ್ಯದಲ್ಲಿದ್ದರು ; ಇಲ್ಲಿದೆ ಓದಿ ಅಚ್ಚರಿಯ ಮಾಹಿತಿ

ದೇಶಕ್ಕೊಂದು ಧ್ವಜಕೊಟ್ಟು 100 ವರ್ಷ ಕಳೆದರೂ ಪಿಂಗಳಿ ಅವರ ನೆನಪು ಅಜರಾಮರವಾಗಿದೆ. ಪಿಂಗಳಿ ವೆಂಕಯ್ಯ ಅವರ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳೋಣ ಮುಂದೆ ಓದಿ.