ಬೆಳಗಾವಿ ಅ 07 : ಬೆಳಗಾವಿ ಜಿಲ್ಲೆಯ ಅಂಕಲಗಿಯಲ್ಲಿ ಗೋಡೆ ಕುಸಿತದಿಂದ ಮೃತಪಟ್ಟ 7 ಮಂದಿಯ ಕುಟುಂಬಕ್ಕೆ ತಲಾ 2 ಲಕ್ಷ ರೂ. ಗಳ ಪರಿಹಾರವನ್ನು ಪ್ರಧಾನಿ ಮೋದಿ ಘೋಷಿಸಿದ್ದಾರೆ.
ಈ ವಿಚಾರವನ್ನು ಪ್ರಧಾನಿ ಕಚೇರಿ ಟ್ವೀಟ್ ಮೂಲಕ ತಿಳಿಸಿದೆ. ಈ ಟ್ವೀಟ್‌ನಲ್ಲಿ ‘ಕರ್ನಾಟಕದ ಬೆಳಗಾವಿಯಲ್ಲಿ ಮನೆ ಕುಸಿದು ಜೀವಹಾನಿ ಸಂಭವಿಸಿದ ಸುದ್ದಿ ತಿಳಿದು ಅತೀವ ದುಃಖವಾಗಿದೆ. ದುಃಖತಪ್ತ ಕುಟುಂಬದ ಜೊತೆಗೆ ನಾನಿದ್ದೇನೆ. ಮೃತರ ಸಂಬಂಧಿಕರಿಗೆ ಪ್ರಧಾನ ಮಂತ್ರಿ ಪರಿಹಾರ ನಿಧಿಯಿಂದ ತಲಾ 2 ಲಕ್ಷ ಪರಿಹಾರ ನೀಡಲಾಗುವುದು’ ಎಂದು ತಿಳಿಸಲಾಗಿದೆ.
ಬೆಳಗಾವಿ ತಾಲೂಕಿನ ಬಡಾಲ ಅಂಕಲಗಿ ಗ್ರಾಮದಲ್ಲಿ ಭಾರಿ ಮಳೆಯಿಂದಾಗಿ ಕಳೆದ ರಾತ್ರಿ ಮನೆ ಕುಸಿದುಬಿದ್ದು ಇಬ್ಬರು ಮಕ್ಕಳು ಸೇರಿ 7 ಮಂದಿ ಮೃತಪಟ್ಟಿದ್ದರು. ಘಟನೆ ಸಂಬಂಧ ಈಗಾಗಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮೃತರ ಕುಟುಂಬಗಳಿಗೆ ತಲಾ ರೂ.2 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ.
ಘಟನೆ ಹಿನ್ನಲೆ : ಬೆಳಗಾವಿಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಮನೆ ಕುಸಿದ ಪರಿಣಾಮ ಒಂದೇ ಮನೆಯ ಏಳು ಜನರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಧಾರುಣ ಘಟನೆ ಬೆಳಗಾವಿ ತಾಲೂಕಿನ ಬಡಾಲ ಅಂಕಲಗಿ ಗ್ರಾಮದಲ್ಲಿ ಸಂಭವಿಸಿತ್ತು ಈ ಘಟನೆಯಲ್ಲಿ ಇಬ್ಬರು ಮಕ್ಕಳು ಸೇರಿ 7 ಮಂದಿ ಮೃತಪಟ್ಟಿದ್ದರು.