ಬೆಂಗಳೂರು ಸೆ 25 : ಮಾಜಿ ಮುಖ್ಯಮಂತ್ರಿ, ಬಿಜೆಪಿ ನಾಯಕ ಮತ್ತು ಶಿಕಾರಿಪುರ ಶಾಸಕ ಬಿ.ಎಸ್. ಯಡಿಯೂರಪ್ಪ ಅವರು ಅತ್ಯುತ್ತಮ ಶಾಸಕ ಪ್ರಶಸ್ತಿಗೆ ಪಾತ್ರರಾಗಿದ್ದಾರೆ. ಇದೇ ಮೊದಲ ಬಾರಿಗೆ ಈ ಪ್ರಶಸ್ತಿಯನ್ನು ನೀಡಲಾಗುತ್ತಿದ್ದು, ಚೊಚ್ಚಲ ಪ್ರಶಸ್ತಿ ಯಡಿಯೂರಪ್ಪ ಅವರಿಗೆ ಲಭಿಸಿದ್ದು ಅನೇಕ ನಾಯಕರಿಂದ ಅಭಿನಂದನೆಗಳ ಮಹಾಪೂರವೇ ಬಂದಿದೆ.
ಈ ಬಗ್ಗೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಮಾತನಾಡಿ ಯಡಿಯೂರಪ್ಪ ಅವರು ಶಾಸಕರಾಗಿ, ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿ, ಮುಖ್ಯಮಂತ್ರಿಯಾಗಿ ಸುದೀರ್ಘವಾಗಿ ಜನಪರವಾದಂತಹ ಕಾರ್ಯಗಳನ್ನು ಮಾಡಿದ್ದಾರೆ. ಅಲ್ಲದೆ, ಎಷ್ಟೇ ಕೆಲಸ ಕಾರ್ಯಗಳು ಇದ್ದರೂ ಶಾಸನ ಸಭೆ ನಡೆಯುತ್ತಿರುವ ಸಂದರ್ಭದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುತ್ತಾರೆ. ಎಲ್ಲರ ಅಭಿಪ್ರಾಯಗಳನ್ನು ಆಲಿಸಿ ಸ್ಪಷ್ಟ ನಿಲುವುಗಳನ್ನು ತೆಗೆದುಕೊಳ್ಳುತ್ತಾರೆ. ಹೀಗಾಗಿ ಅವರ ಸೇವೆಯನ್ನು ಗಮನಿಸಿ ಮೊದಲ ಪ್ರಶಸ್ತಿಗೆ ಅವರನ್ನು ಸಮಿತಿಯು ಆಯ್ಕೆ ಮಾಡಿದೆ ಎಂದರು. ವಿಧಾನಸಭೆಯಲ್ಲಿ ಶುಕ್ರವಾರ ನಡೆದ ಜಂಟಿ ಅಧಿವೇಶನದಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಯಡಿಯೂರಪ್ಪನವರಿಗೆ ಪ್ರಶಸ್ತಿ ನೀಡಿ ಸನ್ಮಾನಿಸಿದರು.
ಈ ಬಗ್ಗೆ ಟ್ವೀಟ್ ಮಾಡಿರುವ ಮಾಜಿ ಸಚಿವ ಸುರೇಶ್ ಕುಮಾರ್ ಕರ್ನಾಟಕ ವಿಧಾನಸಭೆಯಲ್ಲಿ ಈ ವರ್ಷದಿಂದ ಕೊಡಲು ನಿಶ್ಚಯಿಸಿರುವ ಅತ್ಯುತ್ತಮ ಶಾಸಕ ಮೊದಲ ಪ್ರಶಸ್ತಿಯನ್ನು ಮಾಜಿ ಮುಖ್ಯಮಂತ್ರಿ ಗಳಾದ ಸನ್ಮಾನ್ಯ ಶ್ರೀ ಯಡಿಯೂರಪ್ಪನವರಿಗೆ ನೀಡಲಾಯಿತು. ಲೋಕಸಭೆಯ ಸ್ಪೀಕರ್ ಶ್ರೀ ಓಂ ಬಿರ್ಲಾ ರವರು ಪ್ರಶಸ್ತಿ ಪ್ರಧಾನ ಮಾಡಿದ್ದಾರೆ ಎಂದು ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ.
ವಿಧಾನಸಭೆಯಲ್ಲಿ ಇಂದು ‘ಅತ್ಯುತ್ತಮ ಶಾಸಕ ಪ್ರಶಸ್ತಿ’ ಪಡೆದ ಮಾಜಿ ಮುಖ್ಯಮಂತ್ರಿಗಳು, ಅತ್ಯುತ್ತಮ ಸಂಸದೀಯ ಪಟು, ರೈತ ನಾಯಕರಾದ ಶ್ರೀ ಬಿ.ಎಸ್.ಯಡಿಯೂರಪ್ಪ ಅವರಿಗೆ ಹಾರ್ದಿಕ ಅಭಿನಂದನೆಗಳು ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಶುಭಕೋರಿದ್ದಾರೆ.
ಒಟ್ಟಾರೆಯಾಗಿ ಇದು ಕರ್ನಾಟಕ ವಿಧಾನಸಭಾ ಇತಿಹಾಸದಲ್ಲೇ ಮೊದಲ ಬಾರಿಗೆ ರಾಜಕೀಯ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ಗುರುತಿಸಿ ನೀಡಿದ ಪ್ರಶಸ್ತಿಯಾಗಿದೆ.