New Delhi: ಸರ್ಕಾರಕ್ಕೆ ಪಾವತಿ ಮಾಡಬೇಕಿರುವ ಆದಾಯ ತೆರಿಗೆ ಪ್ರಕರಣದಲ್ಲಿ ಸಿಲುಕಿಕೊಂಡಿರುವ ಕಾಂಗ್ರೆಸ್ (Congress) ಪಕ್ಷಕ್ಕೆ ಇದೀಗ ಕೇಂದ್ರ ಸರ್ಕಾರ ಬಿಗ್ ರಿಲೀಫ್ ನೀಡಿದೆ. ಲೋಕಸಭಾ ಚುನಾವಣೆ ಮುಗಿಯುವರೆಗೂ ಬಾಕಿ ಉಳಿಸಿಕೊಂಡಿರುವ ತೆರಿಗೆಯನ್ನು ವಸೂಲಿ ಮಾಡಲು ನಾವು ಯಾವುದೇ ಕ್ರಮ ತೆಗೆದುಕೊಳ್ಳುವುದಿಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆ.
ಕಾಂಗ್ರೆಸ್ ಪಕ್ಷ 3567 ಕೋಟಿ ರೂ. ಆದಾಯ ತೆರಿಗೆಯನ್ನು (Income Tax) ಪಾವತಿಸಿಲ್ಲ ಎಂದು ಆದಾಯ ತೆರಿಗೆ ಇಲಾಖೆ ಕಾಂಗ್ರೆಸ್ ಪಕ್ಷಕ್ಕೆ ನೋಟಿಸ್ ನೀಡಿತ್ತು. ತೆರಿಗೆ ಪಾವತಿಸುವಂತೆ ನೀಡಿದ ನೋಟಿಸ್ ಪ್ರಶ್ನಿಸಿ ಕಾಂಗ್ರೆಸ್ ಪಕ್ಷ ಸುಪ್ರೀಂಕೋರ್ಟ್ನಲ್ಲಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನ್ಯಾ. ಬಿ.ವಿ.ನಾಗರತ್ನ (B.V Nagarathna) ನೇತೃತ್ವದ ಪೀಠದ ವಿಚಾರಣೆಗೆ ಬಂದಿತು. ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ಪರವಾಗಿ ವಾದ ಮಂಡಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ದೇಶದಲ್ಲಿ ಸದ್ಯ ಲೋಕಸಭಾ ಚುನಾವಣೆ ನಡೆಯುತ್ತಿರುವುದರಿಂದ ಬಾಕಿ ಉಳಿಸಿರುವ ತೆರಿಗೆ ವಸೂಲಿ ಮಾಡಲು ಸರ್ಕಾರ ಯಾವುದೇ ಕ್ರಮ ತೆಗೆದುಕೊಳ್ಳುವುದಿಲ್ಲ. ಹೀಗಾಗಿ ಈ ಪ್ರಕರಣದ ವಿಚಾರಣೆಯನ್ನು ದಯವಿಟ್ಟು ಜೂನ್ ಎರಡನೇ ವಾರದಲ್ಲಿ ಪಟ್ಟಿ ಮಾಡಿ ಎಂದು ಮನವಿ ಮಾಡಿದರು.
ಕೇಂದ್ರ ಸರ್ಕಾರದ ಈ ಮನವಿಯನ್ನು ನ್ಯಾ. ನಾಗರತ್ನ ನೇತೃತ್ವದ ಪೀಠ ಪುರಸ್ಕರಿಸಿ ಮುಂದಿನ ವಿಚಾರಣೆಯನ್ನು ಜುಲೈ (July) ಎರಡನೇ ವಾರಕ್ಕೆ ಮುಂದೂಡಿತು. ಈ ಮೂಲಕ ಲೋಸಕಭಾ ಚುನಾವಣೆಯ ಸಂದರ್ಭದಲ್ಲಿ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದ ಕಾಂಗ್ರೆಸ್ ಪಕ್ಷಕ್ಕೆ ಇದೀಗ ಬಿಗ್ ರಿಲೀಫ್ (Big Relief) ದೊರಕಿದಂತಾಗಿದೆ. ಕೇಂದ್ರ ಸರ್ಕಾರ ಕಾಂಗ್ರೆಸ್ ಪಕ್ಷವನ್ನು ದುರ್ಬಲಗೊಳಿಸಲು ಸಂಚು ರೂಪಿಸಿದ್ದು, ಅದರ ಭಾಗವಾಗಿ ನಮ್ಮ ಆರ್ಥಿಕ ಶಕ್ತಿಯನ್ನು ಕುಗ್ಗಿಸಲು ಈ ರೀತಿಯ ಕ್ರಮಗಳನ್ನು ಕೈಗೊಳ್ಳುತ್ತಿದೆ. ಬಿಜೆಪಿ (BJP) ಸರ್ಕಾರ ವಿಪಕ್ಷಗಳ ಕತ್ತು ಹಿಸುಕುವ ಕೆಲಸ ಮಾಡುತ್ತಿದೆ. ಪ್ರಜಾಪ್ರಭುತ್ವವನ್ನು ನಾಶ ಮಾಡುವ ಕುತಂತ್ರ ರೂಪಿಸುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.