ಆರೋಗ್ಯ ಕಾರ್ಯಕರ್ತರಿಗೆ ಬೂಸ್ಟರ್‌ ಡೋಸ್‌ ಕುರಿತು ಕೇಂದ್ರದೊಂದಿಗೆ ಚರ್ಚೆ – ಬೊಮ್ಮಾಯಿ

 ಬೆಂಗಳೂರು ಡಿ 2 : ಕೊರೋನಾವೈರಸ್ ಸಾಂಕ್ರಾಮಿಕ ರೋಗದ ಮೂರನೇ ಅಲೆ ಭೀತಿ ಸೃಷ್ಟಿಯಾಗಿದೆ. ಈ ಹಿನ್ನೆಲೆಯಲ್ಲಿ ಮುಂಚೂಣಿ ಕಾರ್ಯಕರ್ತರು ಮತ್ತು ಆರೋಗ್ಯ ಕಾರ್ಯಕರ್ತರಿಗೆ ಬೂಸ್ಟರ್ ಡೋಸ್ ನೀಡುವತ್ತ ಕರ್ನಾಟಕ ಸರಕಾರ ಚಿಂತನೆ ನಡೆಸಿದೆ.

ಬೂಸ್ಟರ್ ಡೋಸ್ ನೀಡುವ ನಿಟ್ಟಿನಲ್ಲಿ ಕೇಂದ್ರ ಆರೋಗ್ಯ ಸಚಿವರೊಂದಿಗೆ ಇಂದು ಮಾತುಕತೆ ನಡೆಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.

ಆರೋಗ್ಯ ಕಾರ್ಯಕರ್ತರು ಮತ್ತು ಮುಂಚೂಣಿ ಕಾರ್ಯಕರ್ತರು ಕೊರೋನಾ ವಿರುದ್ಧದ ಲಸಿಕೆ ಪಡೆದು ಆರು ತಿಂಗಳುಗಳು ಕಳೆದಿವೆ. ಈ ಹಿನ್ನೆಲೆಯಲ್ಲಿ ಅವರಿಗೆ ಬೂಸ್ಟರ್ ಡೋಸ್ ನೀಡಬೇಕು ಎಂಬ ಬಗ್ಗೆ ರಾಜ್ಯದ ಟಾಸ್ಕ್ ಫೋರ್ಸ್ ಸಮಿತಿಯಲ್ಲಿ ಚರ್ಚೆ ನಡೆದಿದೆ. ಈ ನಿಟ್ಟಿನಲ್ಲಿ ಡಿಸೆಂಬರ್ 2ರಂದು ನವದೆಹಲಿಗೆ ತೆರಳಿ ಕೇಂದ್ರ ಆರೋಗ್ಯ ಸಚಿವರನ್ನು ಭೇಟಿಯಾಗಿ ಈ ಬಗ್ಗೆ ಚರ್ಚೆ ನಡೆಸುತ್ತೇನೆ ಎಂದು ಸಿಎಂ ಹೇಳಿದ್ದಾರೆ.

ಬೂಸ್ಟರ್ ಡೋಸ್ ಬಗ್ಗೆ ವೈಜ್ಞಾನಿಕ ಪ್ರಗತಿ ಮತ್ತು ಕೇಂದ್ರದ ಶಿಫಾರಸುಗಳ ಬಗ್ಗೆ ನಾನು ಚರ್ಚೆ ನಡೆಸುತ್ತೇನೆ ಎಂದು ಹೇಳಿದ್ದಾರೆ.

ಸಂಭಾವ್ಯ ಮೂರನೇ ಅಲೆಯನ್ನು ತಡೆಗಟ್ಟಲು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಆದರೆ ಲಾಕ್ಡೌನ್ ಯಾವುದೇ ಕಾರಣಕ್ಕೂ ಮಾಡುವುದಿಲ್ಲ ಎಂದು ಸಿಎಂ ಸ್ಪಷ್ಟಪಡಿಸಿದ್ದಾರೆ.

ಈಗಾಗಲೇ ವಿದೇಶಗಳಲ್ಲಿ ಕೊರೋನಾ ರೂಪಾಂತರ ಓಮಿಕ್ರಾನ್ ಸಾಂಕ್ರಾಮಿಕ ಕಾಣಿಸಿಕೊಂಡಿದೆ. ಭಾರತದಲ್ಲೂ ಇದು ಭೀತಿಯನ್ನು ಸೃಷ್ಟಿಸಿದೆ. ಹೀಗಾಗಿ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವ ನಿಟ್ಟಿನಲ್ಲಿ ರಾಜ್ಯ ಮತ್ತು ಕೇಂದ್ರ ಸರಕಾರಗಳು ಕಾರ್ಯಪ್ರವೃತ್ತವಾಗಿವೆ.

Exit mobile version