ನವದೆಹಲಿ, ಜು. 16: ದೇಶದಲ್ಲಿ ಕೊರೊನಾ ಮೂರನೇ ಅಲೆಯು ಆಗಸ್ಟ್ ಅಂತ್ಯದ ವೇಳೆಗೆ ಕಾಣಿಸಿಕೊಳ್ಳುವ ಸಾಧ್ಯತೆ ಇದೆ. ಆದರೆ ಅದು ಎರಡನೇ ಅಲೆಯಷ್ಟು ತೀವ್ರವಾಗಿ ಇರುವುದಿಲ್ಲ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ತಿಳಿಸಿದೆ.
ಕೋವಿಡ್ ಪ್ರಕರಣಗಳ ಏರಿಕೆಯ ಬಗ್ಗೆ ಸಂದರ್ಶನವೊಂದರಲ್ಲಿ ಮಾತನಾಡಿರುವ ಐಸಿಎಂಆರ್ ಸಾಂಕ್ರಾಮಿಕ ರೋಗಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಸಮೀರನ್ ಪಂಡಾ, ʼಮೂರನೇ ಅಲೆಯು ದೇಶವ್ಯಾಪಿ ಇರಲಿದೆ. ಆದರೆ, ಎರಡನೇ ಅಲೆಯಷ್ಟು ತೀವ್ರವಾಗಿ ಇರುವುದಿಲ್ಲʼ ಎಂದು ತಿಳಿಸಿದ್ದಾರೆ.
ಡೆಲ್ಟಾ ರೂಪಾಂತರ ಸೋಂಕಿನಿಂದ, ಸಾರ್ವಜನಿಕ ಆರೋಗ್ಯ ಪರಿಸ್ಥಿತಿ ತೀರಾ ಹದಗೆಡುತ್ತಿದೆ. ಜನರ ಜೀವ, ಜೀವನೋಪಾಯ ಮತ್ತು ಜಾಗತಿಕ ಆರ್ಥಿಕ ಚೇತರಿಕೆ ಮೇಲೂ ಪರಿಣಾಮ ಉಂಟಾಗುತ್ತಿದೆ. ಕಡಿಮೆ ಪ್ರಮಾಣದಲ್ಲಿ ಕೋವಿಡ್ ಲಸಿಕೆ ನೀಡಿರುವ ರಾಷ್ಟ್ರಗಳಲ್ಲಿ ಆರೋಗ್ಯ ಪರಿಸ್ಥಿತಿ ಇನ್ನೂ ಭೀಕರವಾಗಿದೆ. ಆದರೆ, ಯಾವ ದೇಶದಲ್ಲೂ ಸಾಂಕ್ರಾಮಿಕ ರೋಗ ಪರಿಪೂರ್ಣವಾಗಿ ನಿವಾರಣೆಯಾಗಿಲ್ಲ. ಈ ಸಾಂಕ್ರಾಮಿಕವನ್ನು ಸಂಪೂರ್ಣವಾಗಿ ತೊಡೆದು ಹಾಕಲು ಇಡೀ ವಿಶ್ವವೇ ಒಟ್ಟಾಗಿ ಹೋರಾಟ ಮಾಡಬೇಕು ಎಂದು ಕರೆ ನೀಡಿದ್ದರು.
ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 38,949 ಹೊಸ ಪ್ರಕರಣಗಳು ವರದಿಯಾಗಿವೆ. ಇದೇ ವೇಳೆ 542 ಸೋಂಕಿತರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.