ಮುಂಬೈ, ಏ. 06: ಮಾಜಿ ಪೊಲೀಸ್ ಆಯುಕ್ತ ಪರಮ್ವೀರ್ ಸಿಂಗ್ ಅವರ ಆರೋಪಗಳನ್ನು ಆಧರಿಸಿ ಮಾಜಿ ಗೃಹ ಸಚಿವ ಅನಿಲ್ ದೇಶ್ಮುಖ್ ವಿರುದ್ಧ ಸಿಬಿಐ ತನಿಖೆಗೆ ಆದೇಶಿಸಿದ ಬಾಂಬೆ ಹೈಕೋರ್ಟ್ ಆದೇಶ ಪ್ರಶ್ನಿಸಿ ಮಹಾರಾಷ್ಟ್ರ ಸರ್ಕಾರವು ಇಂದು ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿದೆ. ಪ್ರತಿ ತಿಂಗಳು ₹ 100 ಕೋಟಿಯನ್ನು ಸಂಗ್ರಹಿಸಿಕೊಡುವಂತೆ ಬಂಧಿತ ಪೊಲೀಸ್ ಅಧಿಕಾರಿ ಸಚಿನ್ ವಾಜೆಗೆ ಹಿಂದಿನ ಗೃಹಸಚಿವ ಅನಿಲ್ ದೇಶ್ಮುಖ್ ಸೂಚಿಸಿದ್ದರು ಎಂದು ಪರಮ್ವೀರ್ ಸಿಂಗ್ ಗಂಭೀರ ಆರೋಪ ಮಾಡಿದ್ದರು.
ಮುಖ್ಯನ್ಯಾಯಮೂರ್ತಿ ದೀಪಾಂಕರ್ ದತ್ತ ಮತ್ತು ನ್ಯಾಯಮೂರ್ತಿ ಗಿರೀಶ್ ಕುಲಕರ್ಣಿ ಅವರಿದ್ದ ಬಾಂಬೆ ಹೈಕೋರ್ಟ್ನ ವಿಭಾಗೀಯ ಪೀಠವು ಸೋಮವಾರ ಸಿಬಿಐ ತನಿಖೆಗೆ ಆದೇಶಿಸಿತ್ತು. ಈ ಬೆನ್ನಲ್ಲೇ ಎನ್ಸಿಪಿ ನಾಯಕರೂ ಆಗಿರುವ ಅನಿಲ್ ದೇಶ್ಮುಖ್ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. 15 ದಿನದ ಒಳಗೆ ಪ್ರಾಥಮಿಕ ತನಿಖೆ ನಡೆಸಿ ವರದಿ ನಿಡುವಂತೆ ಸಿಬಿಐಗೆ ಬಾಂಬೆ ಹೈಕೋರ್ಟ್ ಸೂಚನೆ ನೀಡಿತ್ತು.