ಚಿಕ್ಕಬಳ್ಳಾಪುರ, ಫೆ. 23: ತಾಲೂಕಿನ ಹಿರೇನಾಗವೇಲ್ಲಿ ಗ್ರಾಮದ ಬಳಿ ಸಂಭವಿಸಿದ ಜಿಲೆಟಿನ್ ಸ್ಪೋಟ ಪ್ರಕರಣದ ಬಗ್ಗೆ ವಿಷಾದ ವ್ಯಕ್ತಪಡಿಸಿರುವ ಸಚಿವ ಸುಧಾಕರ್, ಅಕ್ರಮ ಚಟುವಟಿಕೆಗಳಲ್ಲಿ ತೊಡಗಿರುವವರ ವಿರುದ್ಧ ತನಿಖೆ ನಡೆಸಿ ಕಠಿಣ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಘಟನೆಗೆ ಸಂಬಂಧಿಸಿದಂತೆ ಅಧಿಕಾರಿಗಳಿಂದ ಮಾಹಿತಿ ಪಡೆದರು. ಈ ವೇಳೆ ಮಾತನಾಡಿದ ಅವರು, ಚಿಕ್ಕಬಳ್ಳಾಪುರ ತಾಲೂಕು ಹಿರೇನಾಗವೇಲ್ಲಿ ಗ್ರಾಮದ ಬಳಿ ಜಿಲೆಟಿನ್ ಸ್ಫೋಟ ಸಂಭವಿಸಿದ
ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಾಯಿತು. ಇದು ಅತ್ಯಂತ ವಿಷಾದಕರ ಘಟನೆಯಾಗಿದ್ದು, ಕಾನೂನು ಉಲ್ಲಂಘಿಸಿ ಅಕ್ರಮ ಚಟುವಟಿಕೆಗಳಲ್ಲಿ ತೊಡಗಿರುವವರ ವಿರುದ್ಧ ತನಿಖೆ ನಡೆಸಿ ಕಠಿಣ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಅಲ್ಲದೇ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಜೊತೆ ಘಟನಾ ಸ್ಥಳದಿಂದಲೇ ದೂರವಾಣಿ ಮೂಲಕ ಮಾತನಾಡಿದ್ದೇನೆ. ಪೊಲೀಸ್ ಅಧಿಕಾರಿಗಳು ಈಗಾಗಲೇ ಇಬ್ಬರು ವ್ಯಕ್ತಿಗಳನ್ನು ಬಂಧಿಸಿದ್ದಾರೆ. ಈ ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಈ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುವುದಾಗಿ ತಿಳಿಸಿದ್ದಾರೆ.