ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ನಿಯಂತ್ರಿಸುವಿಕೆಗೆ ಸಂಬಂಧಪಟ್ಟಂತೆ ಕಾಲಕಾಲಕ್ಕೆ ಸೂಕ್ತ ಮಾರ್ಗಸೂಚಿ ತಯಾರಿಸುತ್ತಾ ಅಧಿಕಾರಿಗಳಿಗೆ, ಜನರಿಗೆ ಸಲಹೆ ಸೂಚನೆ ನೀಡುವ ಜತೆಗೆ ಸರ್ಕಾರದ ಇನ್ನಿತರ ಜವಾಬ್ದಾರಿ ನಿಭಾಯಿಸುತ್ತಿದ್ದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಯಡಿಯೂರಪ್ಪ, ನನ್ನ ಕೊರೊನಾ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಬಂದಿದ್ದು, ರೋಗಲಕ್ಷಣಗಳು ಇಲ್ಲದಿದ್ದರೂ ಮುನ್ನೆಚ್ಚರಿಕೆ ದೃಷ್ಟಿಯಿಂದ, ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದಿರುವವರು, ಕ್ವಾರಂಟೈನ್ ನಲ್ಲಿದ್ದು ಮುಂಜಾಗ್ರತೆ ವಹಿಸಿ ಎಂದು ಮನವಿ ಮಾಡಿದ್ದಾರೆ.
ಮುಖ್ಯಮಂತ್ರಿಗಳಿಗೆ ಕೊರೊನಾ ಪಾಸಿಟಿವ್ ಬಂದಿರುವುದು ರಾಜ್ಯದ ಜನರ ಆತಂಕ ಹೆಚ್ಚಿಸಿದೆ. ಈ ನಡುವೆ ಮಹಾಮಾರಿಗೆ ತುತ್ತಾಗಿರುವ ಯಡಿಯೂರಪ್ಪ ಅವರು ಶೀಘ್ರವೇ ಗುಣಮುಖರಾಗಲಿ ಸಚಿವ ಸಂಪುಟದ ಸದಸ್ಯರು ಸೇರಿದಂತೆ ಹಲವರು ಹಾರೈಸಿದ್ದಾರೆ.