ಬೆಂಗಳೂರು, ಏ. 17: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಕೊರೊನಾ ಸೋಂಕು ತಗುಲಿರುವ ಹಿನ್ನೆಲೆಯಲ್ಲಿ ಏ.18ರಂದು ನಡೆಯಬೇಕಿದ್ದ ಸರ್ವಪಕ್ಷ ಸಭೆಯನ್ನು ಮುಂದೂಡಲಾಗಿದೆ.
ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸೋಂಕು ಹರಡುವುದನ್ನು ತಡೆಯುವ ನಿಟ್ಟಿನಲ್ಲಿ ಲಾಕ್ಡೌನ್ನಂತಹ ಕ್ರಮ ಒಂದೇ ಪರಿಹಾರವಲ್ಲ. ಇದರ ಹೊರತಾಗಿ ನಿಯಂತ್ರಣಕ್ಕೆ ಯಾವ ಕ್ರಮ ಕೈಗೊಳ್ಳಬಹುದು ಎಂಬ ಕುರಿತು ಅಭಿಪ್ರಾಯ ತಿಳಿಸುವಂತೆ ಹಾಗೂ ಸರ್ಕಾರದ ವತಿಯಿಂದ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚಿಸುವ ನಿಟ್ಟಿನಲ್ಲಿ ಏ.18ರಂದು ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಸರ್ವಪಕ್ಷ ಸಭೆ ಕರೆಯಲಾಗಿತ್ತು.
ಆದರೆ ಸಿಎಂ ಯಡಿಯೂರಪ್ಪ ಅವರಿಗೆ ಕೊರೊನಾ ಸೋಂಕು ತಗುಲಿದ ಪರಿಣಾಮ ಶುಕ್ರವಾರ ಬೆಂಗಳೂರಿನ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಹಿನ್ನೆಲೆಯಲ್ಲಿ ನಾಳೆ ಸಂಜೆ 4 ಗಂಟೆಗೆ ಕರೆಯಲಾಗಿದ್ದ ಸರ್ವಪಕ್ಷ ಸಭೆಯನ್ನು ಮುಂದೂಡಲಾಗಿದೆ. ಅಲ್ಲದೇ ಮುಖ್ಯಮಂತ್ರಿಗಳ ಆರೋಗ್ಯ ಸ್ಥಿತಿ ನೋಡಿಕೊಂಡು ಮತ್ತೆ ಸಭೆ ಕರೆಯಲು ನಿರ್ಧಿರಿಸಲಾಗಿದೆ.
ರಾಜ್ಯದಲ್ಲಿ ಕೊರೊನಾ ಹೊಸ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಉಲ್ಬಣಿಸುತ್ತಿದೆ. ಸೋಂಕು ಹರಡುವುದನ್ನು ತಡೆಗಟ್ಟಲು ಸರ್ಕಾರ ಈಗಾಗಲೇ ಹಲವು ಕ್ರಮಗಳನ್ನು ಕೈಗೊಂಡರು ಸೋಂಕಿತರ ಸಂಖ್ಯೆ ಮಾತ್ರ ದಿನದಿಂದ ದಿನಕ್ಕೆ ಏರಿಕೆ ಆಗುತ್ತಲೇ ಇದೆ. ಈ ನಡುವೆ ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗಿರುವ ಪರಿಣಾಮ ಸೂಕ್ತ ಚಿಕಿತ್ಸೆ ದೊರೆಯದೆ ರೋಗಿಗಳು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎನ್ನಲಾಗಿದೆ.
ಈ ನಡುವೆ ರಾಜ್ಯದಲ್ಲಿ ಶುಕ್ರವಾರ ಸಹ ಕೊರೊನಾ ಸ್ಪೋಟಗೊಂಡಿದ್ದು, ರಾಜ್ಯದಲ್ಲಿ 14,859 ಕೊರೊನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು,
ಒಂದೇ ದಿನ 78 ಸೋಂಕಿತರು ಕೊರೊನಾಗೆ ಬಲಿಯಾಗಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿ 9,917 ಕೇಸ್ ಪತ್ತೆ, 57 ಮಂದಿ ಸಾವನ್ನಪ್ಪಿದ್ದಾರೆ. ಉಳಿದಂತೆ ಕರ್ನಾಟಕದಲ್ಲಿ 79,616 ಸಕ್ರಿಯ ಪ್ರಕರಣಗಳಿವೆ.