ಬೆಂಗಳೂರು ಜ 12 : ಕಾಂಗ್ರೆಸ್ ನಡೆಸುತ್ತಿರುವ ಪಾದಯಾತ್ರೆಗೆ ಹೈಕೋರ್ಟ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಕೊರೋನಾ ಕೇಸ್ ಹೆಚ್ಚುತ್ತಿರೋ ಹೊತ್ತಲ್ಲಿ ಪಾದಯಾತ್ರೆ ಬೇಕಿತ್ತಾ ಎಂದು PILನಲ್ಲಿ ಪ್ರಶ್ನಿಸಿದ್ದರು. ಇದೀಗ ಹೈಕೋರ್ಟ್, ಪಾದಯಾತ್ರೆ ಸಾರ್ವಜನಿಕ ಹಿತಾಸಕ್ತಿಗೆ ವಿರುದ್ಧವಾಗಿದ್ದರೂ ಏಕೆ ಕ್ರಮ ಕೈಗೊಂಡಿಲ್ಲ, ಜನವರಿ 14ರಂದು ನಮಗೆ ಉತ್ತರ ಕೊಡಿ ಎಂದು ಸರ್ಕಾರಕ್ಕೆ ಸೂಚನೆ ನೀಡಿದೆ.
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಮೂರನೇ ಅಲೆ ನಿಯಂತ್ರಿಸಲು ಕರ್ನಾಟಕ ಸರ್ಕಾರ ಕಠಿಣ ನಿಯಮಗಳನ್ನ ಜಾರಿಗೆ ತಂದಿದೆ. ಆದರೆ ಕಾಂಗ್ರೆಸ್ ನಾಯಕರು ಕೊರೊನಾ ನಿಮಯಗಳನ್ನ ಗಾಳಿಗೆ ತೂರಿ ಮೇಕೆದಾಟು ಯೋಜನೆ ಆಗ್ರಹಿಸಿ ಪಾದಯಾತ್ರೆ ನಡೆಸುತ್ತಿದ್ದಾರೆ. ಹೀಗಾಗಿ ಕಾಂಗ್ರೆಸ್ ಪಾದಯಾತ್ರೆ ನಿಲ್ಲಿಸಬೇಕೆದು ಹೈಕೋರ್ಟ್ ಗೆ ವಕೀಲ ಶ್ರೀಧರ್ ಪ್ರಭು ಎಂಬುವವರು ಕೂಡ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿ ತುರ್ತು ವಿಚಾರಣೆ ನಡೆಸುವಂತೆ ಮನವಿ ಮಾಡಿಕೊಂಡಿದ್ದರು.
ಮೇಕೆದಾಟು ಯೋಜನೆಗೆ ಕಾಂಗ್ರೆಸ್ ಪಕ್ಷಕ್ಕೆ ಪಾದಯಾತ್ರೆ ನಡೆಸಲು ಅನುಮತಿ ನೀಡಿಲ್ಲ ಎಂದಾದ ಮೇಲೆ ಪಾದಯಾತ್ರೆ ತಡೆಯಲು ಹಿಂಜರಿಕೆ ಏಕೆ. ಸರ್ಕಾರ ಅಷ್ಟೊಂದು ಅಸಮರ್ಥವಾಗಿದೆಯಾ? ನ್ಯಾಯಾಲಯ ನೆರವಿಗೆ ಬರಬೇಕು ಎಂದು ಸರ್ಕಾರ ನಿರೀಕ್ಷಿಸುತ್ತಿದೆಯಾ? ಎಂದು ಹೈಕೋರ್ಟ್ ರಾಜ್ಯ ಸರ್ಕಾರವನ್ನು ಪ್ರಶ್ನಿಸಿದೆ.
ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಭಾರಿ ಪ್ರಮಾಣದಲ್ಲಿ ಏರಿಕೆಯಾಗುತ್ತಿರುವ ಈ ಅಪಾಯಕಾರಿ ಸಂದರ್ಭದಲ್ಲಿ ಜನ ಸೇರುವ ರ್ಯಾಲಿ, ಧರಣಿ, ಪ್ರದರ್ಶನ, ಮೆರವಣಿಗೆಗಳಿಗೆ ನಿರ್ಬಂಧ ಹೇರಿದ್ದರೂ, ಅವುಗಳಿಗೆ ಅವಕಾಶ ನೀಡುತ್ತಿರುವುದು ಹೇಗೆ? ವಿಶೇಷವಾಗಿ ಕಾಂಗ್ರೆಸ್ ಪಕ್ಷ ಪಾದಯಾತ್ರೆ ಹೇಗೆ ಮುಂದುವರಿಸಿದೆ, ಅದನ್ನು ತಡೆಯಲು ಕ್ರಮ ಕೈಗೊಂಡಿಲ್ಲವೇಕೆ ಎಂಬ ಬಗ್ಗೆ ಸ್ಪಷ್ಟನೆ ನೀಡುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ.