ಶಾಂತಿ ಕಾಲದಲ್ಲಿ ಕಲಹಕ್ಕೆ ಬರುವುದು, ನೆರೆ ಮನೆ ಬೆಂಕಿಯಲ್ಲಿ ಬೇಳೆ ಬೇಯಿಸುವುದು ಕಾಂಗ್ರೆಸ್‌ನ ಜಾಡ್ಯ: ಮಾಜಿ ಸಿಎಂ‌ ಕುಮಾರಸ್ವಾಮಿ ಟೀಕೆ

ಬೆಂಗಳೂರು, ಮೇ. 20: ಶಾಂತಿ ಕಾಲದಲ್ಲಿ ಕಲಹಕ್ಕೆ ಬರುವುದು, ನೆರೆ ಮನೆ ಬೆಂಕಿಯಲ್ಲಿ ಬೇಳೆ ಬೇಯಿಸುವುದು ಕಾಂಗ್ರೆಸ್‌ನ ಜಾಡ್ಯವಾವಿದ್ದು, ಸಿದ್ದರಾಮಯ್ಯ ಈ ಅಂಟುರೋಗಕ್ಕೆ ಒಳಗಾಗಿದ್ದಾರೆ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ಕೋವಿಡ್ ಲಸಿಕೆ ವಿಚಾರದಲ್ಲಿ ಕಾಂಗ್ರೆಸ್‌ನ ಆತ್ಮವಂಚನೆ ನೆನಪಿಸಿದ್ದಕ್ಕೆ ಸಿದ್ದರಾಮಯ್ಯ ನನ್ನ ವಿರುದ್ಧ ಕಾಲು ಕೆರೆದುಕೊಂಡು ಬಂದಿದ್ದು, ಅವರ ಪ್ರತಿ ಎಸೆತಕ್ಕೆ ಸಿಕ್ಸರ್‌ ಕೊಡಬೇಕೆನಿಸಿದೆ. ಕೋವಿಡ್‌ ಲಸಿಕೆ ವಿಚಾರದಲ್ಲಿನ ಕಾಂಗ್ರೆಸ್‌ ಆತ್ಮವಂಚನೆ ಪ್ರಸ್ತಾಪಿಸಿದ್ದಕ್ಕೆ ನಾನು ಸ್ವಯಂ ಗೋಲು ಹೊಡೆದುಕೊಂಡಿರುವುದಾಗಿ ನೀವು ಹೇಳಿದ್ದೀರಿ. ಸಿದ್ದರಾಮಯ್ಯ ಅವರೇ ಲಸಿಕೆ ವಿಚಾರದಲ್ಲಿ ರಾಷ್ಟ್ರದ ಎದುರು ಬೆತ್ತಲಾಗಿ, ನಿಂತಿರುವುದು ಕಾಂಗ್ರೆಸ್‌. ಈ ವಿಚಾರದಲ್ಲಿ ನನ್ನನ್ನು ಟೀಕಿಸಲು ಬಂದು ನೀವು ಹಿಟ್‌ ವಿಕೆಟ್‌ ಆಗಿದ್ದೀರಿ ಎಂದು ಟೀಕಿಸಿದ್ದಾರೆ.

ಲಸಿಕೆ ವಿಚಾರವಾಗಿ ಕಾಂಗ್ರೆಸ್ ಅನುಮಾನದ ಮಾತುಗಳನ್ನು ಆಡಲಿಲ್ಲವೇ? ಭಾರತದ್ದೇ ಕೋವ್ಯಾಕ್ಸಿನ್‌ನ ಬಗ್ಗೆ ಅಪಪ್ರಚಾರ ಮಾಡಲಿಲ್ಲವೇ? ನಮ್ಮದೇ ಲಸಿಕೆಯನ್ನು ನೀವು ಪ್ರೋತ್ಸಾಹಿಸಬೇಕಿತ್ತೋ ಇಲ್ಲವೋ? ಅದು ಬಿಟ್ಟು ನೀವು ಮಾಡಿದ್ದೇನು? ಅಡಿಗಡಿಗೆ ಲಸಿಕೆ ಮೇಲೆ ಅನುಮಾನ. ಈ ಮೂಲಕ ಭಾರತೀಯ ವಿಜ್ಞಾನಿಗಳ ಅಪಮಾನ. ಇದನ್ನೇ ಅಲ್ಲವೇ ನಾನು ಹೇಳಿದ್ದು?. ಕಾಂಗ್ರೆಸ್‌ನ ಲಸಿಕೆ ರಾಜಕಾರಣವನ್ನು ನಾನು ವಿವರಿಸಿದ್ದೇನೆ. ಕಾಂಗ್ರೆಸ್‌ನ ಅಪಪ್ರಚಾರದಿಂದ ಜನ ಲಸಿಕೆ ಹಾಕಿಸಿಕೊಳ್ಳುತ್ತಿಲ್ಲ ಎಂದು ನಾನು ಹೇಳಿಲ್ಲ. ಲಸಿಕೆಗಾಗಿ ಜನರು ಸಿದ್ದರಾಗಿಯೇ ಇದ್ದಾರೆ. ಕಾಂಗ್ರೆಸ್‌ ಹೇಳಿದ ಮಾತ್ರಕ್ಕೆ ಜನ ಲಸಿಕೆಯಿಂದ ವಿಮುಖರಾಗಿಲ್ಲ. ಜನ ಕಾಂಗ್ರೆಸ್‌ ಮಾತು ಕೇಳುತ್ತಾರೆ ಎಂಬ ಭ್ರಮೆ ಸಿದ್ದರಾಮಯ್ಯನವರಿಗೆ ಬೇಡ ಎಂದು ಕಿಡಿಕಾರಿದ್ದಾರೆ.

ಲಸಿಕೆಯೊಂದು ಸಿಕ್ಕಾಗ ಅದನ್ನು ಮೊದಲಿಗೆ ಮುಂಚೂಣಿ ಹೋರಾಟಗಾರರಿಗೆ ನೀಡಲಾಗುತ್ತದೆ. ಇದು ನಿಮಗೆ ತಿಳಿದಿರಲಿ. ದೇಶದಲ್ಲಿ ಮೊದಲು ಕೋವಿಡ್‌ ವಾರಿಯರ್‌ಗಳಿಗೆ ಲಸಿಕೆ ನೀಡಲಾಯಿತು. ನನ್ನ ಸರದಿ ಬಂದಾಗ ನಾನು ಲಸಿಕೆ ಪಡೆದೆ. ಇಲ್ಲಿ ಕಾಂಗ್ರೆಸ್‌ ಮಾತು ನಂಬಿ ಕೂರುವಂಥದ್ದೇನಿತ್ತು. ಕಾಂಗ್ರೆಸ್‌ ಮಾತನ್ನು 50 ವರ್ಷದಿಂದಲೂ ಕೇಳದ ಕುಟುಂಬ ನಮ್ಮದು. ದೇಶದಲ್ಲಿ ಸರ್ವರಿಗೂ ಉಚಿತ ಲಸಿಕೆ ಹಾಕುವಂತೆ ಸೋನಿಯಾ ಗಾಂಧಿ ಅವರ ಜೊತೆಗೂಡಿ ಎಚ್‌.ಡಿ ದೇವೇಗೌಡರು ಪ್ರಧಾನಿಗೆ ಪತ್ರ ಬರೆದರು ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಸಿದ್ದರಾಮಯ್ಯನವರೇ, ದೇಶದ ಹಲವು ವಿರೋಧಪಕ್ಷಗಳ ನಾಯಕರ ಜೊತೆಗೂಡಿ ದೇವೇಗೌಡರು ಪ್ರಧಾನಿಗೆ ಪತ್ರ ಬರೆದರೇ ಹೊರತು,ಸೋನಿಯಾ ಗಾಂಧಿ ಅವರ ಜೊತೆಗೂಡಿ ಪತ್ರ ಬರೆಯಲಿಲ್ಲ ನೆನಪಿರಲಿ ಎಂದಿದ್ದಾರೆ.

ಅಷ್ಟಕ್ಕೂ, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬರೆದ ಪತ್ರಕ್ಕೆ ಸಹಿ ಮಾಡುವಂತೆ ದೇವೇಗೌಡರಿಗೆ ಯಾರೆಲ್ಲ ವಿನಂತಿಸಿದ್ದರು, ಎಷ್ಟು ಬೇಡಾಡಿದರು ಎಂಬುದು ಸಿದ್ದರಾಮಯ್ಯನವರಿಗೆ ಗೊತ್ತಿದೆಯೇ? ದೆಹಲಿಗೆ ಹೋಗಿ ಈ ವಿಚಾರವಾಗಿ ಸಿದ್ದರಾಮಯ್ಯನವರು ಮಾಹಿತಿ ಪಡೆದು ಬರಲಿ. ಮಾಹಿತಿ ಇಲ್ಲದೇ ಮಾತಾಡುವುದು ಸಿದ್ದರಾಮಯ್ಯನವರಿಗಿರುವ ದೊಡ್ಡ ಸಮಸ್ಯೆ. ಅಸಮರ್ಪಕ ಲಸಿಕೆ ಅಭಿಯಾನ ವಿರುದ್ಧ ನಮ್ಮದೂ ಆಕ್ಷೇಪಣೆಗಳಿವೆ. ಆದರೆ, ಲಸಿಕೆ ವಿರುದ್ಧ ನಮ್ಮ ನಿಲುವು ಇಲ್ಲ. ಲಸಿಕೆ ಅಭಿಯಾನ ಸಮರ್ಪಕವಾಗಿ ನಡೆಯಬೇಕೆಂದು ಒತ್ತಾಯಿಸಿ ನಾನು ಸರ್ಕಾರಗಳಿಗೆ ಹಲವು ಸಲಹೆ ನೀಡಿದ್ದೇನೆ. ಆದರೆ, ಕಾಂಗ್ರೆಸ್‌ ಲಸಿಕೆ ವಿರುದ್ಧವೇ ಮಾತಾಡಿತು. ಈಗ ಲಸಿಕೆ, ಲಸಿಕೆ ಎನ್ನುತ್ತಿದೆ. ಇದು ಕಾಂಗ್ರೆಸ್‌ನ ಇಬ್ಬಗೆ ನೀತಿ ಎಂದು ಕಾಂಗ್ರೆಸ್ ನಾಯಕರ ವಿರುದ್ದ ಕಿಡಿಕಾರಿದ್ದಾರೆ.

Latest News

ದೇಶ-ವಿದೇಶ

ಮನೆ ಮತ್ತು ಕಾರ್ಪೊರೇಟ್ ಕಚೇರಿಗಳ ಮೇಲೆ ಶೇ.18 ರಷ್ಟು ಜಿಎಸ್‌ಟಿ ? ; ಏನಿದು ಗೊಂದಲ ಇಲ್ಲಿದೆ ಮಾಹಿತಿ

ಹೊಸ ನಿಯಮಗಳ ಪ್ರಕಾರ, ಜಿಎಸ್‌ಟಿ ನೋಂದಾಯಿತ ಹಿಡುವಳಿದಾರನು ರಿವರ್ಸ್ ಚಾರ್ಜ್ ಮೆಕ್ಯಾನಿಸಂ (RCM) ಅಡಿಯಲ್ಲಿ ತೆರಿಗೆಯನ್ನು ಪಾವತಿಸಲು ಹೊಣೆಗಾರನಾಗಿರುತ್ತಾನೆ.

ಪ್ರಮುಖ ಸುದ್ದಿ

ತಾಜುದ್ದೀನ್ಜುನೈದೀ ಮತ್ತು  ಶಿವಮೊಗ್ಗ ಸುಬ್ಬಣ್ಣ ನಿಧನಕ್ಕೆ ಗಣ್ಯರ ಸಂತಾಪ

ಪ್ರಖ್ಯಾತ ಗಾಯಕರು, ತಮ್ಮ ಸುಸ್ವರದ ಮೂಲಕ ಕವಿ ಗೀತೆಗಳಿಗೆ ಮೆರುಗು ತಂದುಕೊಟ್ಟಿದ್ದ ಶ್ರೀ ಶಿವಮೊಗ್ಗ ಸುಬ್ಬಣ್ಣ ಅವರ ನಿಧನದ ಸುದ್ದಿ ಕೇಳಿ ಬಹಳ ದುಃಖವಾಗಿದೆ.

ದೇಶ-ವಿದೇಶ

ಒಡಿಶಾದಲ್ಲಿ ಆಘಾತಕಾರಿ ಘಟನೆ ; ಹಾಡಹಗಲೇ ವೃದ್ಧನನ್ನು ಕಂಬಕ್ಕೆ ಕಟ್ಟಿ, ಥಳಿಸಿ ಕೊಂದ ಕುಟುಂಬಸ್ಥರು!

ಕೊರಾಪುಟ್ ಜಿಲ್ಲೆಯ ಬುಡಕಟ್ಟು ಪ್ರದೇಶದಲ್ಲಿ ಹಾಡಹಗಲೇ ವೃದ್ಧನನ್ನು ವಿದ್ಯುತ್ ಕಂಬಕ್ಕೆ ಕಟ್ಟಿ ತಮ್ಮ ಕುಟುಂಬಸ್ಥರೇ ಥಳಿಸಿ ಕೊಂದಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ!