ಮತಾಂತರ ನಿಷೇಧ ಕಾಯ್ದೆ ವಿರೋಧಿಸಲು ಕಾಂಗ್ರೆಸ್ ತೀರ್ಮಾನ

ಬೆಳಗಾವಿ ಡಿ 15 : ರಾಜ್ಯ ಸರ್ಕಾರ ಜಾರಿಗೆ ತರಲು ಹೊರಟಿರುವ ಮತಾಂತರ ನಿಷೇಧ ಕಾಯಿದೆಯನ್ನು ವಿರೋಧಿಸಲು ವಿರೋಧ ಪಕ್ಷ ಕಾಂಗ್ರೆಸ್‌ ನಿರ್ಧರಿಸಿದೆ.  ಇಲ್ಲಿಯ ಸುವರ್ಣ ವಿಧಾನಸೌಧದಲ್ಲಿ ಇಂದು ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಈ ತಿರ್ಮಾನ ಕೈಗೊಳ್ಳಲಾಗಿದೆ ಎಂದು ತಿಳಿದು ಬಂದಿದೆ

ಈ ಬಗ್ಗೆ ಮಾತನಾಡಿದ ಸಿದ್ದರಾಮಯ್ಯ ಅವರು, ಇದು ಭಾವನಾತ್ಮಕ ವಿಷಯ. ಒಂದು ಜಾತಿ ಹಾಗೂ ಧರ್ಮವನ್ನು ಗುರಿಯಾಗಿಟ್ಟುಕೊಂಡು ಸರ್ಕಾರ ಕಾಯಿದೆ ಜಾರಿಗೆ ತರಲು ಮುಂದಾಗಿದೆ. ಇದನ್ನು ತೀವ್ರವಾಗಿ ವಿರೋಧಿಸಬೇಕಾಗಿದೆ. ರಾಜಕೀಯ ಕಾರಣಕ್ಕಾಗಿ ಸರ್ಕಾರ ಮತಾಂತರ ನಿಷೇಧ ಕಾಯಿದೆ ಜಾರಿಗೊಳಿಸಲು ಹೊರಟಿದೆ ಎಂದರು.

ಭಾವನಾತ್ಮಕ ವಿಚಾರಗಳನ್ನು ಮುಂದಿಟ್ಟುಕೊಂಡು ಬಿಜೆಪಿ ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ. ಇದೂ ಸಹ ಆ ಪಕ್ಷದ ರಹಸ್ಯ ಕಾರ್ಯಸೂಚಿಯಾಗಿದೆ. ಈ ಹಿನ್ನೆಲೆಯಲ್ಲಿ ಕಾಯಿದೆಯನ್ನು ವಿರೋಧಿಸಬೇಕಿದೆ ಎಂದು ಸಿದ್ದರಾಮಯ್ಯ ಅವರು ಹೇಳಿದಾಗ ಸಭೆ ಸರ್ವಾನುಮತದಿಂದ ಒಪ್ಪಿಗೆ ಸೂಚಿಸಿತು.

ರಾಜ್ಯದಲ್ಲಿ ಮೂರು ಬಾರಿ ಪ್ರವಾಹ ಪರಿಸ್ಥಿತಿ ಉಂಟಾಗಿತ್ತು. ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಇದರಿಂದ ತೀವ್ರ ಹಾನಿ ಆಯಿತು. ಜೊತೆಗೆ ೨೩ ಜಿಲ್ಲೆಗಳಲ್ಲಿ ರೈತರ ಬೆಳೆ ಹಾನಿಗೊಳಗಾಗಿದೆ. ಲಕ್ಷಾಂತರ ಮನೆಗಳು ಮಳೆಯಿಂದಾಗಿ ಕುಸಿದಿವೆ. ಆದರೆ, ಸರ್ಕಾರ ಪರಿಹಾರ ನೀಡುವಲ್ಲಿ ವಿಳಂಬ ಧೋರಣೆ ಅನುಸರಿಸುತ್ತಿದೆ.

ರಾಜ್ಯ ಸರ್ಕಾರ ನಾಲ್ಕು ಬಾರಿ ಮನವಿ ಸಲ್ಲಿಸಿದ್ದರೂ ಕೇಂದ್ರ ಸರ್ಕಾರ ಈ ವರೆಗೆ ನಯಾಪೈಸೆ ಪರಿಹಾರ ಕೊಟ್ಟಿಲ್ಲ. ಈ ಬಗ್ಗೆಯೂ ಮುಂದಿನ ದಿನಗಳಲ್ಲಿ ಹೋರಾಟ ಕೈಗೆತ್ತಿಕೊಳ್ಳಬೇಕಿದೆ ಎಂದರು.

Exit mobile version