ರಾಜ್ಯದಲ್ಲಿ ಮುಂದುವರಿದ ಕೊರೊನಾ ಸಂಕಷ್ಟ: ಸರ್ವಪಕ್ಷ ಸಭೆ ಕರೆಯಲು ಮುಖ್ಯಮಂತ್ರಿ ಯಡಿಯೂರಪ್ಪ ನಿರ್ಧಾರ

ಬೆಂಗಳೂರು, ಏ. 12: ರಾಜ್ಯದಲ್ಲಿ ಕೊರೊನಾ ಸೋಂಕು ದಿನೇ ದಿನೆ ಹೆಚ್ಚುತ್ತಿದ್ದು, ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ಕೈಗೊಳ್ಳಬೇಕಾಗಿರುವ ಕ್ರಮಗಳ ಕುರಿತು ಚರ್ಚಿಸಲು ಸರ್ವಪಕ್ಷ ಸಭೆ ಕರೆಯಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತೀರ್ಮಾನಿಸಿದ್ದಾರೆ.

ನಗರದಲ್ಲಿ ಸೋಮವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸದ್ಯಕ್ಕೆ ಲಾಕ್’ಡೌನ್ ಮಾಡುವ ಉದ್ದೇಶ ಸರ್ಕಾರದ ಮುಂದೆ ಇಲ್ಲ. ಆದರೆ, ಪರಿಸ್ಥಿತಿ ಕೈ ಮೀರಿದರೆ ಲಾಕ್’ಡೌನ್ ಅನಿವಾರ್ಯ. ಈ ಬಗ್ಗೆ ಚರ್ಚಿಸಲು ಏ.18 ಅಥವಾ 19 ರಂದು ಸರ್ವಪಕ್ಷ ಸಭೆ ಕರೆಯಲು ತೀರ್ಮಾನಿಸಲಾಗಿದೆ ಎಂದರು.

ಸಭೆಗೆ ಮಾಜಿ ಸಿಎಂಗಳಾದ ಎಚ್.ಡಿ. ಕುಮಾರಸ್ವಾಮಿ, ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೇರಿದಂತೆ ವಿವಿಧ ಪಕ್ಷಗಳ ಪ್ರಮುಖರನ್ನು ಆಹ್ವಾನಿಸಲಾಗುವುದು ಎಂದು ಹೇಳಿದರು.

ಸೋಂಕು ಹರಡದಂತೆ ತಡೆಯಲು ಜನರು ಸರ್ಕಾರದೊಂದಿಗೆ ಸಹಕಾರ ನೀಡಬೇಕು. 45 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರು ಕೋವಿಡ್ ಲಸಿಕೆ ಪಡೆಯಬೇಕು ಜತೆಗೆ ಕೋವಿಡ್ ನಿಯಮಾವಳಿಗಳನ್ನು ತಪ್ಪದೆ ಪಾಲಿಸಬೇಕೆಂದು ಮನವಿ ಮಾಡಿದರು.

Exit mobile version