ಹೊಸದಿಲ್ಲಿ, ಮಾ. 01: ದೇಶದೆಲ್ಲೆಡೆ ಕೊರೊನಾ ಲಸಿಕೆ ವಿತರಣೆ ಕಾರ್ಯ ಯಶಸ್ವಿಯಾಗಿ ನಡೆಯುತ್ತಿದ್ದು, ಕೊರೊನಾ ವಾರಿಯರ್ಸ್ ಸೇರಿದಂತೆ ಹಲವರು ಈಗಾಗಲೇ ಲಸಿಕೆ ಪಡೆದುಕೊಂಡಿದ್ದಾರೆ.
ಈ ನಡುವೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಹ ಸೋಮವಾರ ಬೆಳಗ್ಗೆ ಮೊದಲ ಡೋಸ್ ಕೊರೊನಾ ಲಸಿಕೆ ಪಡೆದುಕೊಂಡಿದ್ದಾರೆ. ಇಲ್ಲಿನ ಏಮ್ಸ್ ಆಸ್ಪತ್ರೆಗೆ ಭೇಟಿ ನೀಡಿದ ಮೋದಿ, ಕೋವ್ಯಾಕ್ಸಿನ್ ಲಸಿಕೆಯ ಮೊದಲ ಡೋಸ್ ಲಸಿಕೆ ಪಡೆದರು.
ಏಮ್ಸ್ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿರುವ ಪಾಂಡಿಚೇರಿ ಮೂಲದ ನರ್ಸ್ ನಿವೇದಿತಾ ಅವರು, ಪ್ರಧಾನಿ ಮೋದಿ ಅವರಿಗೆ ಕೋವ್ಯಾಕ್ಸಿನ್ (ಭಾರತ್ ಬಯೋಟೆಕ್) ಲಸಿಕೆ ನೀಡುವ ನಿಟ್ಟಿನಲ್ಲಿ ಅಗತ್ಯ ಸಿದ್ಧತೆಗಳ ನಿರ್ವಹಣೆ ಮಾಡಿದರು.
ಈ ವೇಳೆ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಇಂದು ಕೊರೊನಾ ಮೊದಲ ಡೋಸ್ ಲಸಿಕೆ ಪಡೆದಿದ್ದೇನೆ. ವಿಶ್ವವನ್ನೇ ತಲ್ಲಣಗೊಳಿಸಿದ ಮಹಾಮಾರಿ ಕೊರೊನಾ ವಿರುದ್ಧ ವೈದ್ಯರು ಹಾಗೂ ವಿಜ್ಞಾನಿಗಳು ಕೊರೊನಾ ಸೋಂಕಿನ ವಿರುದ್ಧ ಹೋರಾಡುವ ನಿಟ್ಟಿನಲ್ಲಿ ಲಸಿಕೆ ಕಂಡುಹಿಡಿಯುವಲ್ಲಿ ಯಶಸ್ವು ಕಂಡಿದ್ದಾರೆ. ಹೀಗಾಗಿ ಎಲ್ಲರೂ ಲಸಿಕೆ ಪಡೆಯುವ ಮೂಲಕ ಕೊರೊನಾ ಮುಕ್ತರಾಗೋಣ ಎಂದಿದ್ದಾರೆ.