ಬೆಂಗಳೂರು, ಜೂ. 11: ದಲಿತ ಕವಿ ಎಂದೇ ಪ್ರಖ್ಯಾತಿ ಪಡೆದಿದ್ದ ಡಾ.ಸಿದ್ದಲಿಂಗಯ್ಯ (67) ಕೊರೊನಾ ಸೋಂಕಿನಿಂದಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ಕೊನೆಯುಸಿರೆಳೆದಿದ್ದಾರೆ.
‘ಖ್ಯಾತ ಕವಿ, ಅಧ್ಯಾಪಕ, ಪ್ರಾಧ್ಯಾಪಕ, ಹೋರಾಟಗಾರರಾಗಿದ್ದ ಸಿದ್ಧಲಿಂಗಯ್ಯನವರು ದಲಿತ ಹೋರಾಟ ಮತ್ತು ಸಾಮಾಜಿಕ ಸಮಾನತೆಗಾಗಿ ಕಾವ್ಯ ಸಾಹಿತ್ಯಗಳನ್ನು ರಚಿಸಿದ್ದವರು. ಕಾವ್ಯ, ನಾಟಕ, ಪ್ರಬಂಧ, ವಿಮರ್ಶೆ, ಸಂಶೋಧನೆ, ಆತ್ಮಕಥನ ಮುಂತಾದ ಪ್ರಕಾರಗಳಲ್ಲಿ ಸಾಹಿತ್ಯ ರಚನೆ ಮಾಡಿ, ಎರಡು ಬಾರಿ ವಿಧಾನಪರಿಷತ್ತಿನ ಸದಸ್ಯರಾಗಿದ್ದರು.
ಸಿದ್ಧಲಿಂಗಯ್ಯ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆ ಮಾಗಡಿ ತಾಲ್ಲೂಕಿನ ಮಂಚನಬೆಲೆ ಗ್ರಾಮದಲ್ಲಿ 1954ರಲ್ಲಿ ಜನಿಸಿದರು. ತಂದೆ ದೇವಯ್ಯ, ತಾಯಿ ಶ್ರೀಮತಿ ವೆಂಕಮ್ಮ. ಮಲ್ಲೇಶ್ವರಂನ ಸರ್ಕಾರಿ ಪ್ರೌಢಶಾಲೆ ಇವರ ವಿದ್ಯಾಕೇಂದ್ರವಾಗಿತ್ತು. ಆ ವೇಳೆಗಾಗಲೇ ಕವಿತೆ ಬರೆವ ಅಭ್ಯಾಸ ಇವರಿಗಿತ್ತು. ವಿದ್ಯಾರ್ಥಿ ದೆಸೆಯಲ್ಲಿಯೇ ಇವರು ಉತ್ತಮ ಭಾಷಣಕಾರರಾಗಿದ್ದರು. ಅಂಬೇಡ್ಕರ್, ಪೆರಿಯಾರ್, ವಸುದೇವಭೂಪಾಲ, ಲೋಹಿಯಾ ಮುಂತಾದವರ ವಿಚಾರಧಾರೆಗಳಿಂದ ಆಕರ್ಷಿತರಾಗಿದ್ದರು.