ಬೆಂಗಳೂರು, ಏ. 10: ಕೊರೋನಾ ಕಾರಣದಿಂದ ಪ್ರಸ್ತುತ ನಡೆಯುತ್ತಿರುವ ಪರೀಕ್ಷೆಗಳು ಹಾಗೂ ಶೈಕ್ಷಣಿಕ ಚಟುವಟಿಕೆಗಳು ಸ್ಥಗಿತಗೊಳ್ಳುವುದಿಲ್ಲ. ನಿಗದಿತ ವೇಳಾಪಟ್ಟಿಯಂತೆ ಎಲ್ಲವೂ ಮುಂದುವರಿಯಲಿವೆ ಎಂದು ಡಿಸಿಎಂ ಡಾ. ಸಿ.ಎನ್. ಅಶ್ವತ್ಥನಾರಾಯಣ ಸ್ಪಷ್ಟಪಡಿಸಿದ್ದಾರೆ.
ಪದವಿ, ಸ್ನಾತಕೋತ್ತರ, ಇಂಜಿನಿಯರಿಂಗ್, ಡಿಪ್ಲೊಮಾ ಸೇರಿ ಉನ್ನತ ಶಿಕ್ಷಣ ವ್ಯಾಪ್ತಿಯ ಪರೀಕ್ಷೆಗಳು ಯಥವತ್ತಾಗಿ ನಡೆಯಲಿದೆ. ಇದರಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಸುದ್ದಿಗಾರರಿಗೆ ತಿಳಿಸಿದ್ದಾರೆ.
ಬೇಸಿಗೆ ರಜೆ ಇಲ್ಲ: 2021-22ನೇ ಸಾಲಿನ ಶೈಕ್ಷಣಿಕ ವರ್ಷದ ಯಾವ ಚಟುವಟಿಕೆಗಳಲ್ಲೂ ವ್ಯತ್ಯಯ ಆಗುವುದಿಲ್ಲ. ಪರೀಕ್ಷೆಗಳು ಮುಗಿದ ಬಳಿಕ ಬೇಸಿಗೆ ರಜೆ ಇರುವುದಿಲ್ಲ. ತಕ್ಷಣ ತರಗತಿಗಳು ಶುರುವಾಗಲಿವೆ. ಇದರಲ್ಲಿ ಆಫ್‌ಲೈನ್ ಮತ್ತು ಆನ್‌ಲೈನ್ ತರಗತಿಗಲು ಇರಲಿವೆ. ಮೊದಲು ಆನ್‌ಲೈನ್ ತರಗತಿ ಆರಂಭವಾಗಲಿದ್ದು, ವಿದ್ಯಾರ್ಥಿಗಳು ಎರಡರ ಪೈಕಿ ಒಂದಕ್ಕೆ ಕಡ್ಡಾಯವಾಗಿ ಹಾಜರಾಗಬೇಕು ಎಂದು ಅಶ್ವತ್ಥನಾರಾಯಣ ಹೇಳಿದರು.
ಕೋವಿಡ್ ಮಾರ್ಗಸೂಚಿ ಅನ್ವಯ ಕಾಲೇಜಿನಲ್ಲಿ ಸುರಕ್ಷತಾ ಕ್ರಮ ಕೈಗೊಳ್ಳಲಾಗುವುದು. ಕೊಠಡಿಗಳಲ್ಲಿ ಸ್ಯಾನಿಟೈಷನ್ ಬಳಕೆ, ವೈಯಕ್ತಿಕ ಸ್ವಚ್ಛತೆ, ಕೋವಿಡ್ ಪರೀಕ್ಷೆ, ಸಾಮಾಜಿಕ ಅಂತರ ಕಾಯ್ದಕೊಳ್ಳುವುದು ಹಾಗೂ ಮಾಸ್ಕ್ ಧರಿಸುವುದು ಕಡ್ಡಾಯ ಎಂದರು.
1.60 ಲಕ್ಷ ವಿದ್ಯಾರ್ಥಿಗಳಿಗೆ ಟ್ಯಾಬ್: ಕರೊನಾ ಹಿನ್ನೆಲೆಯಲ್ಲಿ ಈಗಾಗಲೇ ಸಮಗ್ರ ಕಲಿಕಾ ನಿರ್ವಹಣಾ ವ್ಯವಸ್ಥೆಯನ್ನು (ಎಲ್‌ಎಂಎಸ್) ಜಾರಿಗೆ ತರಲಾಗಿದೆ. ವಿದ್ಯಾರ್ಥಿಗಳು ಎಲ್ಲೇ ಇದ್ದರೂ ಕಲಿಯಬಹುದು. ಅದಕ್ಕೆ ನೆರವಾಗುವಂತೆ ಈ ವರ್ಷ ಸರ್ಕಾರಿ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ 1.60 ಲಕ್ಷ ವಿದ್ಯಾರ್ಥಿಗಳಿಗೆ ಟ್ಯಾಬ್‌ಲೆಟ್ ಪಿಸಿಗಳನ್ನು ನೀಡಲಾಗಿದೆ. ಕಳೆದ ವರ್ಷ 1.10 ಲಕ್ಷ ವಿದ್ಯಾರ್ಥಿಗಳಿಗೆ ವಿತರಿಸಲಾಗಿತ್ತು. ತರಗತಿ ಕೊಠಡಿಗಳನ್ನು ಸ್ಟುಡಿಯೋಗಳಾಗಿ ಪರಿವರ್ತಿಸಲಾಗಿದೆ. ಎಲ್ಲವೂ ಸ್ಮಾರ್ಟ್ ಕ್ಲಾಸ್ ಕೊಠಡಿಗಳಾಗಿವೆ. ಹಾಗಾಗಿ, ಮನೆಯಿಂದಲೇ ವ್ಯಾಸಂಗ ಮಾಡಬಹುದು ಎಂದು ಡಿಸಿಎಂ ಹೇಳಿದರು.