ಇಂದಿನಿಂದ 18 ವರ್ಷ ಮೇಲ್ಪಟ್ಟವರಿಗೆ ಉಚಿತ ಕೋವಿಡ್-19 ಲಸಿಕೆ ವಿತರಣೆ

ಹೊಸದೆಹಲಿ,ಜೂ.21: 18 ವರ್ಷ ದಾಟಿದ ಎಲ್ಲರಿಗೂ ಸೋಮವಾರದಿಂದ ಉಚಿತ ಲಸಿಕೆ ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಆಯಾ ರಾಜ್ಯಗಳ ಬೇಡಿಕೆಗೆ ಅನುಸಾರವಾಗಿ ಕೇಂದ್ರ ಸರ್ಕಾರ ಲಸಿಕೆ ಪೂರೈಕೆ ಮಾಡಿದೆ.

ಇತ್ತೀಚೆಗಷ್ಟೇ ಪ್ರಧಾನಿ ನರೇಂದ್ರ ಮೋದಿ ಅವರು ಇನ್ನು ಮುಂದೆ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಲಸಿಕೆಯನ್ನು ಪೂರೈಕೆ ಮಾಡಲಾಗುವುದು ಎಂದು ತಿಳಿಸಿದ್ದರು. ಅಲ್ಲದೆ ಡಿಸೆಂಬರ್ ಅಂತ್ಯದ ವೇಳೆಗೆ ದೇಶದ ಎಲ್ಲ ಅರ್ಹ ಜನರಿಗೆ ಲಸಿಕೆ ಹಾಕುವ ಗುರಿಯನ್ನು ಹೊಂದಲಾಗಿದೆ. ಜೂನ್ ತಿಂಗಳಲ್ಲಿ ಲಸಿಕೆ ಹಾಕಲು 12 ಕೋಟಿ ಡೋಸ್ ಲಸಿಕೆ ಸಂಗ್ರಹ ಮಾಡಲಾಗಿದೆ. ಜುಲೈ ತಿಂಗಳಲ್ಲಿ ಈ ಪ್ರಮಾಣ ಮತ್ತಷ್ಟು ಹೆಚ್ಚು ಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ.

ಜೂನ್ ತಿಂಗಳಲ್ಲಿ 12 ಕೋಟಿ ಡೋಸ್ ಲಸಿಕೆ ನೀಡಿಕೆಗೆ ಸಿದ್ಧವಾಗಿದೆ. ಅದರಲ್ಲಿ ಶೇಕಡ 75ರಷ್ಟು ಪ್ರಮಾಣದ ಲಸಿಕೆಯನ್ನು ಸರ್ಕಾರಿ ಆಸ್ಪತ್ರೆಗಳಿಗೆ ಹಾಗೂ ಶೇಕಡ ೨೫ರಷ್ಟು ಲಸಿಕೆಯನ್ನು ಖಾಸಗಿ ಆಸ್ಪತ್ರೆಗಳಿಗೆ ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಲಸಿಕೆಯನ್ನು ಉಚಿತವಾಗಿ ಹಾಕಲಾಗುತ್ತದೆ ಅದೇ ರೀತಿ ಖಾಸಗಿ ಆಸ್ಪತ್ರೆಗಳಲ್ಲಿ ಸರ್ಕಾರ ನಿಗದಿ ಮಾಡಿದ ದರದಲ್ಲಿ ಲಸಿಕೆ ಹಾಕಲಾಗುವುದು.

ಈ ನಡುವೆ ಜುಲೈ ತಿಂಗಳಲ್ಲಿ 13.5 ಕೋಟಿ ಡೋಸ್ ಲಸಿಕೆ ಜನರ ಬಳಕೆಗೆ ಸಿದ್ಧವಾಗಲಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.

ಸೋಮವಾರ ನಡೆಯಲಿರುವ ಲಸಿಕೆ ಮೇಳಕ್ಕೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಚಾಲನೆ ನೀಡಲಿದ್ದಾರೆ. ಬೆಳಗ್ಗೆ 11 ಗಂಟೆಗೆ ಬೌರಿಂಗ್ ಆಸ್ಪತ್ರೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಸಾಂಕೇತಿಕವಾಗಿ ಲಸಿಕೆ ಉತ್ಸವಕ್ಕೆ ಚಾಲನೆ ನೀಡಲಿದ್ದಾರೆ. ಸೋಮವಾರ ಒಂದೇ ದಿನ 7 ಲಕ್ಷ ಜನರಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿದೆ. ಜೂ.21ರಿಂದ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಲಸಿಕೆ ಕೇಂದ್ರಗಳು ಸ್ಥಳದಲ್ಲೇ ನೋಂದಣಿ ಸೌಲಭ್ಯವನ್ನು ಒದಗಿಸುವುದರಿಂದ Cowin.gov.in ಪೂರ್ವ ನೋಂದಣಿ ಕಡ್ಡಾಯವಾಗುವುದಿಲ್ಲ.

Exit mobile version