ಬೆಂಗಳೂರು: ಕೊರೊನಾ ಸೋಂಕಿನ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆ ಕಂಡು ಬರುತ್ತಿದ್ದು, ಇದೀಗ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೂ ಕೊರೋನಾ ಸೋಂಕು ದೃಢಪಟ್ಟಿದೆ.
ಡಿ.ಕೆ. ಶಿವಕುಮಾರ್ ಅವರು ಎರಡು ದಿನಗಳಿಂದ ಜ್ವರ ಮತ್ತು ಬೆನ್ನು ನೋವಿನಿಂದ ಬಳಲುತ್ತಿದ್ದರು, ಈ ಹಿನ್ನೆಲೆಯಲ್ಲಿ ವೈದ್ಯಕೀಯ ಪರೀಕ್ಷೆ ಮಾಡಿಸಿಕೊಂಡಿದ್ದಾರೆ ಎನ್ನಲಾಗಿದೆ. ವರದಿಯಲ್ಲಿ ಡಿಕೆಶಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಈ ಬಗ್ಗೆ ಖುದ್ದು ಡಿ.ಕೆ. ಶಿವಕುಮಾರ್ ಖಚಿತಪಡಿಸಿದ್ದಾರೆ.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ವಿಪಕ್ಷ ನಾಯಕ ಸಿದ್ದರಾಮಯ್ಯ, ಸಂಪುಟದ ಅನೇಕ ಸಚಿವರು ಸೇರಿದಂತೆ ರಾಜ್ಯದ ಬಹುತೇಕ ಜನಪ್ರತಿನಿಧಿಗಳು ಕೊರೋನಾ ಸೋಂಕಿಗೆ ತುತ್ತಾಗಿದ್ದರು. ಇದೀಗ ಡಿಕೆ ಶಿವಕುಮಾರ್ ಅವರಿಗೆ ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ, ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ದೂರವಾಣಿ ಕರೆ ಮಾಡಿ ಶೀಘ್ರ ಗುಣಮುಖರಾಗುವಂತೆ ಹಾರೈಸಿದ್ದಾರೆ.
ಅಲ್ಲದೇ ವಿಷಯ ತಿಳಿಯುತ್ತಿದ್ದಂತೆ ಟ್ವೀಟ್ ಮಾಡಿರುವ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ಡಿ.ಕೆ. ಶಿವಕುಮಾರ್ ಆದಷ್ಟು ಬೇಗ ಗುಣಮುಖರಾಗಲಿ ಎಂದು ಹಾರೈಸುತ್ತೇನೆ ಎಂದಿದ್ದಾರೆ.