ಎಲ್ ನಿನೊ ಎಫೆಕ್ಟ್‌ಗೆ ಸರ್ಕಾರ (dkshivakumar instructions about power shortage) ಅಲರ್ಟ್: ವಿದ್ಯುತ್ ಕೊರತೆ ತಪ್ಪಿಸಲು ಸಿಎಂ ಸೂಚನೆ
ಜಲವಿದ್ಯುತ್ ಉತ್ಪಾದನೆ ಕುಸಿತ ಸಾಧ್ಯತೆ ಹಿನ್ನೆಲೆ ತುರ್ತು ಕಾರ್ಯಯೋಜನೆ, ಕಲ್ಲಿದ್ದಲು ಸಂಗ್ರಹ ಹಾಗೂ ನವೀಕರಿಸಬಹುದಾದ ಇಂಧನಕ್ಕೆ ಒತ್ತು
BESS, ಪಂಪ್ಡ್ ಸ್ಟೋರೇಜ್ ಯೋಜನೆ, ಸ್ಮಾರ್ಟ್ ಮೀಟರ್ ಹಾಗೂ ವಿದ್ಯುತ್ ಜಾಲ ಬಲಪಡಿಸಲು ಆದೇಶ
Bengaluru: ಎಲ್ ನಿನೊ ಪರಿಣಾಮದಿಂದ ರಾಜ್ಯದಲ್ಲಿ ಮಳೆ ಪ್ರಮಾಣ ಕುಸಿದು ಜಲಾಶಯಗಳ (dkshivakumar instructions about power shortage) ನೀರಿನ ಮಟ್ಟ ಇಳಿಯುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಜಲವಿದ್ಯುತ್ ಉತ್ಪಾದನೆ ಮೇಲೆ ಪರಿಣಾಮ ಬೀಳಬಹುದೆಂಬ ಆತಂಕ ವ್ಯಕ್ತವಾಗಿದೆ.
ಈ ಹಿನ್ನೆಲೆ ರಾಜ್ಯದ ಇಂಧನ ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಈಗಿನಿಂದಲೇ ಸಮಗ್ರ ತುರ್ತು ಕಾರ್ಯಯೋಜನೆ ರೂಪಿಸುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಇಂಧನ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ವಿದ್ಯುತ್ ಉತ್ಪಾದನೆ, ಸಂಗ್ರಹಣೆ ಹಾಗೂ ಪರ್ಯಾಯ ಇಂಧನ ಮೂಲಗಳ ಸಮರ್ಪಕ ಬಳಕೆಗೆ ಆದ್ಯತೆ ನೀಡಬೇಕು ಎಂದು ಹೇಳಿದರು.
ಯಾವುದೇ ಪರಿಸ್ಥಿತಿಯಲ್ಲೂ ಸಾರ್ವಜನಿಕರಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗದಂತೆ (dkshivakumar instructions about power shortage) ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಸಭೆಯಲ್ಲಿ ಬರಗಾಲದ ಪರಿಸ್ಥಿತಿಯನ್ನು ಎದುರಿಸಲು ಇಲಾಖೆಯ ಸಿದ್ಧತೆಗಳ ಕುರಿತು ಮುಖ್ಯಮಂತ್ರಿ ಮಾಹಿತಿ ಪಡೆದುಕೊಂಡರು. ಸರ್ಕಾರಕ್ಕೆ ಮೀಸಲಾದ ಕಲ್ಲಿದ್ದಲು ಗಣಿಗಳ ಕಾರ್ಯಾಚರಣೆಯನ್ನು ಶೀಘ್ರ ಆರಂಭಿಸಿ, ಅಗತ್ಯ ಪ್ರಮಾಣದ ಕಲ್ಲಿದ್ದಲು ಸಂಗ್ರಹವನ್ನು ನಿರಂತರವಾಗಿ ಕಾಯ್ದುಕೊಳ್ಳುವಂತೆ ಸೂಚಿಸಿದರು.
ಅಧಿಕಾರಿಗಳು ಹಿಂದಿನ ವರ್ಷಕ್ಕೆ ಹೋಲಿಸಿದರೆ ರಾಜ್ಯದಲ್ಲಿ ವಿದ್ಯುತ್ ಸಂಗ್ರಹಣೆಯ ಸ್ಥಿತಿ ಉತ್ತಮವಾಗಿದ್ದು, ಕಳೆದ ಮೂರು ವರ್ಷಗಳಲ್ಲಿ ವಿದ್ಯುತ್ ಕಡಿತವಿಲ್ಲದೆ ವ್ಯವಸ್ಥೆಯನ್ನು ಯಶಸ್ವಿಯಾಗಿ ನಿರ್ವಹಿಸಲಾಗಿದೆ ಎಂದು ವಿವರಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ಮುಂದಿನ ದಿನಗಳಲ್ಲಿ ನವೀಕರಿಸಬಹುದಾದ ಇಂಧನದ ಬಳಕೆ ಹೆಚ್ಚಾಗಲಿರುವುದರಿಂದ ಬ್ಯಾಟರಿ ಎನರ್ಜಿ ಸ್ಟೋರೇಜ್ ಸಿಸ್ಟಮ್‌ಗಳು (BESS) ಹಾಗೂ ಪಂಪ್ಡ್ ಸ್ಟೋರೇಜ್ ಯೋಜನೆಗಳನ್ನು ತ್ವರಿತಗತಿಯಲ್ಲಿ ಜಾರಿಗೊಳಿಸುವ ಅಗತ್ಯವಿದೆ ಎಂದು ತಿಳಿಸಿದರು.
ರಾಜ್ಯವು ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ದೇಶದ ಪ್ರಮುಖ ಕೇಂದ್ರವಾಗಿರುವಂತೆ, ಕೃತಕ ಬುದ್ಧಿಮತ್ತೆ ಹಾಗೂ ಡಿಜಿಟಲ್ ಆರ್ಥಿಕತೆಯಲ್ಲಿಯೂ ಮುಂಚೂಣಿಯಲ್ಲಿರಬೇಕು ಎಂಬುದು ಸರ್ಕಾರದ ಗುರಿಯಾಗಿದೆ ಎಂದು ಮುಖ್ಯಮಂತ್ರಿ ಹೇಳಿದರು.
ಡೇಟಾ ಸೆಂಟರ್‌ಗಳು, ಎಐ ಆಧಾರಿತ ಮೂಲಸೌಕರ್ಯ ಮತ್ತು ಡಿಜಿಟಲ್ ಸೇವೆಗಳ ವಿಸ್ತರಣೆಯಿಂದ ಮುಂದಿನ ವರ್ಷಗಳಲ್ಲಿ ವಿದ್ಯುತ್ ಬೇಡಿಕೆ ಗಣನೀಯವಾಗಿ ಹೆಚ್ಚುವ ಸಾಧ್ಯತೆ ಇರುವುದರಿಂದ ಈಗಿನಿಂದಲೇ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕು ಎಂದು ಅವರು ಸೂಚಿಸಿದರು.
ಇದೇ ವೇಳೆ ಗೃಹಜ್ಯೋತಿ ಯೋಜನೆಯಿಂದ ವಿದ್ಯುತ್ ಇಲಾಖೆಗೆ ಯಾವುದೇ ಹೆಚ್ಚುವರಿ ಹೊರೆ ಉಂಟಾಗಿಲ್ಲ ಎಂದು ಸ್ಪಷ್ಟಪಡಿಸಲಾಯಿತು.
ಆದರೆ ವಿವಿಧ ಸರ್ಕಾರಿ ಇಲಾಖೆಗಳು ಎಸ್ಕಾಂಗಳಿಗೆ ಪಾವತಿಸಬೇಕಿರುವ ₹12,631 ಕೋಟಿ ಬಾಕಿಯನ್ನು ಶೀಘ್ರವಾಗಿ ಬಿಡುಗಡೆ ಮಾಡುವಂತೆ ಅಥವಾ ಹಣಕಾಸು ಭದ್ರತಾ ವ್ಯವಸ್ಥೆಯ ಮೂಲಕ ಸಮಸ್ಯೆ ಪರಿಹರಿಸುವಂತೆ ಇಂಧನ ಸಚಿವ ಕೆ.ಜೆ. ಜಾರ್ಜ್ ಮನವಿ ಮಾಡಿದರು.
ರೈತರಿಗೆ ನಿರಂತರ ವಿದ್ಯುತ್ ಪೂರೈಕೆ ಹಾಗೂ ಕೃಷಿ ಕ್ಷೇತ್ರದ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ರಾಜ್ಯ ಸರ್ಕಾರ ವರ್ಷಕ್ಕೆ ಸುಮಾರು ₹22,000 ಕೋಟಿ ಕೃಷಿ ವಿದ್ಯುತ್ ಸಹಾಯಧನ ನೀಡುತ್ತಿದೆ ಎಂದು ಮುಖ್ಯಮಂತ್ರಿ ಹೇಳಿದರು.
ಈ ಅನುದಾನದ ಪರಿಣಾಮಕಾರಿ ಬಳಕೆಗೆ ಫೀಡರ್ ಸೌರೀಕರಣ, ಇಂಧನ-ದಕ್ಷ ಪಂಪ್‌ಸೆಟ್‌ಗಳ ಅಳವಡಿಕೆ ಹಾಗೂ ಡಿಮ್ಯಾಂಡ್ ಸೈಡ್ ಮ್ಯಾನೇಜ್‌ಮೆಂಟ್ ಕಾರ್ಯಕ್ರಮಗಳನ್ನು ವೇಗಗೊಳಿಸುವಂತೆ ಸೂಚಿಸಿದರು.
ಜೊತೆಗೆ 2035ರ ವೇಳೆಗೆ ರಾಜ್ಯದ ಗರಿಷ್ಠ ವಿದ್ಯುತ್ ಬೇಡಿಕೆ 38 ಗಿಗಾವ್ಯಾಟ್ ತಲುಪುವ ಸಾಧ್ಯತೆ ಇರುವುದರಿಂದ ಅದಕ್ಕೆ ಅನುಗುಣವಾಗಿ ವಿದ್ಯುತ್ ಉತ್ಪಾದನಾ ಸಾಮರ್ಥ್ಯ ಹೆಚ್ಚಿಸುವ ಯೋಜನೆ ಮತ್ತು ಹಣಕಾಸು ಕಾರ್ಯತಂತ್ರವನ್ನು ಈಗಿನಿಂದಲೇ ಸಿದ್ಧಪಡಿಸಬೇಕು ಎಂದು ಸಲಹೆ ನೀಡಿದರು.
ಇದರೊಂದಿಗೆ ವಿದ್ಯುತ್ ವಿತರಣಾ ವ್ಯವಸ್ಥೆಯ ಆಧುನೀಕರಣಕ್ಕೂ ಮುಖ್ಯಮಂತ್ರಿ ವಿಶೇಷ ಒತ್ತು ನೀಡಿದರು. ಕೇಂದ್ರ ಸರ್ಕಾರದ ಪರಿಷ್ಕೃತ ವಿತರಣಾ ವಲಯ ಯೋಜನೆ (RDSS)ಯನ್ನು ವೇಗವಾಗಿ ಅನುಷ್ಠಾನಗೊಳಿಸಿ ಸ್ಮಾರ್ಟ್ ಮೀಟರ್‌ಗಳನ್ನು ಪಾರದರ್ಶಕ ಹಾಗೂ ನಿಗದಿತ ಅವಧಿಯೊಳಗೆ ಅಳವಡಿಸುವಂತೆ ಸೂಚಿಸಿದರು.
ನವೀಕರಿಸಬಹುದಾದ ಇಂಧನ ಉತ್ಪಾದನೆ ವೇಗವಾಗಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ವಿದ್ಯುತ್ ಜಾಲ ಮೂಲಸೌಕರ್ಯವನ್ನು ಮತ್ತಷ್ಟು ಬಲಪಡಿಸುವ ಅಗತ್ಯವಿದೆ ಎಂದು ಹೇಳಿದರು.
ವಿದ್ಯುತ್ ಪ್ರಸರಣ ಯೋಜನೆಗಳಿಗೆ ಸಂಬಂಧಿಸಿದ ತಾಂತ್ರಿಕ ಅಡೆತಡೆಗಳು, ಭೂಸ್ವಾಧೀನ, ಹಕ್ಕುಮಾರ್ಗ ಹಾಗೂ ಕಾನೂನುಬದ್ಧ ಅನುಮತಿಗಳ ಸಮಸ್ಯೆಗಳನ್ನು ಶೀಘ್ರವಾಗಿ ಪರಿಹರಿಸಿ ಯೋಜನೆಗಳ ಅನುಷ್ಠಾನವನ್ನು ವೇಗಗೊಳಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಹವಾಮಾನ ಬದಲಾವಣೆ ಹಾಗೂ ಭವಿಷ್ಯದ ವಿದ್ಯುತ್ ಬೇಡಿಕೆಯನ್ನು ಗಮನದಲ್ಲಿಟ್ಟುಕೊಂಡು ರಾಜ್ಯದ ಇಂಧನ ಕ್ಷೇತ್ರವನ್ನು ಮತ್ತಷ್ಟು ಬಲಿಷ್ಠಗೊಳಿಸುವ ಉದ್ದೇಶದಿಂದ ಸರ್ಕಾರ ಸಮಗ್ರ ಕಾರ್ಯತಂತ್ರ ರೂಪಿಸಲು ಮುಂದಾಗಿದೆ.