ಮುಂದಿನ ಮುಖ್ಯಮಂತ್ರಿ ಕುರಿತು ಬಹಿರಂಗ ಹೇಳಿಕೆ ನೀಡಬೇಡಿ: ಶಾಸಕರಲ್ಲಿ ಸಿದ್ದು ಮನವಿ

ಬೆಂಗಳೂರು,ಜೂ.24: ಮುಂದಿನ ಮುಖ್ಯಮಂತ್ರಿ ಯಾರು ಎಂಬ ವಿಷಯದ ಕುರಿತು ಎದ್ದಿರುವ ಗೊಂದಲ ಕಾಂಗ್ರೆಸ್ ಪಕ್ಷದಲ್ಲಿ ಹಲವು ಭಿನ್ನಮತ ಸೃಷ್ಟಿಸಿದೆ.

ಮುಖ್ಯಮಂತ್ರಿ‌ ವಿಷಯಕ್ಕೆ ಸಂಬಂಧಿಸಿದಂತೆ ಪ್ರಮುಖ ನಾಯಕರ ಬೆಂಬಲಿಗರು ಹಾಗೂ ಪಕ್ಷದ ಹಲವು ಮುಖಂಡರು ನೀಡುತ್ತಿರುವ ಹೇಳಿಕೆಗಳು ಪಕ್ಷದಲ್ಲಿ ಆಂತರಿಕ ಭಿನ್ನಮತಕ್ಕೆ ಕಾರಣವಾಗಿತ್ತು. ಈ ಹಿನ್ನೆಲೆಯಲ್ಲಿ ಎಚ್ಚೆತ್ತಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ,  ಇನ್ಮುಂದೆ ಬಹಿರಂಗ ಹೇಳಿಕೆ ನೀಡಬಾರದು ಎಂದು ಕಾಂಗ್ರೆಸ್ ಶಾಸಕರಲ್ಲಿ ಮನವಿ ಮಾಡಿದ್ದಾರೆ.

ಮುಂದಿನ ಸಿಎಂ ಸಿದ್ದರಾಮಯ್ಯ ಎಂದು ಶಾಸಕರು ಹೇಳಿಕೆ ನೀಡುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರೂ ಆಗಿರುವ ಸಿದ್ದರಾಮಯ್ಯ ಅವರು ಶಾಸಕರಲ್ಲಿ ಈ ಮನವಿ ಮಾಡಿದ್ದಾರೆ ಎನ್ನಲಾಗಿದೆ.

ಇನ್ನು ವಿಧಾನಸಭೆ ಚುನಾವಣೆಗೆ ಇನ್ನೂ ಎರಡು ವರ್ಷ ಬಾಕಿ ಇದ್ದು, ಮುಂದಿನ ಮುಖ್ಯಮಂತ್ರಿ ಎಂದು ಈಗಲೇ ಹೇಳಿಕೆ ನೀಡಬಾರದು. ಮುಖ್ಯಮಂತ್ರಿ ಯಾರಾಗಬೇಕು ಎಂಬುದನ್ನು ಚುನಾವಣೆ ಬಳಿಕ ಶಾಸಕರ ಅಭಿಪ್ರಾಯ ಪಡೆದು ಹೈಕಮಾಂಡ್ ನಿರ್ಧರಿಸುತ್ತದೆ. ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದು ಹೇಳಿದ್ದಾರೆ.

Exit mobile version