- ಸಿದ್ದರಾಮಯ್ಯ ಬಜೆಟ್ ಮೇಲೆ (expectations on Karnataka Budget 2026) ರಾಜ್ಯದ ಕಣ್ಣು
- ಶಿಕ್ಷಣ, ಕೃಷಿ, ಕೈಗಾರಿಕೆ, ಆರೋಗ್ಯ ಸೇರಿದಂತೆ ಪ್ರಮುಖ ಕ್ಷೇತ್ರಗಳಿಗೆ ಬಂಪರ್ ಘೋಷಣೆಗಳ ನಿರೀಕ್ಷೆ
- ಕೃಷಿ, ಸಾರಿಗೆ, ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಗಳಿಗೆ ಹೊಸ ಯೋಜನೆಗಳ ಸಾಧ್ಯತೆ
Bengaluru: ಇನ್ನೇನು 2026-27ನೇ ಸಾಲಿನ ಕರ್ನಾಟಕ ರಾಜ್ಯ ಬಜೆಟ್ ಮಂಡನೆಗೆ ಕ್ಷಣಗಣನೆ (expectations on Karnataka Budget 2026) ಆರಂಭವಾಗಿದೆ.
ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಮಂಡಿಸಲಿರುವ ಈ ಬಜೆಟ್ ಮೇಲೆ ರಾಜ್ಯದ ಜನರು ದೊಡ್ಡ ಮಟ್ಟದ ನಿರೀಕ್ಷೆ ಇಟ್ಟುಕೊಂಡಿದ್ದಾರೆ.
ಕಳೆದ ಕೆಲವು ವರ್ಷಗಳಿಂದ ಸರ್ಕಾರದ ಗ್ಯಾರಂಟಿ ಯೋಜನೆಗಳು ಜನಸಾಮಾನ್ಯರ ಗಮನ ಸೆಳೆದಿದ್ದರೂ, ಈ ಬಾರಿ ಶಿಕ್ಷಣ, ಕೃಷಿ, ಕೈಗಾರಿಕೆ, ಸಾರಿಗೆ ಮತ್ತು ಆರೋಗ್ಯ ಕ್ಷೇತ್ರಗಳಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡುವ ಸಾಧ್ಯತೆ ಇದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.

ಸರ್ಕಾರದ ಈ ಆಯವ್ಯಯವು ಕೇವಲ ಕಲ್ಯಾಣ ಯೋಜನೆಗಳಿಗೆ ಮಾತ್ರ ಸೀಮಿತವಾಗದೆ, ರಾಜ್ಯದ ಒಟ್ಟಾರೆ ಅಭಿವೃದ್ಧಿಗೆ ಉತ್ತೇಜನ ನೀಡಬೇಕು ಎಂಬುದು ವಿವಿಧ ವಲಯಗಳ ಅಭಿಪ್ರಾಯವಾಗಿದೆ. ಆದ್ದರಿಂದ, ಶಿಕ್ಷಕರು, ರೈತರು, ಉದ್ಯಮಿಗಳು, ಸಾರಿಗೆ ನೌಕರರು ಹಾಗೂ ಸಾಮಾನ್ಯ ನಾಗರಿಕರು ತಮ್ಮ ತಮ್ಮ ಕ್ಷೇತ್ರಗಳಿಗೆ ಸಂಬಂಧಿಸಿದ ಅನೇಕ ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟಿದ್ದಾರೆ.
ಶಿಕ್ಷಣ ಕ್ಷೇತ್ರದಲ್ಲಿ ಹಲವು ಮಹತ್ವದ ನಿರೀಕ್ಷೆಗಳು ವ್ಯಕ್ತವಾಗಿವೆ. ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ (expectations on Karnataka Budget 2026) ಸುಮಾರು 60 ಸಾವಿರ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡುವ ಕುರಿತು ಬಜೆಟ್‌ನಲ್ಲಿ ಘೋಷಣೆ ಬರಬೇಕು ಎಂಬುದು ಶಿಕ್ಷಣ ಕ್ಷೇತ್ರದ ಪ್ರಮುಖ ಬೇಡಿಕೆಯಾಗಿದೆ.
ಇದರಿಂದ ಶಿಕ್ಷಕರ ಕೊರತೆ ಕಡಿಮೆಯಾಗುವುದರ ಜೊತೆಗೆ ಶಿಕ್ಷಣದ ಗುಣಮಟ್ಟವೂ ಹೆಚ್ಚುತ್ತದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಇದೇ ವೇಳೆ, ಬಡ ಮಕ್ಕಳಿಗೆ ಖಾಸಗಿ ಶಾಲೆಗಳಲ್ಲಿ
ಶಿಕ್ಷಣ ಪಡೆಯಲು ಸಹಾಯ ಮಾಡುವ Right to Education Act (ಆರ್‌ಟಿಇ) ಕಾಯ್ದೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಜಾರಿಗೆ ತರಬೇಕು ಎಂಬ ಬೇಡಿಕೆಯೂ ಕೇಳಿಬರುತ್ತಿದೆ.
ಸರ್ಕಾರಿ ನೌಕರರು ಹಳೆಯ ಪಿಂಚಣಿ ಯೋಜನೆಯನ್ನು ಪುನಃ ಜಾರಿಗೆ ತರಬೇಕು ಎಂಬ ಒತ್ತಾಯವನ್ನೂ ಮುಂದಿಟ್ಟಿದ್ದಾರೆ.
ಅತಿಥಿ ಶಿಕ್ಷಕರು, ಉಪನ್ಯಾಸಕರು ಮತ್ತು ಬಿಸಿಯೂಟ ಸಿಬ್ಬಂದಿ ಕಡಿಮೆ ಗೌರವಧನದಲ್ಲಿ ಕೆಲಸ ಮಾಡುತ್ತಿರುವುದರಿಂದ ಅವರ ವೇತನ ಹೆಚ್ಚಳದ ನಿರೀಕ್ಷೆಯೂ ಇದೆ.
ಈ ಎಲ್ಲ ಬೇಡಿಕೆಗಳಿಗೆ ಸರ್ಕಾರ ಯಾವ ರೀತಿಯಲ್ಲಿ ಸ್ಪಂದಿಸುತ್ತದೆ ಎಂಬುದನ್ನು ನೋಡಬೇಕಿದೆ. ಕೃಷಿ ಮತ್ತು ರೈತರ ಕಲ್ಯಾಣ ಕ್ಷೇತ್ರದಲ್ಲಿಯೂ ಹಲವು ಪ್ರಮುಖ ನಿರೀಕ್ಷೆಗಳು ವ್ಯಕ್ತವಾಗಿವೆ.
ಯುವಜನರನ್ನು ಕೃಷಿಯತ್ತ ಸೆಳೆಯಲು ಸರ್ಕಾರ ವಿಶೇಷ ಪ್ರೋತ್ಸಾಹ ಯೋಜನೆಗಳನ್ನು ಘೋಷಿಸಬೇಕು ಎಂಬುದು ರೈತರ ಬೇಡಿಕೆಯಾಗಿದೆ.
ಸಾವಯವ ಕೃಷಿ, ಸಮಗ್ರ ಕೃಷಿ ಪದ್ಧತಿಗೆ ಸಹಾಯಧನ ನೀಡುವ ಜೊತೆಗೆ ಶೂನ್ಯ ಬಡ್ಡಿದರದ ಸಾಲವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವ ನಿರೀಕ್ಷೆಯಿದೆ.
ರೈತರು ಬೆಳೆದ ಉತ್ಪನ್ನಗಳನ್ನು ಮಾರುಕಟ್ಟೆಗೆ ಸಾಗಿಸುವಾಗ ಟೋಲ್ (Toll) ಶುಲ್ಕದಿಂದ ವಿನಾಯಿತಿ ನೀಡುವಂತೆ ಆಗ್ರಹಿಸಲಾಗಿದೆ.
ಜೊತೆಗೆ ಕಬ್ಬು ಕಟಾವು ಹಾಗೂ ಸಾಗಣೆ ವೆಚ್ಚವನ್ನು ಕಾರ್ಖಾನೆಗಳು ಭರಿಸುವ ವ್ಯವಸ್ಥೆ ತರಬೇಕು ಎಂಬ ಬೇಡಿಕೆಯೂ ಕೇಳಿಬರುತ್ತಿದೆ.
ರೈತರಿಗೆ ಬೆಳೆ ವಿಮೆ, ಬೆಂಬಲ ಬೆಲೆ ಹಾಗೂ ಹನಿ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಉತ್ತೇಜನ ನೀಡಬೇಕು ಎಂಬುದು ರೈತ ಸಮುದಾಯದ ಪ್ರಮುಖ ನಿರೀಕ್ಷೆಯಾಗಿದೆ.
ಜೊತೆಗೆ ನಕಲಿ ಗೊಬ್ಬರ ಹಾಗೂ ಕೀಟನಾಶಕಗಳ ಮಾರಾಟಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂಬ ಒತ್ತಾಯವೂ ಕೇಳಿಬರುತ್ತಿದೆ.
ಇದೇ ವೇಳೆ ಕೈಗಾರಿಕೆ, ಸಾರಿಗೆ ಮತ್ತು ಆರೋಗ್ಯ ಕ್ಷೇತ್ರಗಳಲ್ಲಿಯೂ ಬಜೆಟ್ ಬಗ್ಗೆ ದೊಡ್ಡ ನಿರೀಕ್ಷೆಗಳಿವೆ.
ಕೈಗಾರಿಕೆಗಳು ಕೇವಲ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ, ರಾಜ್ಯದ ಎರಡನೇ ಹಾಗೂ ಮೂರನೇ ಹಂತದ ನಗರಗಳಿಗೂ ವಿಸ್ತರಿಸಬೇಕು ಎಂಬುದು ಉದ್ಯಮಿಗಳ ಅಭಿಪ್ರಾಯವಾಗಿದೆ.
ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ (MSME) ಪ್ರತ್ಯೇಕ ನೀತಿ ರೂಪಿಸಿ ಸಾಲ ಸೌಲಭ್ಯ ಹೆಚ್ಚಿಸಬೇಕು ಎಂಬ ಬೇಡಿಕೆಯೂ ಇದೆ.
ಸಾರಿಗೆ ಕ್ಷೇತ್ರದಲ್ಲಿ ಕೆಎಸ್‌ಆರ್‌ಟಿಸಿ (KSRTC) ಸೇರಿದಂತೆ ಸಾರಿಗೆ ನೌಕರರ ಬಾಕಿ ಇರುವ ವೇತನ ಪಾವತಿ ಹಾಗೂ ವೇತನ ಪರಿಷ್ಕರಣೆ ಕುರಿತು ಘೋಷಣೆ ಬರಬೇಕು ಎಂಬ ನಿರೀಕ್ಷೆಯಿದೆ.
ಆಟೋ, ಟ್ಯಾಕ್ಸಿ ಮತ್ತು ಲಾರಿ ಚಾಲಕರಿಗಾಗಿ ಅಭಿವೃದ್ಧಿ ನಿಗಮ ಸ್ಥಾಪಿಸುವುದರ ಜೊತೆಗೆ ಎಲೆಕ್ಟ್ರಿಕ್ ವಾಹನ ಖರೀದಿಗೆ ಸಹಾಯಧನ ನೀಡುವ ಸಾಧ್ಯತೆಯೂ ಇದೆ.
ಆರೋಗ್ಯ ಕ್ಷೇತ್ರದಲ್ಲಿ ಸರ್ಕಾರಿ ಆಸ್ಪತ್ರೆಗಳನ್ನು ಮೇಲ್ದರ್ಜೆಗೆ ಏರಿಸುವುದು, ಹೊಸ ಮೆಡಿಕಲ್ ಕಾಲೇಜುಗಳನ್ನು ಸ್ಥಾಪಿಸುವುದು ಹಾಗೂ ವೈದ್ಯಕೀಯ ಸೌಲಭ್ಯಗಳನ್ನು ವಿಸ್ತರಿಸುವಂತಹ ಘೋಷಣೆಗಳು ಬರಬಹುದು ಎಂದು ನಿರೀಕ್ಷಿಸಲಾಗಿದೆ.
ಒಟ್ಟಾರೆ ಈ ಬಜೆಟ್ ರಾಜ್ಯದ ಜನರ ನಿರೀಕ್ಷೆಗಳನ್ನು ಎಷ್ಟರ ಮಟ್ಟಿಗೆ ಪೂರೈಸುತ್ತದೆ ಎಂಬುದನ್ನು ಕಾದು ನೋಡಬೇಕಿದೆ.
ಇದನ್ನು ಓದಿ : https://vijayatimes.com/job-in-karnataka-police-department/