ಕನ್ನಡದಲ್ಲಿ ಬ್ಯಾಂಕಿಂಗ್ ಪರೀಕ್ಷೆ ಬರೆಯಲು ಅವಕಾಶ ನೀಡದ ಕೇಂದ್ರ ಸರ್ಕಾರದ ವಿರುದ್ಧ ಮಾಜಿ ಸಿಎಂ‌ ಸಿದ್ದರಾಮಯ್ಯ ಕಿಡಿ

ಬೆಂಗಳೂರು, ಜು. 13: ಕನ್ನಡದಲ್ಲಿ ಬ್ಯಾಂಕಿಂಗ್ ಪರೀಕ್ಷೆ ಬರೆಯಲು ಅವಕಾಶ ನೀಡದ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿರುವ ಮಾಜಿ ಸಿಎಂ‌ ಸಿದ್ದರಾಮಯ್ಯ, ಬ್ಯಾಂಕಿಂಗ್ ಸಿಬ್ಬಂದಿ ನೇಮಕಾತಿ ಪರೀಕ್ಷೆಗಳನ್ನು ಕನ್ನಡದಲ್ಲಿ ಬರೆಯಲು ಅವಕಾಶ ನೀಡದೆ ನರೇಂದ್ರ ಮೋದಿ ಸರ್ಕಾರ ಕನ್ನಡಿಗರಿಗೆ ದ್ರೋಹ ಬಗೆಯುತ್ತಾ ಬಂದಿದೆ ಎಂದು ಟೀಕಿಸಿದ್ದಾರೆ.

ಐಬಿಪಿಎಸ್ ಇದೀಗ ಹನ್ನೊಂದು ರಾಷ್ಟ್ರೀಕೃತ ಬ್ಯಾಂಕುಗಳಲ್ಲಿನ 3000 ಕಾರಕೂನ ಹುದ್ದೆಗಳಿಗೆ ಅರ್ಜಿ ಆಹ್ಹಾನಿಸಿದ್ದು ಇವುಗಳಲ್ಲಿ 407 ಹುದ್ದೆಗಳು ಕರ್ನಾಟಕ ರಾಜ್ಯಕ್ಕೆ ಸೇರಿದ್ದಾಗಿದೆ. ಕನ್ನಡಕ್ಕೆ ಆಗಿರುವ ಅನ್ಯಾಯದಿಂದಾಗಿ ತೀವ್ರ ನಿರುದ್ಯೋಗದ ಸಮಸ್ಯೆ ಎದುರಿಸುತ್ತಿರುವ ಕನ್ನಡಿಗ ಯುವಜನರು ಉದ್ಯೋಗದ ಅವಕಾಶದಿಂದ ವಂಚಿತರಾಗಲಿದ್ದಾರೆ.

2014ಕ್ಕಿಂತ ಮೊದಲು IBPS ನಡೆಸುತ್ತಿದ್ದ ಪರೀಕ್ಷೆಗಳಲ್ಲಿ ರಾಜ್ಯಭಾಷೆಗಳಲ್ಲಿಯೂ ಬರೆಯುವ ಅವಕಾಶ ಇತ್ತು. 2014ರಲ್ಲಿ ಬಿಜೆಪಿ ಸರ್ಕಾರ ನಿಯಮಾವಳಿಗೆ ತಿದ್ದುಪಡಿ ಮಾಡಿ ಇಂಗ್ಲೀಷ್ ಮತ್ತು ಹಿಂದಿಯೇತರ ಭಾಷಿಕ ಯುವಜನರಿಗೆ ಅನ್ಯಾಯ ಮಾಡಿದೆ. ಈ ಅನ್ಯಾಯವನ್ನು ಪ್ರತಿಭಟಿಸಿ ಹಿಂದಿನ ನಮ್ಮ ಸರ್ಕಾರ ಕೇಂದ್ರಕ್ಕೆ ಪತ್ರವನ್ನೂ ಬರೆದಿತ್ತು.

ಬ್ಯಾಂಕಿಂಗ್ ಪರೀಕ್ಷೆಗಳಲ್ಲಿ ಕನ್ನಡಿಗರಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ ನಮ್ಮ ಸರ್ಕಾರ ಕೇಂದ್ರ ಸರ್ಕಾರದ ಗಮನಸೆಳೆದ ನಂತರ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬ್ಯಾಂಕಿಂಗ್ ಪರೀಕ್ಷೆಗಳನ್ನು ಕನ್ನಡದಲ್ಲಿಯೂ ನಡೆಸುವ ಭರವಸೆಯನ್ನು ಲೋಕಸಭೆಯಲ್ಲಿ ನೀಡಿದ್ದರೂ ಆ ಭರವಸೆಯನ್ನು ಇಂದಿಗೂ ಈಡೇರಿಸಿಲ್ಲ. ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿ ಹೋಗಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತೆ ಮತ್ತೆ ಕನ್ನಡ-ಕರ್ನಾಟಕಕ್ಕೆ ಅನ್ಯಾಯ ಎಸಗುತ್ತಾ ಬಂದಿದ್ದಾರೆ. ಇದೀಗ ಬ್ಯಾಂಕಿಂಗ್ ಪರೀಕ್ಷೆಗಳಲ್ಲಿಯೂ ಸಚಿವರು ಈ ಅನ್ಯಾಯವನ್ನು ಮುಂದುವರಿಸಿದ್ದಾರೆ.

ತಮ್ಮನ್ನು ರಾಜ್ಯದ ಹುಲಿ-ಸಿಂಹಗಳೆಂದು ವಂದಿ-ಮಾಗದರಿಂದ ಘೋಷಣೆ ಕೂಗಿಸುತ್ತಿರುವ ರಾಜ್ಯದ ಮುಖ್ಯಮಂತ್ರಿ ಯಡಿಯೂರಪ್ಪ ಕರ್ನಾಟಕಕ್ಕೆ ಅನ್ಯಾಯ ಆಗುತ್ತಿರುವಾಗ ಮಾತ್ರ ಬೆದರಿದ ಇಲಿಯಾಗುತ್ತಾರೆ. ಬ್ಯಾಂಕಿಂಗ್ ಪರೀಕ್ಷೆಯಲ್ಲಿ ಕನ್ನಡಿಗರಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ ಯಡಿಯೂರಪ್ಪ ತಕ್ಷಣ ಮೋದಿ ಅವರ ಗಮನಸೆಳೆದು ಕನ್ನಡಿಗರಿಗೆ ನ್ಯಾಯ ಒದಗಿಸುವ ಮೂಲಕ ಬ್ಯಾಂಕಿಂಗ್ ಸಿಬ್ಬಂದಿ ನೇಮಕಾತಿ ಸಂಸ್ಥೆ (IBPS)ಯ ಇತ್ತೀಚಿನ ಸುತ್ತೋಲೆ ಈ ದ್ರೋಹಕ್ಕೆ ಸಾಕ್ಷಿ. ಕೇಂದ್ರ ಸರ್ಕಾರ ತಕ್ಷಣ ಗಮನಹರಿಸಿ ಕನ್ನಡಿಗರಿಗೆ ನ್ಯಾಯ ದೊರಕಿಸಿಕೊಡಬೇಕು ಎಂದು ಆಗ್ರಹಿಸಿದ್ದಾರೆ.

Exit mobile version