Good news for Karnataka Women Employees: Menstrual leave with pay will be available from now on
Bengaluru: ಕೆಲ ದಿನಗಳ ಹಿಂದಷ್ಟೇ ಮಹಿಳಾ ಸಿಬ್ಬಂದಿಗೆ ಮುಟ್ಟಿನ ರಜೆ ನೀಡುವುದರ ಸಾಧ್ಯಾಸಾಧ್ಯತೆ ಬಗ್ಗೆ ಗಮನಹರಿಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ (Supreme Court) ನಿರ್ದೇಶನ ನೀಡಿತ್ತು. ಉದ್ಯೋಗದಾತರು ಮುಟ್ಟಿನ ರಜೆ ನೀಡುವುದನ್ನು ಕಡ್ಡಾಯಗೊಳಿಸುವುದರಿಂದ ಮಹಿಳೆಯರಿಗೆ ಅನುಕೂಲವಾಗಬೇಕು.
ಅದರ ಬದಲಿಗೆ ಮುಟ್ಟಿನ ರಜೆ (Menstrual Leave) ನೀಡುವುದರಿಂದ ಉದ್ಯೋಗಗಳಲ್ಲಿ ಅವರ ಭಾಗವಹಿಸುವಿಕೆಗೆ ಪ್ರತಿಕೂಲವಾಗದಂತೆ ಗಮನಹರಿಸಬೇಕು ಎಂದು ಕೋರ್ಟ್ ಹೇಳಿತ್ತು. ಮುಟ್ಟಿನ ರಜೆಯಿಂದ ಮಹಿಳೆಯರಿಗೆ ಉದ್ಯೋಗಾವಕಾಶ ಕಡಿಮೆ ಆಗಿಬಿಟ್ಟರೆ ಎಂಬ ಆತಂಕವನ್ನೂ ಕೋರ್ಟ್ ವ್ಯಕ್ತಪಡಿಸಿತ್ತು.
ಅದರ ಬೆನ್ನಲ್ಲೇ ಇದೀಗ ಖಾಸಗಿ ಮತ್ತು ಸಾರ್ವಜನಿಕ ವಲಯದ ಸಂಸ್ಥೆಗಳಲ್ಲಿ ಮಹಿಳಾ ಉದ್ಯೋಗಿಗಳಿಗೆ ವಾರ್ಷಿಕವಾಗಿ 6 ದಿನಗಳ ವೇತನ ಸಹಿತ ಮುಟ್ಟಿನ ರಜೆಯನ್ನು ನೀಡಲು ನೀತಿ ರೂಪಿಸಲು ಕರ್ನಾಟಕ (Karnataka) ಸರ್ಕಾರ ಮುಂದಾಗಿದೆ. ಮುಟ್ಟಿನ ರಜೆ ಸಾಧ್ಯಾಸಾಧ್ಯತೆ ಪರಿಶೀಲಿಸಲು ರಚಿಸಲಾದ ಸಮಿತಿಯು ಸರ್ಕಾರಕ್ಕೆ ಸಲ್ಲಿಸಿದ ವರದಿಯ ಆಧಾರದಲ್ಲಿ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ವರದಿಯಾಗಿದೆ.
ಆರಂಭದಲ್ಲಿ ಖಾಸಗಿ ವಲಯಕ್ಕೆ ಮುಟ್ಟಿನ ರಜೆ ನೀತಿ ಪರಿಚಯಿಸಲು ಕರ್ನಾಟಕ ಸರ್ಕಾರ ಚಿಂತನೆ ನಡೆಸಿದೆ. ಪೂರ್ಣ ಪ್ರಮಾಣದಲ್ಲಿ ನೀತಿ ರೂಪಿಸಿದ ನಂತರ ಸರ್ಕಾರಿ ಇಲಾಖೆಗಳಲ್ಲಿ ಕಡ್ಡಾಯಗೊಳಿಸಲು ಚಿಂತನೆ ನಡೆಸಲಾಗಿದೆ ಎಂದು ಮೊಹ್ಸಿನ್ (Mohins) ಹೇಳಿದ್ದಾರೆ. ಮುಟ್ಟಿನ ರಜೆ ವಿಚಾರವಾಗಿ ಒಂದು ನೀತಿಯನ್ನು ಹೊಂದುವ ಅಗತ್ಯತೆಯ ಬಗ್ಗೆ ಸುಪ್ರೀಂ ಕೋರ್ಟ್ ಆದೇಶದಲ್ಲಿ ವ್ಯಕ್ತಪಡಿಸಿದ್ದ ಅಭಿಪ್ರಾಯಕ್ಕೆ ಅನುಗುಣವಾಗಿ ಈ ಕ್ರಮಕ್ಕೆ ಮುಂದಾಗಿದ್ದೇವೆ ಎಂದು ಮೊಹ್ಸಿನ್ ಹೇಳಿದ್ದಾರೆ.