ಕಾಂಗ್ರೆಸ್‌ನಲ್ಲಿ ಮುಸ್ಲಿಂ ಸಮುದಾಯಕ್ಕೆ ಉಳಿಗಾಲವಿಲ್ಲ – ಹೆಚ್‌ ಡಿ ಕುಮಾರಸ್ವಾಮಿ

ಹೆಚ್‌ ಡಿ ಕುಮಾರಸ್ವಾಮಿ

ಬೆಂಗಳೂರು ಅ 16 : ಕಾಂಗ್ರಸ್‌ ಪಕ್ಷದಲ್ಲಿ ಅಲ್ಪಸಂಖ್ಯಾತರಿಗೆ ಉಳಿಗಾಲವಿಲ್ಲ, ಕಾಂಗ್ರೆಸ್‌ನಲ್ಲಿ  ಅಲ್ಪಸಂಖ್ಯಾತರನ್ನು ಮುಗಿಸುವ ಕೆಲಸವಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

 ಕಳೆದ ಒಂದು ವಾರದಿಂದ ಟ್ವೀಟರ್ ನಲ್ಲಿ ಪರಸ್ಪರ ಕಾಲೆಳೆಯುತಿದ್ದ ಇಬ್ಬರು ಮಾಜಿ ಮುಖ್ಯಮಂತ್ರಿಗಳ ವಾಕ್ಸಮರ ಮುಂದುವರೆದಿದೆ. ಸಿಂದಗಿ ಮತ್ತು ಹಾನಗಲ್ ಕ್ಷೇತ್ರಗಳಲ್ಲಿ ಅಲ್ಪಸಂಖ್ಯಾತ ಅಭ್ಯರ್ಥಿಗಳನ್ನು ಕಣಕ್ಕಿಳಿಸಿರುವ ವಿಚಾರವಾಗಿ ಜೆಡಿಎಸ್ ವಿರುದ್ಧ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಮಾಡಿರುವ ಆರೋಪಗಳಿಗೆ ಜೆಡಿಎಸ್ ನಾಯಕ ಎಚ್ ಡಿ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ಸ್ವಾರ್ಥ, ಸ್ವಜನ ಪಕ್ಷಪಾತ, ತಮ್ಮ ಬೆಂಬಲಿಗರ ರಾಜಕೀಯ ಅಭಿವೃದ್ಧಿಗಾಗಿ ಪಕ್ಷಕ್ಕಾಗಿ ಅಹರ್ನಿಷಿ ದುಡಿದ ಅಲ್ಪಸಂಖ್ಯಾತ ನಾಯಕರನ್ನು ಗುರಿ ಇಟ್ಟು ಮುಗಿಸಲಾಗುತ್ತಿದೆ! ಎಂದು ಗಂಭೀರ ಆರೋಪ ಮಾಡಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಎಚ್ ಡಿ ಕುಮಾರಸ್ವಾಮಿ, ಅಲ್ಪಸಂಖ್ಯಾತರ ಕಲ್ಯಾಣದ ಪೇಟೆಂಟ್ ತೆಗೆದುಕೊಂಡಂತೆ ಪೋಸು ಕೊಡುವ ʼಸಿದ್ದಹಸ್ತʼ ಶೂರನ ನಿಜಬಣ್ಣ ಬಯಲು ಮಾಡುವ ಸಂದರ್ಭ ಬಂದಿದೆ. ಸ್ವಾರ್ಥ, ಸ್ವಜನ ಪಕ್ಷಪಾತ, ತಮ್ಮ ಬೆಂಬಲಿಗರ ರಾಜಕೀಯ ಅಭಿವೃದ್ಧಿಗಾಗಿ ಪಕ್ಷಕ್ಕಾಗಿ ಅಹರ್ನಿಷಿ ದುಡಿದ ಅಲ್ಪಸಂಖ್ಯಾತ ನಾಯಕರನ್ನು ಗುರಿ ಇಟ್ಟು ಮುಗಿಸಲಾಗುತ್ತಿದೆ! ಎಂದು ಗಂಭೀರ ಆರೋಪ ಮಾಡಿದ್ದಾರೆ.

ತನ್ನೆಲ್ಲ ಸಿದ್ದಕಲೆ, ಸಿದ್ದಸೂತ್ರಗಳೆನ್ನೆಲ್ಲ ಪೋಣಿಸಿ ʼಅಹಿಂದʼ ಎಂದು ಜನರನ್ನು ‘ಅಡ್ಡದಾರಿ’ ಹಿಡಿಸಿದ ʼಸಿದ್ದಹಸ್ತ ಶೂರರುʼ ತಮ್ಮ ಸ್ವಪಕ್ಷದಲ್ಲೇ ಮುಸ್ಲೀಂ ನಾಯಕರನ್ನು ಒಬ್ಬೊಬ್ಬರನ್ನಾಗಿಯೇ ಟಾರ್ಗೆಟ್ ಮಾಡುತ್ತಾ ʼಅಲ್ಪಸಂಖ್ಯಾತರ ಅಂತ್ಯ ರಾಜಕಾರಣʼದ ಟರ್ಮಿನೇಟರ್ ಆಗಿ ಹೊರಹೊಮ್ಮಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.

ನಂಬಿ ಅಧಿಕಾರ ಕೊಟ್ಟ ಪಕ್ಷದ ಕತ್ತನ್ನೇ ಕುಯ್ಯುವ, ಅಧಿಕಾರಕ್ಕಾಗಿ ಏನು ಬೇಕಾದರೂ ಮಾಡುವ ʼಸಿದ್ದಹಸ್ತ ಸೂತ್ರಧಾರಿʼಯ ಒಳ ರಾಜಕೀಯಕ್ಕೆ ಬಲಿಯಾಗುತ್ತಿರುವ ಅಲ್ಪಸಂಖ್ಯಾತ ನಾಯಕರ ದೊಡ್ಡ ಪಟ್ಟಿಯೇ ಇದೆ. ಕಾಂಗ್ರೆಸ್ʼನಲ್ಲಿ ನಡೆದಿರುವ ಅಲ್ಪಸಂಖ್ಯಾತ ನಾಯಕರ ʼರಾಜಕೀಯ ನರಮೇಧʼಕ್ಕೆ ಯಾರು ಕಾರಣ ಎಂದು ಜನರಿಗೆ ಗೊತ್ತಾಗಲಿ ಎಂದಿದ್ದಾರೆ.

Exit mobile version