ಬೆಂಗಳೂರು ನ 10 : ವಿಧಾನ ಪರಿಷತ್ ಚುನಾವಣೆಗೆ ದಿನಾಂಕ ಘೋಷಣೆಯಾದ ಬೆನ್ನಲ್ಲೇ ಚುನಾವಣೆಗೆ ಜೆಡಿಎಸ್ ಪಕ್ಷದ ಅಭ್ಯರ್ಥಿಗಳನ್ನು ಶೀಘ್ರವೇ ಅಂತಿಮಗೊಳಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತಿಳಿಸಿದರು.
ಪಕ್ಷದ ರಾಜ್ಯ ಕಚೇರಿಯಲ್ಲಿ ನಡೆಯುತ್ತಿರುವ ಜನತಾ ಪರ್ವ 1.0 ದ ಎರಡನೇ ಹಂತದ ಸಂಘಟನಾ ಕಾರ್ಯಗಾರ ‘ಜನತಾ ಸಂಗಮ’ದ ಮೂರನೆ ದಿನ ಮಾಧ್ಯಮಗಳ ಜತೆ ಅವರು ಮಾತನಾಡಿದರು.
ಮೈಸೂರಿನಲ್ಲಿ ಎರಡು ಕ್ಷೇತ್ರಗಳು ಇವೆ. ಮೈಸೂರಿನ ಒಂದು ಕ್ಷೇತ್ರ ಹಾಗೂ ಮಂಡ್ಯ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ಬೆಂಗಳೂರು ಗ್ರಾಮಾಂತರ, ರಾಮನಗರಕ್ಕೆ ಅಭ್ಯರ್ಥಿಗಳ ಪಟ್ಟಿಯನ್ನು ಆದಷ್ಟು ಬೇಗ ಬಿಡುಗಡೆ ಮಾಡುತ್ತೇವೆ ಎಂದು ಅವರು ಹೇಳಿದರು.
ತುಮಕೂರಿನ ನಾಯಕರ ಸಭೆ ಕೂಡ ಮಂಗಳವಾರ ಮಾಡಿದ್ದೇನೆ. ಟಿಕೆಟ್ ಆಕಾಂಕ್ಷಿಗಳ ಪಟ್ಟಿಯನ್ನು ಇಟ್ಟುಕೊಂಡಿದ್ದೇನೆ. ಅಂತಿಮ ವರದಿ, ಪರಿಶೀಲನೆ ಮುಗಿದ ಮೇಲೆ ಅಭ್ಯರ್ಥಿಗಳ ಆಯ್ಕೆ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು. ಉಳಿದ ಜಿಲ್ಲೆಗಳ ಸಭೆಯನ್ನೂ ಆದಷ್ಟು ಬೇಗ ಮಾಡಲಾಗುವುದು ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು
ಉಳಿದಂತೆ ಹಾಸನದ ವಿಚಾರ ಅಂತಿಮವಾಗಿ ದೇವೇಗೌಡರು ತೀರ್ಮಾನ ಮಾಡುತ್ತಾರೆ. ರಾಯಚೂರು, ಬಿಜಾಪುರ, ಕಲಬುರ್ಗಿಯಲ್ಲೂ ನಮ್ಮ ಅಭ್ಯರ್ಥಿಗಳನ್ನು ನಿಲ್ಲಿಸಬೇಕು ಎಂಬ ಮನವಿ ಇದೆ. ಪರಿಶೀಲನೆ ಮಾಡುತ್ತಿದ್ದೇವೆ ಎಂದು ಅವರು ಮಾಹಿತಿ ನೀಡಿದರು.