ಗ್ಯಾರಂಟಿಗಳನ್ನು ಕೊಟ್ಟೆವೆಂದು ಬೀಗುತ್ತಿರುವ ಕಾಂಗ್ರೆಸ್ (Congress) ಸರಕಾರಕ್ಕೆ ರೈತನ ಬದುಕಿಗೆ ಗ್ಯಾರಂಟಿ ಕೊಡಲು ಸಾಧ್ಯವಿಲ್ಲವೇ? ಇದೇನಾ ‘ಕರ್ನಾಟಕ ಮಾದರಿ’? ರಾಜ್ಯದಲ್ಲಿ ಕೃಷಿ ಇಲಾಖೆ ಎನ್ನುವುದು ಇದೆಯಾ? ಅದು ಕೃಷಿ ಇಲಾಖೆಯಾ, ಕಸಾಯಿಖಾನೆಯಾ? ಕಂದಾಯಕ್ಕೂ ಆದಾಯದ ಚಿಂತೆಯಾ? ರಾಜ್ಯಕ್ಕೆ ಬರ, ಕೆಲವರಿಗೆ ಅದೇ ವರ..!! ಇದು ನೈಜಸ್ಥಿತಿ ಎಂದು ಜೆಡಿಎಎಸ್ (JDS) ನಾಯಕ ಎಚ್.ಡಿ.ಕುಮಾರಸ್ವಾಮಿ @HDKumaraswamy ಅವರು ಟೀಕಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಬೆಳ್ಳಂ ಬೆಳಗ್ಗೆಯೇ ಈ ವರದಿ ಓದಿದಾಕ್ಷಣ ಬಹಳ ಸಂಕಟವಾಯಿತು, ಕಣ್ಣಾಲಿಗಳು ತುಂಬಿ ಬಂದವು. ಇನ್ನೆಷ್ಟು ದಿನ ಇಂತಹ ಸಾವುಗಳನ್ನು ನೋಡಬೇಕು. ಕೇವಲ ಪ್ರಚಾರ, ಅಧಿಕಾರದ ಸುಖ ಅನುಭವಿಸುತ್ತಿರುವ ಕಾಂಗ್ರೆಸ್ ಸರಕಾರಕ್ಕೆ ಅನ್ನದಾತನ ಸಾವಿನ ಕೇಕೆ ಸವಿಗಾನವಾಗಿದೆಯಾ? ಇವರಿಗೆ ವಾಸ್ತವ ಅರಿವಿಲ್ಲವೆ? ಆಗಸ್ಟ್, ಸೆಪ್ಟೆಂಬರ್ (September) ನಲ್ಲಿ ಕೆಲವೆಡೆ ಮಳೆಯಾದರೂ ಪ್ರಯೋಜನವಾಗಿಲ್ಲ. ಆಗ್ಗೆ ಬೆಳೆಗಳು ನಾಶವಾಗಿವೆ. ತುರ್ತಾಗಿ ಕೇಂದ್ರಕ್ಕೆ ಮನವಿ ಮಾಡಬೇಕಿದ್ದ ಸರಕಾರ ಮಾರ್ಗಸೂಚಿ ನೆಪದಲ್ಲಿ ಕಾಲಹರಣ ಮಾಡುತ್ತಿದೆ. ಕಾಲಹರಣವೂ ಜೀವಹರಣವೂ ಬೇರೆ ಬೇರೆ ಅಲ್ಲ. ತುರ್ತಾಗಿ ಜಿಲ್ಲಾಧಿಕಾರಿಗಳ ಖಾತೆಯಲ್ಲಿರುವ ಹಣ ಬಿಡುಗಡೆ ಮಾಡಬಹುದಲ್ಲವೇ? ಎಂದು ಪ್ರಶ್ನಿಸಿದ್ದಾರೆ.
ಇನ್ನೊಂದು ಟ್ವೀಟ್ನಲ್ಲಿ, ಬೆಳೆ ವಿಮೆಯೂ ಅನ್ನದಾತರ ಆಪತ್ತಿಗೆ ಆಗುತ್ತಿಲ್ಲ,ಅದರ ಬಗ್ಗೆ ಅವರಿಗೆ ವಿಶ್ವಾಸವೇ ಇಲ್ಲ. ಅವರು ಸಾವಿನ ದವಡೆಗೆ ಬೀಳುತ್ತಿದ್ದರೆ ಅಧಿಕಾರಿಗಳು ಅರ್ಹ-ಅನರ್ಹ ಸಾವು(!!) ಎಂದು ವಿಭಜಿಸಿ ಲೆಕ್ಕ ಹಾಕಿಕೊಂಡು ಕೂತಿದ್ದಾರೆ.ಸಾವಿನಲ್ಲೂ ಅರ್ಹತೆ, ಅನರ್ಹತೆ ಹುಡುಕುವ ಈ ಕ್ರೂರತೆಗೆ ಏನೆಂದು ಹೇಳುವುದು? ರೈತರ ಸಾವುಗಳೆಂದರೆ ಇವರಿಗೆ ಇಷ್ಟು ಹಗುರವೇ? ನನ್ನ ಮನವಿ ಇಷ್ಟೇ; ರೈತರು ಎದೆಗುಂದಬಾರದು. ನಿಮ್ಮ ದುಡುಕಿನ ನಿರ್ಧಾರ ನಿಮ್ಮ ಕುಟುಂಬವನ್ನು ಅನಾಥಗೊಳಿಸುತ್ತದೆ, ನಿಮ್ಮೊಂದಿಗೆ ನಾನಿದ್ದೇನೆ.
ಸರಕಾರ ಇಂಥಹ ಆತ್ಮಹತ್ಯೆ ಪ್ರಕರಣಗಳಿಗೆ ಇತಿಶ್ರೀ ಹಾಡಲೇಬೇಕು. ಶಾಶ್ವತವಾಗಿ ಪರಿಹಾರೋಪಾಯ ಕಂಡುಕೊಳ್ಳಬೇಕು. ಜೀವಬಿಟ್ಟ ರೈತ ಕುಟುಂಬಗಳಿಗೆ ಮಾನವೀಯತೆಯ ನೆರವು ಕೊಡಬೇಕು. ವಿಳಂಬ ಸರಿಯಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ. ಸದ್ಯ ರಾಜ್ಯದಲ್ಲಿ ತೀವ್ರ ಮಳೆ ಕೊರತೆ ಉಂಟಾಗಿದ್ದು 160ಕ್ಕೂ ಹೆಚ್ಚು ತಾಲೂಕುಗಳು ಬರಪೀಡಿತವಾಗಿದ್ದು, ಇದನ್ನು ಘೋಷಣೆ ಮಾಡಲು ರಾಜ್ಯ ಸರ್ಕಾರ ವಿಳಂಬ ಮಾಡುತ್ತಿರುವುದು ತೀವ್ರ ಟೀಕೆಗೆ ಕಾರಣವಾಗಿದೆ.